‘ವಂದೇ ಮಾತರಂ’ ಗೀತೆಗೆ ಅಗೌರವ ಆರೋಪ: ಹೊಸಪೇಟೆಯಲ್ಲಿ ಬಿಜೆಪಿ ಯುವ ಮೋರ್ಚಾ ಪ್ರತಿಭಟನೆ

Update: 2026-08-16 22:39 IST

ಹೊಸಪೇಟೆ: ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ‘ವಂದೇ ಮಾತರಂ’ ರಾಷ್ಟ್ರೀಯ ಗೀತೆಗೆ ಕಾಂಗ್ರೆಸ್‌ನ ಹಿರಿಯ ನಾಯಕರು ಅಗೌರವ ತೋರಿದ್ದಾರೆ ಎಂದು ಆರೋಪಿಸಿ ವಿಜಯನಗರ ಜಿಲ್ಲಾ ಬಿಜೆಪಿ ಯುವ ಮೋರ್ಚಾ ವತಿಯಿಂದ ನಗರದ ಪುನೀತ್ ವೃತ್ತದಲ್ಲಿ ರವಿವಾರ ಪ್ರತಿಭಟನೆ ನಡೆಯಿತು.

ದೆಹಲಿಯ ಎಐಸಿಸಿ ಕಚೇರಿಯಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ‘ವಂದೇ ಮಾತರಂ’ ಗೀತೆ ಗಾಯನದ ವೇಳೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಡೆ ಖಂಡನೀಯ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯ ನೇತೃತ್ವ ವಹಿಸಿದ್ದ ಬಿಜೆಪಿ ಯುವ ಮೋರ್ಚಾ ಜಿಲ್ಲಾ ಅಧ್ಯಕ್ಷ ಕಿಚಿಡಿ ಕೊಟ್ರೇಶ್ ಮಾತನಾಡಿ, “‘ವಂದೇ ಮಾತರಂ’ ದೇಶದ ಹೆಮ್ಮೆ ಹಾಗೂ ದೇಶಭಕ್ತಿಯ ಸಂಕೇತ. ರಾಷ್ಟ್ರೀಯ ಭಾವನೆಗಳಿಗೆ ಧಕ್ಕೆ ತರುವ ಯಾವುದೇ ರೀತಿಯ ವರ್ತನೆಯನ್ನು ಸಹಿಸಲು ಸಾಧ್ಯವಿಲ್ಲ. ರಾಜಕೀಯ ಕಾರಣಗಳಿಗಾಗಿ ಇಂತಹ ವರ್ತನೆಗಳನ್ನು ಸಮರ್ಥಿಸಿಕೊಳ್ಳಬಾರದು” ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಕಾರ್ಯಕರ್ತರು ಕಾಂಗ್ರೆಸ್ ನಾಯಕರ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಯುವ ಮೋರ್ಚಾ ಜಿಲ್ಲಾ ಉಪಾಧ್ಯಕ್ಷರಾದ ಸೂರಿ ಬಂಗಾರು, ಪ್ರಿಯಾ ಕೆಮ್ಮಣ್ಣನವರ್, ಎಚ್. ರವಿಕಿರಣ್, ಪ್ರಧಾನ ಕಾರ್ಯದರ್ಶಿ ಸಚೀನ್ ಕುಮಾರ್, ಮಂಡಲ ಪ್ರಧಾನ ಕಾರ್ಯದರ್ಶಿ ಮಧುರಚೆನ್ನಶಾಸ್ತ್ರೀ, ಗೌಳಿ ಬಸವರಾಜ್ ಸೇರಿದಂತೆ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News