ಗಾಂಧೀಜಿ, ಶಾಸ್ತ್ರೀಜಿ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ: ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ
ವಿಜಯನಗರ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರೀಜಿ ಅವರ ತತ್ವ, ಆದರ್ಶ ಹಾಗೂ ಚಿಂತನೆಗಳನ್ನು ಕೇವಲ ಜಯಂತಿ ಆಚರಣೆಗೆ ಸೀಮಿತಗೊಳಿಸದೆ, ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಹೇಳಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಜಿಲ್ಲಾಡಳಿತ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಆಯೋಜಿಸಿದ್ದ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರೀಜಿ ಜಯಂತಿ ಕಾರ್ಯಕ್ರಮದಲ್ಲಿ ಇಬ್ಬರು ಮಹನೀಯರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಸಲ್ಲಿಸಿ ಅವರು ಮಾತನಾಡಿದರು.
ಗಾಂಧೀಜಿ ಹಾಗೂ ಶಾಸ್ತ್ರೀಜಿ ಅವರು ತೋರಿಸಿಕೊಟ್ಟ ಮಾರ್ಗದಲ್ಲಿ ಸಾಗುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಗಾಂಧೀಜಿ ಕಂಡ ‘ಗ್ರಾಮ ಸ್ವರಾಜ್ಯ’ದ ಪರಿಕಲ್ಪನೆಯನ್ನು ಸಾಕಾರಗೊಳಿಸಲು ಸರ್ಕಾರದ ಜೊತೆಗೆ ಸಮಾಜದ ಪ್ರತಿಯೊಬ್ಬ ನಾಗರಿಕರೂ ಕೈಜೋಡಿಸಬೇಕು ಎಂದು ಅವರು ಕರೆ ನೀಡಿದರು.
ಅಪರ ಜಿಲ್ಲಾಧಿಕಾರಿ ಪಿ.ಎನ್.ಲೋಕೇಶ್ ಮಾತನಾಡಿ, ಸರಳ ಜೀವನ ಹಾಗೂ ಉನ್ನತ ಆಲೋಚನೆ ಗಾಂಧೀಜಿ ಮತ್ತು ಶಾಸ್ತ್ರೀಜಿ ಅವರ ಜೀವನದ ಪ್ರಮುಖ ತತ್ವಗಳಾಗಿದ್ದವು. ತಲುಪಬೇಕಾದ ಗುರಿ ಉತ್ತಮವಾಗಿರುವುದರ ಜೊತೆಗೆ, ಆ ಗುರಿ ತಲುಪುವ ಮಾರ್ಗವೂ ಅಷ್ಟೇ ಶ್ರೇಷ್ಠವಾಗಿರಬೇಕು ಎಂಬುದನ್ನು ಮಹಾತ್ಮರು ತಮ್ಮ ಬದುಕಿನ ಮೂಲಕ ತೋರಿಸಿಕೊಟ್ಟಿದ್ದಾರೆ. ಅವರ ತತ್ವ ಮತ್ತು ಚಿಂತನೆಗಳನ್ನು ಪ್ರತಿಯೊಬ್ಬರೂ ರೂಢಿಸಿಕೊಳ್ಳಬೇಕು ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್.ಜಾಹ್ನವಿ, ಜಿಲ್ಲಾ ಪಂಚಾಯತಿ ಉಪಕಾರ್ಯದರ್ಶಿ ಕೆ.ತಿಮ್ಮಪ್ಪ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಮಂಜುನಾಥ, ವಿವಿಧ ಇಲಾಖೆಗಳ ಅಧಿಕಾರಿಗಳು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.