×
Ad

Hosapete: ಛಲವಾದಿ ಸಮುದಾಯಕ್ಕೆ ಡಿಸಿಎಂ, ಸಚಿವ ಸ್ಥಾನ ನೀಡಲು ಜಿಲ್ಲಾ ಛಲವಾದಿ ಮಹಾಸಭಾ ಆಗ್ರಹ

Update: 2026-06-01 20:38 IST

ಹೊಸಪೇಟೆ/ವಿಜಯನಗರ: ರಾಜ್ಯ ಸಚಿವ ಸಂಪುಟದಲ್ಲಿ ಛಲವಾದಿ ಸಮುದಾಯಕ್ಕೆ ಸೂಕ್ತ ಪ್ರಾತಿನಿಧ್ಯ ಕಲ್ಪಿಸಿ, ಸಮುದಾಯದ ಹಿರಿಯ ನಾಯಕರಿಗೆ ಉಪಮುಖ್ಯಮಂತ್ರಿ ಹಾಗೂ ಸಚಿವ ಸ್ಥಾನಗಳನ್ನು ನೀಡುವಂತೆ ಒತ್ತಾಯಿಸಿ ಜಿಲ್ಲಾ ಛಲವಾದಿ ಮಹಾಸಭಾ ನೇತೃತ್ವದಲ್ಲಿ ಹೊಸಪೇಟೆಯಲ್ಲಿ ಪ್ರತಿಭಟನೆ ನಡೆಸಲಾಯಿತು.

ನಗರದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ ಮುಖಂಡರು, ಕಾಂಗ್ರೆಸ್ ಸರ್ಕಾರದಲ್ಲಿ ಛಲವಾದಿ ಸಮುದಾಯದ ಶಾಸಕರಿಗೆ ಉನ್ನತ ಹುದ್ದೆಗಳನ್ನು ನೀಡಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಜಿಲ್ಲಾ ಛಲವಾದಿ ಮಹಾಸಭಾ ಅಧ್ಯಕ್ಷ ಸೋಮಶೇಖರ ಬಣ್ಣದಮನೆ ಅವರು, ಛಲವಾದಿ ಸಮುದಾಯವು ಹಿಂದಿನಿಂದಲೂ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುತ್ತಾ ಬಂದಿದೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲು ಸಮುದಾಯದ ಕೊಡುಗೆ ಮಹತ್ತರವಾಗಿದೆ. ಆದ್ದರಿಂದ ಸಮುದಾಯದ ಆಶೋತ್ತರಗಳಿಗೆ ಸ್ಪಂದಿಸಿ ಸೂಕ್ತ ರಾಜಕೀಯ ಪ್ರಾತಿನಿಧ್ಯ ನೀಡಬೇಕಾಗಿದೆ ಎಂದು ಹೇಳಿದರು.

ಸಮುದಾಯದ ಹಿರಿಯ ಶಾಸಕರಾದ ಡಾ. ಜಿ. ಪರಮೇಶ್ವರ ಹಾಗೂ ಡಾ. ಎಚ್.ಸಿ. ಮಹಾದೇವಪ್ಪ ಅವರಿಗೆ ಉಪಮುಖ್ಯಮಂತ್ರಿ (ಡಿಸಿಎಂ) ಸ್ಥಾನ ನೀಡಬೇಕು. ಹಾಗೆಯೇ ಶಾಸಕರಾದ ಪ್ರಿಯಾಂಕ್ ಖರ್ಗೆ, ಪಿ.ಎಂ. ನರೇಂದ್ರಸ್ವಾಮಿ ಹಾಗೂ ಪ್ರಸಾದ್ ಅಬ್ಬಯ್ಯ ಅವರಿಗೆ ಸಚಿವ ಸ್ಥಾನ ನೀಡಿ ಸಮುದಾಯಕ್ಕೆ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿದರು.

ಸರ್ಕಾರವು ಛಲವಾದಿ ಸಮುದಾಯದ ಬೇಡಿಕೆಗಳನ್ನು ಗಂಭೀರವಾಗಿ ಪರಿಗಣಿಸಿ, ಸಚಿವ ಸಂಪುಟದಲ್ಲಿ ಸಮುದಾಯಕ್ಕೆ ಸಮರ್ಪಕ ಸ್ಥಾನಮಾನ ಕಲ್ಪಿಸಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಮಹಾಸಭಾದ ಪದಾಧಿಕಾರಿಗಳು, ಮುಖಂಡರು ಹಾಗೂ ಸಮುದಾಯದ ಸದಸ್ಯರು ಭಾಗವಹಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News