×
Ad

ಪಡಿತರ ಅಕ್ಕಿ ಕಳ್ಳಸಾಗಣೆಗಾರರ ವಿರುದ್ದ ಕಠಿಣ ಕ್ರಮ ವಹಿಸಿ: ವಿಜಯನಗರ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಕೆ.ಶಿವಮೂರ್ತಿ

ಪಂಚ ಗ್ಯಾರಂಟಿ ಯೋಜನೆಗಳ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆ

Update: 2025-10-16 22:32 IST

ವಿಜಯನಗರ(ಹೊಸಪೇಟೆ), ಅನ್ನಭಾಗ್ಯ ಯೋಜನೆಯಡಿ ವಿತರಿಸುವ ಪಡಿತರ ಅಕ್ಕಿಯನ್ನು ಕಳ್ಳಸಾಗಣೆ ಮಾಡುತ್ತಿರುವವರ ವಿರುದ್ಧ ಕಠಿಣ ಕ್ರಮ ವಹಿಸಬೇಕು ಮತ್ತು ಸರ್ಕಾರದ ಮಾರ್ಗಸೂಚಿಯಂತೆ ಪಡಿತರ ವಿತರಣೆ ಮಾಡುವಂತೆ ಅಧಿಕಾರಿಗಳಿಗೆ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಕೆ.ಶಿವಮೂರ್ತಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ಜಿಲ್ಲಾ ಪಂಚಾಯತ್ ಕಚೇರಿಯ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಜಿಲ್ಲಾಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಗುರುವಾರ ಅವರು ಮಾತನಾಡಿದರು, ಅನ್ನಭಾಗ್ಯ ಯೋಜನೆಯಡಿ ವಿತರಿಸುವ ಪಡಿತರ ಧಾನ್ಯಗಳನ್ನು ಮಾರಾಟಕ್ಕೆ ಅವಕಾಶವಿರುವುದಿಲ್ಲ. ಆಹಾರ ಸಾಮಾಗ್ರಿಗಳ ವಿತರಣೆಗೂ ಮುನ್ನ ಅದರ ಗುಣಮಟ್ಟವನ್ನು ಪರಿಶೀಲಿಸಬೇಕು. ಅನ್ನಭಾಗ್ಯ ಯೋಜನೆಯ ನಾಮಫಲಕವನ್ನು ಪಡಿತರ ವಿತರಣೆ ಕೆಂದ್ರಗಳಲ್ಲಿ ಅಳವಡಿಸಬೇಕು. ಕೆಲವು ಜನರು ಪಡಿತರ ಅಕ್ಕಿಯನ್ನು ಅಕ್ರಮವಾಗಿ ಕಾಳಸಂತೆಯಲ್ಲಿ ಮಾರಾಟ ಮತ್ತು ಕಳ್ಳಸಾಗಣೆ ಮಾಡುತ್ತಿದ್ದಾರೆ ಎಂಬ ದೂರುಗಳು ವರದಿಯಾಗಿದೆ. ರಾತ್ರಿ ವೇಳೆ ಹೊಸಪೇಟೆಯ ಚಿತ್ತವಾಡ್ಗಿ ಭಾಗದಲ್ಲಿ ಪಡಿತರ ಅಕ್ಕಿ ಸಾಗಣೆ ಮಾಡಲಾಗುತ್ತಿದೆ ಎಂದು ದೂರು ಬಂದಿದೆ. ಅದ್ದರಿಂದ ಅಧಿಕಾರಿಗಳು ಅಂತಹವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದರು.

ಆಹಾರ ಮತ್ತು ನಾಗರಿಕರ ಸರಬರಾಜು ಇಲಾಖೆ ಉಪನಿರ್ದೇಶಕ ರಿಯಾಜ್ ಅಹ್ಮದ್ ಇದಕ್ಕೆ ಪ್ರತಿಕ್ರಿಯಿಸಿ ಈಗಾಗಲೇ ಜಿಲ್ಲೆಯಲ್ಲಿ ಅಕ್ರಮ ಕಳ್ಳ ಸಾಗಣೆ ಮಾಡುವವರು ವಿರುದ್ದ 31 ಪ್ರಕರಣಗಳನ್ನು ದಾಖಲು ಮಾಡಲಾಗಿದೆ. ಮತ್ತು ಚಿತ್ತವಾಡ್ಗಿಯಲ್ಲಿ ನಡೆಯುವ ಅಕ್ರಮದ ಬಗ್ಗೆ ಶೀಘ್ರ ಕ್ರಮ ಕೈಗೊಳ್ಳಲಾಗುವುದು ಎಂದರು.

ಗೃಹಜ್ಯೋತಿ ಯೋಜನೆಯಡಿ ನೋಂದಣಿಯಾಗದಿರುವ ಅರ್ಜಿಗಳನ್ನು ಪರಿಶೀಲಿಸಿ, ತಾಂತ್ರಿಕ ಸಮಸ್ಯೆಗಳಿದ್ದಲ್ಲಿ ಅವುಗಳನ್ನು ಸರಿಪಡಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ಯೋಜನೆಗಳ ಅನುಷ್ಠಾನದಲ್ಲಿ ಜಿಲ್ಲೆಯು ಉತ್ತಮ ಪ್ರಗತಿ ಸಾಧಿಸಿದೆ. ಮುಂದೆಯೂ ಅದೇ ರೀತಿ ಕಾರ್ಯಕ್ರಮಗಳು ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಬೇಕು. ಐದು ಗ್ಯಾರಂಟಿ ಯೋಜನೆಯ ಫಲಾನುಭವಿಗಳ ಜತೆಗೆ ತಾಲೂಕುವಾರು ಸಭೆ ಮಾಡಬೇಕು. ಅಧಿಕಾರಿಗಳು ನ್ಯಾಯಬೆಲೆ ಅಂಗಡಿ ಮಾಲೀಕರ ಜತೆಗೆ ಸಭೆ ನಡಸಿ ಸರ್ಕಾರದ ಮಾರ್ಗಸೂಚಿಯಂತೆ ಪಡಿತರ ವಿತರಣೆ ಮಾಡುವಂತೆ ತಿಳಿಸಬೇಕು.

ಜಿಲ್ಲೆಯ ಎಲ್ಲಾ ಬಸ್ ನಿಲ್ದಾಣದಲ್ಲಿ ಸ್ವಚ್ಛತೆ ಕಾಪಾಡಿ ಕೊಳ್ಳಬೇಕು ಮತ್ತು ಶೌಚಾಲಯದ ನೈರ್ಮಲ್ಯತೆಗೆ ಆದ್ಯತೆ ನೀಡಬೇಕು ಎಂದರು.

ಈ ವೇಳೆ ಗ್ಯಾರಂಟಿ ಯೋಜನೆಯ ಸದಸ್ಯರು ಮಾತನಾಡಿ ಗ್ರಾಮೀಣ ಮತ್ತು ನಗರ ಭಾಗದ ವಿದ್ಯಾರ್ಥಿಗಳು ಶಾಲಾ, ಕಾಲೇಜಿಗೆ ತೆರಳಲು ಸೂಕ್ತ ಸಾರಿಗೆ ವ್ಯವಸ್ಥೆ ಕಲ್ಪಿಸಬೇಕು . ಹುಣ್ಣಿಮೆ ಮತ್ತು ಅಮಾವಾಸೆಯಂದು ಧಾರ್ಮಿಕ ಸ್ಥಳಗಳಿಗೆ ತೆರಳುವ ಬಸ್‌ಗಳ ಸಂಚಾರ ಸಂಖ್ಯೆಯನ್ನು ಹೆಚ್ಚಿಸಬೇಕು ಹಾಗೂ ಸರ್ಕಾರಕ್ಕೆ ಜಿಲ್ಲೆಗೆ ಹೊಸ ಬಸ್‌ಗಳನ್ನು ನೀಡುವಂತೆ ಮನವಿ ಸಲ್ಲಿಸಬೇಕು ಎಂದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕಿ ಎಸ್.ಶ್ವೇತಾ ಮಾತನಾಡಿ, ಗೃಹಲಕ್ಷ್ಮೀ ಯೋಜನೆಯಡಿ ಜಿಲ್ಲೆಯ 2,98,543 ಫಲಾನುಭವಿಗಳು ನೊಂದಣಿಯಾಗಿದ್ದಾರೆ. ಜುಲೈ ಮಾಹೆಯ ಅನುದಾನ ಬಿಡುಗಡೆಯಾಗಿದ್ದು, ಇನ್ನೂ ಮೂರು ದಿನದೊಳಗೆ ಡಿಬಿಟಿ ಮೂಲಕ ಫಲಾನುಭವಿಗಳಿಗೆ ಪಾವತಿಸಲಾಗುತ್ತದೆ. ಅಗಸ್ಟ್ ಮತ್ತು ಸೆಪ್ಟಂಬರ್ ಮಾಹೆ ಹಣವನ್ನು ಅನುದಾನ ಬಿಡುಗಡೆಯ ನಂತರ ಪಾವತಿಸಲಾಗುವುದು ಎಂದು ಮಾಹಿತಿ ನೀಡಿದರು.

ಈ ವೇಳೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನೋಂಗ್ಜಾಯ್ ಮೊಹಮ್ಮದ್ ಅಲಿ ಅಕ್ರಮ್ ಷಾ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಜಿಲ್ಲಾ ಮಟ್ಟದ ಪದಾಧಿಕಾರಿಗಳಾದ ಕೆ.ಬದಾವಲಿ, ಚಂದ್ರಪ್ಪ ಹುಲಿಕಟ್ಟಿ, ಕೆ.ಎಸ್.ಶಾಂತನಗೌಡ, ಹೆಚ್.ಜಂದಿಸಾಹೇಬ್. ಹಾಗೂ ಸದಸ್ಯರು ಭಾಗ್ಯಲಕ್ಷ್ಮೀ ಭರಾಡ, ಎಸ್.ಯರ್ರಿಸ್ವಾಮಿ, ವೆಂಕಟರಮಣ.ಡಿ, ಪ್ರಭಾಕರ್, ಪರುಶುರಾಮ, ಗುರುವಿನ ರವೀಂದ್ರ, ಪಿ.ಟಿ.ಭರತ, ಮಂಜುನಾಥ, ಶೇಕ್ ಮಹಮ್ಮದ್ ಜೀಲಾನ್, ಅನಿಲ್ ಕುಮಾರ ಹೊಸಮನಿ, ಜೆಸ್ಕಾಂ ಕಾರ್ಯನಿರ್ವಾಹಕ ಅಭಿಯಂತರು ಸತೀಶ್ ಕುಮಾರ್ ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು, ಜಿಪಂ ಸಿಬ್ಬಂದಿಗಳು ಉಪಸ್ಥಿತರಿದ್ದರು.




 


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News