×
Ad

Harapanahalli | ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ಎನ್‌ಎಸ್‌ಯುಐನಿಂದ ಪ್ರತಿಭಟನೆ

Update: 2026-06-17 20:04 IST

ಹರಪನಹಳ್ಳಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವರು ರಾಜೀನಾಮೆ ನೀಡಬೇಕು ಹಾಗೂ ಪ್ರಕರಣದಲ್ಲಿ ಭಾಗಿಯಾದವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿ ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ (ಎನ್‌ಎಸ್‌ಯುಐ) ತಾಲೂಕು ಘಟಕದ ವತಿಯಿಂದ ಬುಧವಾರ ಪ್ರತಿಭಟನೆ ನಡೆಸಲಾಯಿತು.

ಈ ವೇಳೆ ಮಾತನಾಡಿದ ಎನ್‌ಎಸ್‌ಯುಐ ತಾಲೂಕು ಅಧ್ಯಕ್ಷ ಅಬುಸಾಲೇಹ, ದೇಶದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯವನ್ನು ನಿರ್ಧರಿಸುವ ನೀಟ್ ಪರೀಕ್ಷೆಯಲ್ಲಿ ಪ್ರಶ್ನೆಪತ್ರಿಕೆ ಸೋರಿಕೆಯಂತಹ ಗಂಭೀರ ಘಟನೆಗಳು ಸಂಭವಿಸಿರುವುದು ಶಿಕ್ಷಣ ವ್ಯವಸ್ಥೆಯ ಮೇಲಿನ ನಂಬಿಕೆಗೆ ಧಕ್ಕೆ ತಂದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರಶ್ನೆಪತ್ರಿಕೆ ಸೋರಿಕೆಗೆ ಕಾರಣರಾದ ವ್ಯಕ್ತಿಗಳು, ಅಧಿಕಾರಿಗಳು ಹಾಗೂ ಸಂಘಟಿತ ಜಾಲಗಳ ವಿರುದ್ಧ ತ್ವರಿತ ಮತ್ತು ಕಠಿಣ ಕಾನೂನು ಕ್ರಮ ಜರುಗಿಸಬೇಕು. ಪ್ರಕರಣದ ಕುರಿತು ಸ್ವತಂತ್ರ ಹಾಗೂ ಪಾರದರ್ಶಕ ತನಿಖೆ ನಡೆಸಿ ಸತ್ಯಾಂಶವನ್ನು ಸಾರ್ವಜನಿಕರ ಮುಂದೆ ತರಬೇಕು ಎಂದು ಒತ್ತಾಯಿಸಿದರು.

ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು. ಪರೀಕ್ಷಾ ವ್ಯವಸ್ಥೆಯಲ್ಲಿ ನಿರಂತರ ವಿವಾದಗಳಿಗೆ ಕಾರಣವಾಗುತ್ತಿರುವ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಕಾರ್ಯವೈಖರಿಯನ್ನು ಸಮಗ್ರವಾಗಿ ಪರಿಶೀಲಿಸಿ, ಅಗತ್ಯ ಸುಧಾರಣೆಗಳನ್ನು ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು.

ಶಿಕ್ಷಣದ ಹೆಸರಿನಲ್ಲಿ ವಿದ್ಯಾರ್ಥಿಗಳು ಮತ್ತು ಪೋಷಕರಿಂದ ಅಧಿಕ ಶುಲ್ಕ ವಸೂಲಿ ಮಾಡುತ್ತಿರುವ ಕೋಚಿಂಗ್ ಕೇಂದ್ರಗಳ ಮೇಲೆ ಕಟ್ಟುನಿಟ್ಟಿನ ನಿಯಂತ್ರಣ ಹೇರಬೇಕು. ಕೋಚಿಂಗ್ ಸಂಸ್ಥೆಗಳ ಶುಲ್ಕ, ಜಾಹೀರಾತು ಮತ್ತು ಕಾರ್ಯನಿರ್ವಹಣೆಗೆ ಸ್ಪಷ್ಟ ನಿಯಮಗಳನ್ನು ರೂಪಿಸಿ ಶೋಷಣೆಗೆ ಕಡಿವಾಣ ಹಾಕಬೇಕು ಎಂದು ಹೇಳಿದರು.

ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಸುರಕ್ಷಿತ ಹಾಗೂ ಪಾರದರ್ಶಕ ಪರೀಕ್ಷಾ ವ್ಯವಸ್ಥೆಯನ್ನು ರೂಪಿಸುವಂತೆ ಒತ್ತಾಯಿಸಿ, ತಹಶೀಲ್ದಾರ್ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು.

ಪ್ರತಿಭಟನೆಯಲ್ಲಿ ಎನ್‌ಎಸ್‌ಯುಐ ರಾಜ್ಯ ಪ್ರಧಾನ ಕಾರ್ಯದರ್ಶಿ ವೆಂಕಟೇಶ ನಾಯ್ಕ್ ಸೇರಿದಂತೆ ರಾಜು, ಮೋಹನ್, ಗಣೇಶ್, ಯಶವಂತ, ಬೀರೇಶ, ರಮೇಶ್, ಶಿವರಾಜ್, ಹನುಮಂತ ಫರ್ಜನ್, ಶಫೀವುಲ್ಲ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News