Harapanahalli | ಸತತ ಅಧ್ಯಯನ, ಆತ್ಮವಿಶ್ವಾಸದಿಂದ ಯಶಸ್ಸು ಸಾಧ್ಯ: ಜಿ.ಬಿ.ವಿನಯ್ ಕುಮಾರ್
ಹರಪನಹಳ್ಳಿ : “ಯಶಸ್ಸು ಬಯಸುವ ಪ್ರತಿಯೊಬ್ಬ ಅಭ್ಯರ್ಥಿಯೂ ಸತತ ಅಧ್ಯಯನ, ಸಮರ್ಪಕ ಸಿದ್ಧತೆ ಹಾಗೂ ಆತ್ಮವಿಶ್ವಾಸದಿಂದ ಪರೀಕ್ಷೆಗಳನ್ನು ಎದುರಿಸಬೇಕು” ಎಂದು ಇನ್ಸೈಟ್ಸ್ ಐಎಎಸ್ ಅಕಾಡೆಮಿ ಸ್ಥಾಪಕ ಜಿ.ಬಿ. ವಿನಯ್ ಕುಮಾರ್ ಅಭಿಪ್ರಾಯಪಟ್ಟರು.
ತಾಲ್ಲೂಕಿನ ಅರಸೀಕೆರೆ ಗ್ರಾಮದ ಕೋಲಶಾಂತೇಶ್ವರ ಮಠದ ಸಭಾಂಗಣದಲ್ಲಿ ಆಯೋಜಿಸಿದ್ದ ಸರ್ಕಾರಿ ಸ್ವಾಮ್ಯದ ಸ್ಪರ್ಧಾತ್ಮಕ ಪರೀಕ್ಷೆಗಳ ಉಚಿತ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ನಿರಂತರ ಅಧ್ಯಯನಶೀಲತೆ ಮತ್ತು ಕಠಿಣ ಪರಿಶ್ರಮ ಅತ್ಯಂತ ಮುಖ್ಯವಾಗಿದೆ. ವಿದ್ಯಾರ್ಥಿಗಳು ತಮ್ಮ ಗಮನವನ್ನು ಕೇಂದ್ರೀಕರಿಸಿ, ಛಲ ಮತ್ತು ಗುರಿ ಸ್ಪಷ್ಟತೆಯೊಂದಿಗೆ ಮುಂದುವರಿದರೆ ಸಾಧನೆ ಸಾಧ್ಯ ಎಂದು ಸಲಹೆ ನೀಡಿದರು.
ಕಾರ್ಯಕ್ರಮಕ್ಕೆ ದಿವ್ಯ ಸಾನಿಧ್ಯ ವಹಿಸಿದ್ದ ಮಠದ ಪೀಠಾಧ್ಯಕ್ಷ ಶಾಂತಲಿಂಗ ದೇಶೀಕೇಂದ್ರ ಸ್ವಾಮೀಜಿ ಮಾತನಾಡಿ, “ಸಾಧಕರ ಜೀವನವೇ ವಿದ್ಯಾರ್ಥಿಗಳಿಗೆ ಸ್ಫೂರ್ತಿ. ಪದವಿ ಬಳಿಕ ವಿದ್ಯಾರ್ಥಿಗಳು ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಬೇಕಾಗುತ್ತದೆ. ಆ ನಿಟ್ಟಿನಲ್ಲಿ ನಮ್ಮ ಕಾಲೇಜು ಮಾರ್ಗದರ್ಶನ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ” ಎಂದರು.
ಕಾಲೇಜಿನ ಪ್ರಾಚಾರ್ಯ ಡಾ. ಸುರೇಶ್ ಮಾತನಾಡಿ, “ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಯಶಸ್ಸು ಸಾಧಿಸಲು ಆಂತರಿಕ ಪ್ರೇರಣೆ, ಪೂರ್ವ ತಯಾರಿ ಮತ್ತು ಸೂಕ್ತ ಮಾರ್ಗದರ್ಶನ ಅಗತ್ಯ. ವಿದ್ಯಾರ್ಥಿಗಳು ಇಂತಹ ಕಾರ್ಯಾಗಾರಗಳನ್ನು ಸದುಪಯೋಗಪಡಿಸಿಕೊಳ್ಳಬೇಕು” ಎಂದು ಹೇಳಿದರು.
ನಂತರ ಸರ್ಕಾರಿ ಸ್ವಾಮ್ಯದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅಗತ್ಯವಾದ ಇತಿಹಾಸ ವಿಷಯ ಕುರಿತು ಪ್ರಾಧ್ಯಾಪಕ ಹಾಗೂ ಇತಿಹಾಸ ಸಂಶೋಧಕ ಡಾ. ಹಾದಿಮನೆ ರಮೇಶ್ ಉಪನ್ಯಾಸ ನೀಡಿದರು.
ಕಾರ್ಯಕ್ರಮದಲ್ಲಿ ನಾರಾನಗೌಡ, ಪ್ರದೀಪ್ ಹಾದಿಮನಿ, ಕರಡಿನಂದೀಶ್, ಎಸ್. ಸಿದ್ದೇಶ್ವರ, ತ್ರಿವೇಣಿ, ಸಾಕಮ್ಮ, ಜೆ.ಕೆ. ಬಸವರಾಜ್ ಸೇರಿದಂತೆ ಹಲವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.