ಹರಪನಹಳ್ಳಿ: ತಾಲೂಕಿನ ಕನ್ನಾಯಕನಹಳ್ಳಿ ಗ್ರಾಮಕ್ಕೆ ತಕ್ಷಣ ಬಸ್ ಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಬುಧವಾರ ಹರಪನಹಳ್ಳಿ–ಹೊಳಲು ಮುಖ್ಯ ರಸ್ತೆಯಲ್ಲಿ ಸಾರಿಗೆ ಬಸ್ ತಡೆದು ಪ್ರತಿಭಟನೆ ನಡೆಸಿದರು.

ಗ್ರಾಮದ 100ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಮಹಿಳೆಯರು ಹಾಗೂ ಗ್ರಾಮಸ್ಥರು ಪ್ರತಿಭಟನೆಯಲ್ಲಿ ಭಾಗವಹಿಸಿ, ಹಲವು ವರ್ಷಗಳಿಂದ ಗ್ರಾಮಕ್ಕೆ ಸಮರ್ಪಕ ಸಾರಿಗೆ ವ್ಯವಸ್ಥೆ ಇಲ್ಲದಿರುವುದರಿಂದ ಎದುರಾಗುತ್ತಿರುವ ಸಮಸ್ಯೆಗಳ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು.

ಸ್ವಾತಂತ್ರ್ಯ ಬಂದಾಗಿನಿಂದಲೂ ಕನ್ನಾಯಕನಹಳ್ಳಿ ಗ್ರಾಮಕ್ಕೆ ಸರ್ಕಾರಿ ಬಸ್ ಸಂಪರ್ಕ ಕಲ್ಪಿಸಿಲ್ಲ. ಇದು ಜನಪ್ರತಿನಿಧಿಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾಕ್ಷಿಯಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಗ್ರಾಮದಲ್ಲಿ ಸುಮಾರು 1,000 ಜನಸಂಖ್ಯೆ ಹಾಗೂ 300ಕ್ಕೂ ಹೆಚ್ಚು ಮನೆಗಳಿವೆ. ಆದರೆ ವಿದ್ಯಾರ್ಥಿಗಳು ಪ್ರತಿದಿನ ಶಾಲೆ ಮತ್ತು ಕಾಲೇಜಿಗೆ ತೆರಳಲು ಸುಮಾರು 3 ಕಿಲೋಮೀಟರ್ ಕಾಲ್ನಡಿಗೆಯಲ್ಲಿ ಮುಖ್ಯ ರಸ್ತೆಯವರೆಗೆ ಹೋಗಬೇಕಾದ ಪರಿಸ್ಥಿತಿ ಇದೆ. ನೇರ ಬಸ್ ಸಂಪರ್ಕವಿಲ್ಲದ ಕಾರಣ ವಿದ್ಯಾರ್ಥಿಗಳು, ಮಹಿಳೆಯರು, ವೃದ್ಧರು ಹಾಗೂ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಗ್ರಾಮಸ್ಥರು ಅಳಲು ತೋಡಿಕೊಂಡರು.

ಸಾರಿಗೆ ಸೌಲಭ್ಯದ ಕೊರತೆಯಿಂದ ವಿದ್ಯಾರ್ಥಿಗಳು ಸಮಯಕ್ಕೆ ಸರಿಯಾಗಿ ಶಾಲಾ-ಕಾಲೇಜುಗಳಿಗೆ ತಲುಪಲು ಸಾಧ್ಯವಾಗುತ್ತಿಲ್ಲ. ಶಿಕ್ಷಣಕ್ಕೂ ಅಡಚಣೆ ಉಂಟಾಗುತ್ತಿದ್ದು, ತುರ್ತು ಸಂದರ್ಭಗಳಲ್ಲಿ ಆಸ್ಪತ್ರೆ ಸೇರಿದಂತೆ ಅಗತ್ಯ ಸೇವೆಗಳಿಗೆ ತೆರಳಲು ಗ್ರಾಮಸ್ಥರು ಖಾಸಗಿ ವಾಹನಗಳನ್ನೇ ಅವಲಂಬಿಸಬೇಕಾಗಿದೆ ಎಂದು ಅವರು ಹೇಳಿದರು.

ಗ್ರಾಮಕ್ಕೆ ಬಸ್ ಸಂಪರ್ಕ ಕಲ್ಪಿಸುವಂತೆ ಹಲವು ಬಾರಿ ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರೂ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ. ಗ್ರಾಮಸ್ಥರ ಬಹುದಿನಗಳ ಬೇಡಿಕೆಯಾಗಿರುವ ಬಸ್ ಸೇವೆಯನ್ನು ಕೂಡಲೇ ಆರಂಭಿಸಿ, ಕನ್ನಾಯಕನಹಳ್ಳಿ ಗ್ರಾಮಕ್ಕೆ ನಿಯಮಿತ ಬಸ್ ಸಂಚಾರ ಕಲ್ಪಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಬಸ್ ಸೌಲಭ್ಯವನ್ನು ತಕ್ಷಣ ಕಲ್ಪಿಸದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಎಚ್ಚರಿಕೆ ನೀಡಿದರು.

ಪ್ರತಿಭಟನೆಯಲ್ಲಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಕೆ. ಅಶೋಕ್, ಗ್ರಾಮ ಪಂಚಾಯಿತಿ ಸದಸ್ಯರಾದ ಡಿಗಾನಾಯ್ಕ್ ಹಾಗೂ ಪ್ರಕಾಶ್ ನಾಯ್ಕ್, ಮುಖಂಡರಾದ ಭೋವಿ ಹಾಲೇಶ್, ಎಂ. ರವಿ, ಹನುಮಂತಪ್ಪ, ಲಕ್ಕಪ್ಪ ಸೇರಿದಂತೆ ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು.

ಸ್ವಾತಂತ್ರ್ಯ ಬಂದಾಗಿನಿಂದಲೂ ನಮ್ಮ ಗ್ರಾಮದಲ್ಲಿ ಸಾರಿಗೆ ಇಲಾಖೆ ಬಸ್ ನೋಡಿಲ್ಲ. ನಿತ್ಯ ನೂರಾರು ವಿದ್ಯಾರ್ಥಿಗಳು ಸುಮಾರು 3 ಕಿಲೋಮೀಟರ್ ನಡೆದುಕೊಂಡೇ ಶಾಲೆ-ಕಾಲೇಜಿಗೆ ಹೋಗುತ್ತಿದ್ದಾರೆ. ಈ ಬಗ್ಗೆ ಅನೇಕ ಬಾರಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರೂ ಪ್ರಯೋಜನವಾಗಿಲ್ಲ. ಕೂಡಲೇ ನಮ್ಮ ಗ್ರಾಮಕ್ಕೆ ಬಸ್ ವ್ಯವಸ್ಥೆ ಕಲ್ಪಿಸಿ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕು.

– ಕೆ. ಅಶೋಕ್, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ, ಕನ್ನಾಯಕನಹಳ್ಳಿ

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor