ಸರಕಾರಿ ನೌಕರರು ‘ಟೀಮ್ ಕರ್ನಾಟಕ’ವಾಗಿ ಕೆಲಸ ಮಾಡಿ : ಸಿಎಂ ಡಿ.ಕೆ.ಶಿವಕುಮಾರ್

ಸರಕಾರಿ ನೌಕರರೊಂದಿಗೆ ಸಂವಾದ ಕಾರ್ಯಕ್ರಮ : ಬರ ಪರಿಸ್ಥಿತಿ, ಜನಸೇವೆ ಹಾಗೂ ಎಸ್‌ಐಆರ್‌ ಕುರಿತು ಮಾಹಿತಿ ಪಡೆದ ಸಿಎಂ

Update: 2026-08-11 17:25 IST

ವಿಜಯನಗರ (ಹೊಸಪೇಟೆ) : ಸರ್ಕಾರಿ ನೌಕರರು ಸರ್ಕಾರ ಮತ್ತು ಸಾರ್ವಜನಿಕರ ನಡುವಿನ ಸೇತುವೆಯಾಗಿದ್ದು, ಜನರಿಗೆ ಸರ್ಕಾರದ ಯೋಜನೆಗಳ ಸೌಲಭ್ಯ ತಲುಪಿಸುವಲ್ಲಿ ಪ್ರಮುಖ ಪಾತ್ರ ವಹಿಸಬೇಕು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.

ರಾಜ್ಯದ 750 ಸ್ಥಳಗಳಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ಸುಮಾರು 5.50 ಲಕ್ಷ ಸರ್ಕಾರಿ ನೌಕರರನ್ನು ಉದ್ದೇಶಿಸಿ ಮಾತನಾಡಿದ ಅವರು, ಆಡಳಿತದಲ್ಲಿ ಯಾವುದೇ ರೀತಿಯ ಭ್ರಷ್ಟಾಚಾರವನ್ನು ಸಹಿಸುವುದಿಲ್ಲ. ಅಧಿಕಾರಿಗಳು ಮತ್ತು ಸಿಬ್ಬಂದಿ ಪಾರದರ್ಶಕವಾಗಿ ಕರ್ತವ್ಯ ನಿರ್ವಹಿಸಿ, ಕಚೇರಿ ವೇಳೆಯಲ್ಲಿ ಸಾರ್ವಜನಿಕರಿಗೆ ಲಭ್ಯವಿರಬೇಕು ಎಂದರು.

ಪ್ರತಿ ತಿಂಗಳ ಮೊದಲ ಹಾಗೂ ಮೂರನೇ ಶನಿವಾರ ‘ಪ್ರಜಾ ಸೇವೆ’ ಇಲಾಖೆಯ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಜಿಲ್ಲಾ ಉಸ್ತುವಾರಿ ಸಚಿವರು ಪ್ರತಿ ತಿಂಗಳು ತಮ್ಮ ಜಿಲ್ಲೆಯ ಎರಡು ತಾಲೂಕುಗಳಲ್ಲಿ ಕಾರ್ಯಕ್ರಮ ನಡೆಸಿ, ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ಸೂಚಿಸಿದರು.

ಹೊಸಪೇಟೆ ವಿಧಾನಸಭಾ ಕ್ಷೇತ್ರದ ಬರ ಪರಿಸ್ಥಿತಿ ಕುರಿತು ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಅವರಿಂದ ಮಾಹಿತಿ ಪಡೆದ ಸಿಎಂ, ಜಿಲ್ಲೆಯಲ್ಲಿ ಶೇ.60ರಷ್ಟು ಮಳೆ ಕೊರತೆಯಾಗಿದ್ದು, ಬಿತ್ತನೆಯಾದ ಕೃಷಿ ಭೂಮಿಯಲ್ಲಿ ಶೇ.80ರಷ್ಟು ಬೆಳೆ ಹಾನಿಯಾಗಿದೆ ಎಂಬ ಮಾಹಿತಿ ಪಡೆದರು. ಗ್ರಾಮೀಣ ಜನರು ವಲಸೆ ಹೋಗದಂತೆ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಒದಗಿಸುವುದು ಸೇರಿದಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಹೊಸಪೇಟೆ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಗತಿ ಬಗ್ಗೆಯೂ ಮುಖ್ಯಮಂತ್ರಿ ಮಾಹಿತಿ ಪಡೆದರು. ಕ್ಷೇತ್ರದಲ್ಲಿ 2,52,288 ಮತದಾರರಿದ್ದು, ಗೈರು, ಸ್ಥಳಾಂತರಗೊಂಡ ಹಾಗೂ ಮೃತ ಮತದಾರರ ವಿವರಗಳನ್ನು ಚುನಾವಣಾ ಆಯೋಗದ ಮಾರ್ಗಸೂಚಿಯಂತೆ ಪರಿಶೀಲಿಸಲಾಗುತ್ತಿದೆ ಎಂದು ತಹಶೀಲ್ದಾರ್ ಮಾಹಿತಿ ನೀಡಿದರು.

“ಗ್ರಾಮ ಮಟ್ಟದಿಂದ ರಾಜ್ಯಮಟ್ಟದವರೆಗೆ ಎಲ್ಲರೂ ಒಗ್ಗಟ್ಟಿನಿಂದ ‘ಟೀಮ್ ಕರ್ನಾಟಕ’ವಾಗಿ ಕಾರ್ಯನಿರ್ವಹಿಸಬೇಕು” ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕರೆ ನೀಡಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News