×
Ad

ಮತದಾರರ ಹಕ್ಕುಗಳ ರಕ್ಷಣೆಗೆ ಕಾಂಗ್ರೆಸ್ ಕಾರ್ಯಕರ್ತರು ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು: ಸಿರಾಜ್ ಶೇಖ್

Update: 2026-06-12 00:05 IST

ಹೊಸಪೇಟೆ/ವಿಜಯನಗರ: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಸಂದರ್ಭದಲ್ಲಿ ಯಾವುದೇ ಅರ್ಹ ಮತದಾರರ ಹೆಸರು ಮತದಾರರ ಪಟ್ಟಿಯಿಂದ ಕೈಬಿಡದಂತೆ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಬೂತ್ ಮಟ್ಟದ ಏಜೆಂಟರು ಜಾಗೃತಿಯಿಂದ ಕಾರ್ಯನಿರ್ವಹಿಸಬೇಕು ಎಂದು ವಿಜಯನಗರ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಸಿರಾಜ್ ಶೇಖ್ ಕರೆ ನೀಡಿದರು.

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಹಾಗೂ ವಿಜಯನಗರ, ಕೊಪ್ಪಳ, ಬಳ್ಳಾರಿ ನಗರ ಮತ್ತು ಬಳ್ಳಾರಿ ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ಸಮಿತಿಗಳ ಸಂಯುಕ್ತ ಆಶ್ರಯದಲ್ಲಿ ಬೂತ್ ಮಟ್ಟದ ಅಧ್ಯಕ್ಷರು ಹಾಗೂ ಅನುಭವಿ BLA-2 ಏಜೆಂಟರುಗಳಿಗೆ ಆಯೋಜಿಸಿದ್ದ ತರಬೇತಿ ಶಿಬಿರದಲ್ಲಿ ಅವರು ಮಾತನಾಡಿದರು.

ಕಾಂಗ್ರೆಸ್ ಪಕ್ಷದ ಸಂಘಟನೆಗೆ ಕಾರ್ಯಕರ್ತರೇ ಬೆನ್ನೆಲುಬಾಗಿದ್ದು, ಹಿಂದುಳಿದ ವರ್ಗಗಳು, ಪರಿಶಿಷ್ಟ ಜಾತಿ-ಪಂಗಡಗಳು, ಅಲ್ಪಸಂಖ್ಯಾತರು ಹಾಗೂ ಸಾಮಾನ್ಯ ಜನರ ಬೆಂಬಲದಿಂದಲೇ ಪಕ್ಷ ರಾಜ್ಯದಲ್ಲಿ ಬಲಿಷ್ಠವಾಗಿ ಬೆಳೆದಿದೆ ಎಂದು ಹೇಳಿದರು. ಈ ಹಿನ್ನೆಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಕುರಿತು ಜನರಲ್ಲಿ ಇರುವ ಗೊಂದಲಗಳನ್ನು ನಿವಾರಿಸಿ, ಅರ್ಹ ಮತದಾರರ ಹೆಸರುಗಳು ಪಟ್ಟಿಯಿಂದ ಕೈಬಿಡದಂತೆ ಕಾರ್ಯಕರ್ತರು ವಿಶೇಷ ಕಾಳಜಿ ವಹಿಸಬೇಕು ಎಂದು ತಿಳಿಸಿದರು.

ಮತದಾರರ ಪಟ್ಟಿಯಲ್ಲಿ ಹೆಸರುಗಳ ಸೇರ್ಪಡೆ, ತಿದ್ದುಪಡಿ ಹಾಗೂ ಉಳಿವಿನ ಪ್ರಕ್ರಿಯೆ ಕುರಿತು ಜನರಿಗೆ ಅರಿವು ಮೂಡಿಸುವ ಜವಾಬ್ದಾರಿ ಕಾಂಗ್ರೆಸ್ ಕಾರ್ಯಕರ್ತರ ಮೇಲಿದೆ. ವಿಶೇಷವಾಗಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳು, ಅಲ್ಪಸಂಖ್ಯಾತರು ಹಾಗೂ ಸಮಾಜದ ದುರ್ಬಲ ವರ್ಗಗಳ ಮತದಾರರ ಹಕ್ಕುಗಳು ಸಂರಕ್ಷಿತವಾಗಿರುವಂತೆ ಬೂತ್ ಮಟ್ಟದಲ್ಲಿ ನಿಗಾ ವಹಿಸಬೇಕು ಎಂದು ಅವರು ಮನವಿ ಮಾಡಿದರು.

ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಎಐಸಿಸಿ ಕಾರ್ಯದರ್ಶಿ ಗೋಪಿನಾಥ್ ಪಳನಿಯಪ್ಪನ್, ಮತದಾರರ ಪಟ್ಟಿಯ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ನಾಗರಿಕರ ಹೆಸರು ಕೈಬಿಡದಂತೆ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಹಾಗೂ ಬೂತ್ ಮಟ್ಟದ ಏಜೆಂಟರು ಹೆಚ್ಚಿನ ಜಾಗರೂಕತೆಯಿಂದ ಕಾರ್ಯನಿರ್ವಹಿಸುವ ಅಗತ್ಯವಿದೆ ಎಂದರು. ಮತದಾರರ ನೋಂದಣಿ ಮತ್ತು ಪರಿಷ್ಕರಣೆ ಸಂಬಂಧಿತ ದಾಖಲೆಗಳ ಪರಿಶೀಲನೆ, ಅರ್ಜಿಗಳ ಸಲ್ಲಿಕೆ ಹಾಗೂ ಅಗತ್ಯ ಕ್ರಮಗಳ ಕುರಿತು ಕಾರ್ಯಕರ್ತರು ಜನರಿಗೆ ನೆರವಾಗಬೇಕು ಎಂದು ಹೇಳಿದರು.

ತರಬೇತಿ ಶಿಬಿರದಲ್ಲಿ ಜಾಗೃತಿ ಕರ್ನಾಟಕ ಸಂಸ್ಥೆಯ ಅಧಮ್ ಖಾನ್ ಅವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ, ಮತದಾರರ ಹೆಸರು ಸೇರ್ಪಡೆ, ತಿದ್ದುಪಡಿ ಹಾಗೂ ದಾಖಲೆಗಳ ಸಲ್ಲಿಕೆ ಸೇರಿದಂತೆ ಚುನಾವಣಾ ಆಯೋಗದ ವಿವಿಧ ಪ್ರಕ್ರಿಯೆಗಳ ಕುರಿತು ವಿವರವಾದ ಮಾಹಿತಿ ನೀಡಿದರು. ಪ್ರತಿ ಹಂತದಲ್ಲಿಯೂ ಯಾವ ದಾಖಲೆಗಳನ್ನು ಸಲ್ಲಿಸಬೇಕು, ಯಾವ ರೀತಿಯಲ್ಲಿ ಅರ್ಜಿಗಳನ್ನು ಭರ್ತಿ ಮಾಡಬೇಕು ಎಂಬುದನ್ನು ಪ್ರಾತ್ಯಕ್ಷಿಕೆಯ ಮೂಲಕ ವಿವರಿಸಿದರು.

ಕಾರ್ಯಕ್ರಮದಲ್ಲಿ ವಿಜಯನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿರಾಜ್ ಶೇಖ್, ಕೊಪ್ಪಳ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಮರೇಗೌಡ ಬೈರಾಪುರ, ಬಳ್ಳಾರಿ ನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆಲ್ಲಂ ಪ್ರಶಾಂತ್, ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ್, ಸಿರುಗುಪ್ಪ ಶಾಸಕ ಬಿ.ಎಂ. ನಾಗರಾಜ್, ಕೂಡ್ಲಿಗಿ ಶಾಸಕ ಡಾ. ಎನ್.ಟಿ. ಶ್ರೀನಿವಾಸ, ಹರಪನಹಳ್ಳಿ ಶಾಸಕ ಎಂ.ಪಿ. ಲತಾ ಮಲ್ಲಿಕಾರ್ಜುನ, ಮಹಿಳಾ ಕಾಂಗ್ರೆಸ್ ರಾಜ್ಯ ಕಾರ್ಯದರ್ಶಿ ಕವಿತಾ ಈಶ್ವರ ಸಿಂಗ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ನಿಂಬಗಲ್ ರಾಮಕೃಷ್ಣ ಸೇರಿದಂತೆ ಹಲವು ಮುಖಂಡರು, ಪದಾಧಿಕಾರಿಗಳು ಮತ್ತು ಬೂತ್ ಮಟ್ಟದ ಕಾರ್ಯಕರ್ತರು ಉಪಸ್ಥಿತರಿದ್ದರು.

ʼನಮ್ಮ ನಡೆ ಮತದಾರರ ಮತಗಳ ರಕ್ಷಣೆಯ ಕಡೆʼ ಎಂಬ ಘೋಷಣೆಯಡಿ ನಡೆದ ಈ ತರಬೇತಿ ಶಿಬಿರದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಪಾತ್ರ, ಜವಾಬ್ದಾರಿ ಹಾಗೂ ಜನಜಾಗೃತಿ ಕಾರ್ಯಗಳ ಕುರಿತು ಸಮಗ್ರ ಮಾರ್ಗದರ್ಶನ ನೀಡಲಾಯಿತು.



 


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News