ಹೊಸಪೇಟೆ/ವಿಜಯನಗರ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕುರಿತು ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ನಟ ಹಾಗೂ ಸಾಮಾಜಿಕ ಕಾರ್ಯಕರ್ತ ಪ್ರಕಾಶ್ ರಾಜ್, ಬೆಳಗಾವಿಯ ಒಂದು ಮತಗಟ್ಟೆಯಲ್ಲಿ ಸುಮಾರು 200 ಮುಸ್ಲಿಂ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಅಳಿಸಲು ಯತ್ನಿಸಲಾಗಿದೆ ಎಂದು ಆರೋಪಿಸಿದರು.

ಹೊಸಪೇಟೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬೆಳಗಾವಿಯ ಒಂದು ಬೂತ್‌ನಲ್ಲಿ ಸುಮಾರು 200 ಮತದಾರರ ಹೆಸರುಗಳನ್ನು ತೆಗೆದುಹಾಕುವಂತೆ ಅರ್ಜಿಗಳು ಸಲ್ಲಿಕೆಯಾಗಿದ್ದವು ಎಂದು ಹೇಳಿದರು. ಈ ಸಂಬಂಧ ಅಲ್ಲಿನ ಬೂತ್ ಮಟ್ಟದ ಅಧಿಕಾರಿಗೆ ಕರೆ ಮಾಡಿ, ಬಿಜೆಪಿಯ ಪರಾಜಿತ ಅಭ್ಯರ್ಥಿಯೊಬ್ಬರು ಒತ್ತಡ ಹೇರಿದ್ದಾರೆ ಎಂಬ ಮಾಹಿತಿ ದೊರೆತಿದೆ ಎಂದು ಆರೋಪಿಸಿದರು. ಈ ಕುರಿತು ದೂರು ದಾಖಲಾಗಿದ್ದು, ಜಿಲ್ಲಾಧಿಕಾರಿ ಮಟ್ಟದಲ್ಲಿ ತನಿಖೆ ನಡೆಯಲಿದೆ ಎಂದರು.

ಅರ್ಜಿಗಳಲ್ಲಿದ್ದ ಮುದ್ರಿತ ನಮೂನೆಗಳು ಕಾರ್ಪೊರೇಷನ್‌ನಿಂದ ಬಂದಿವೆ ಎಂದು ಹೇಳಲಾಗಿತ್ತು. ಆದರೆ ಪರಿಶೀಲನೆಯ ವೇಳೆ ಅವು ಕಾರ್ಪೊರೇಷನ್‌ನಿಂದ ಬಂದ ಅರ್ಜಿಗಳಲ್ಲ, ಬಿಜೆಪಿಗೆ ಸಂಬಂಧಿಸಿದ ವ್ಯಕ್ತಿಗಳಿಂದ ಸಲ್ಲಿಕೆಯಾಗಿವೆ ಎಂದು ತಿಳಿದುಬಂದಿದೆ ಎಂದು ಪ್ರಕಾಶ್ ರಾಜ್ ಆರೋಪಿಸಿದರು. SIR ಹೆಸರಿನಲ್ಲಿ ರಾಜಕೀಯ ಉದ್ದೇಶದ ಪ್ರಯತ್ನ ನಡೆಯುತ್ತಿದೆ ಎಂದು ಅವರು ದೂರಿದರು.

SIR ಪ್ರಕ್ರಿಯೆಯನ್ನೇ ರದ್ದುಪಡಿಸಬೇಕು :

SIR ಪ್ರಕ್ರಿಯೆ ನಡೆಸಿರುವುದೇ ತಪ್ಪಾಗಿದೆ ಎಂದು ಆರೋಪಿಸಿದ ಪ್ರಕಾಶ್ ರಾಜ್, ಬದುಕಿರುವವರನ್ನೇ ಮೃತಪಟ್ಟವರು ಎಂದು ಗುರುತಿಸಿರುವುದು ಹಾಗೂ ಜೀವಂತ ಮತದಾರರ ಹೆಸರುಗಳನ್ನು ಪಟ್ಟಿಯಿಂದ ಕೈಬಿಟ್ಟಿರುವ ಘಟನೆಗಳು ನಡೆದಿವೆ. ಹೆಸರು ಕೈಬಿದ್ದವರಿಗೆ ಹೊಸದಾಗಿ ಫಾರಂ–6 ಸಲ್ಲಿಸಿ ಮತದಾರರ ಪಟ್ಟಿಗೆ ಸೇರ್ಪಡೆಯಾಗುವಂತೆ ಸೂಚಿಸಲಾಗುತ್ತಿದೆ ಎಂದು ಆರೋಪಿಸಿದರು.

SIR ಪ್ರಕ್ರಿಯೆಯನ್ನು ಸಂಪೂರ್ಣವಾಗಿ ರದ್ದುಪಡಿಸಬೇಕು ಹಾಗೂ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಅಮಾನತುಗೊಳಿಸಬೇಕು ಎಂದು ಅವರು ಆಗ್ರಹಿಸಿದರು.

ದೆಹಲಿ, ಹರಿಯಾಣ ಹಾಗೂ ಪಶ್ಚಿಮ ಬಂಗಾಳದಲ್ಲಿ ನಡೆದ ಬೆಳವಣಿಗೆಗಳನ್ನು ಉಲ್ಲೇಖಿಸಿದ ಪ್ರಕಾಶ್ ರಾಜ್, SIR ಪ್ರಕ್ರಿಯೆಯ ಹಿಂದೆ ರಾಜಕೀಯ ಉದ್ದೇಶವಿದೆ. ವಿವಿಧ ರಾಜ್ಯಗಳಲ್ಲಿ ಈ ಪ್ರಕ್ರಿಯೆಯನ್ನು ಒಂದೇ ಮಾದರಿಯಲ್ಲಿ ಜಾರಿಗೊಳಿಸಲಾಗುತ್ತಿದೆ ಎಂದು ಹೇಳಿದರು.

SIR ಪ್ರಕ್ರಿಯೆಯಲ್ಲಿನ ಲೋಪದೋಷಗಳ ಕುರಿತು ಸಾಮಾಜಿಕ ಜಾಲತಾಣಗಳು ಹಾಗೂ ಸ್ಥಳೀಯ ಮಾಧ್ಯಮಗಳ ಮೂಲಕ ಮಾಹಿತಿ ಹಂಚಿಕೊಳ್ಳುವಂತೆ ಸಾರ್ವಜನಿಕರಿಗೆ ಕರೆ ನೀಡಿದ ಅವರು, ಸೆಪ್ಟೆಂಬರ್ 30ರಂದು ರಾಜ್ಯದ 100 ಮತಗಟ್ಟೆಗಳಲ್ಲಿ ಸಾಕ್ಷ್ಯಾಧಾರಗಳೊಂದಿಗೆ ಸುದ್ದಿಗೋಷ್ಠಿ ನಡೆಸಲಾಗುವುದು ಎಂದು ತಿಳಿಸಿದರು.

ಅಕ್ಟೋಬರ್ 1ರಂದು ದೆಹಲಿಯಲ್ಲಿ ದಾಖಲೆಗಳನ್ನು ಬಿಡುಗಡೆ ಮಾಡಲಾಗುವುದು. ಅಕ್ಟೋಬರ್ 3ರಂದು ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಒತ್ತಾಯಿಸಲಾಗುವುದು. ಅಕ್ಟೋಬರ್ 15ರಂದು ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಅವರು ಘೋಷಿಸಿದರು.

ಕಾರ್ಯಕ್ರಮದಲ್ಲಿ ಬಣ್ಣದ ಮನೆ ಸೋಮಶೇಖರ್, ಹಿರಿಯ ರೈತ ಹೋರಾಟಗಾರರು, ಎಸ್‌ಡಿಪಿಐ ಜಿಲ್ಲಾ ಅಧ್ಯಕ್ಷರು, ಕಾರ್ಯಕರ್ತರು ಹಾಗೂ ಸಮಾಜಮುಖಿ ಚಿಂತಕರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor