Harapanahalli | ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಕಬ್ಬಿನ ಬೆಳೆ ಬೆಂಕಿಗಾಹುತಿ: ಅಪಾರ ನಷ್ಟ
ಹರಪನಹಳ್ಳಿ: ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಕಬ್ಬಿನ ಬೆಳೆಗೆ ಬೆಂಕಿ ತಗುಲಿ ಒಂದು ಎಕರೆಗೂ ಹೆಚ್ಚು ಬೆಳೆ ಸುಟ್ಟು ಭಸ್ಮವಾಗಿರುವ ಘಟನೆ ತಾಲೂಕಿನ ತೆಲಿಗಿ ಹೋಬಳಿಯ ಕಡತಿ ಕ್ಯಾಂಪ್‌ನಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ.
ಕಡತಿ ಕ್ಯಾಂಪ್‌ನ ರೈತ ಮಹಿಳೆ ಹಾಲಮ್ಮ ಅವರಿಗೆ ಸೇರಿದ ಎರಡು ಎಕರೆ ಜಮೀನಿನಲ್ಲಿ ವಿದ್ಯುತ್ ಕಂಬದ ತಂತಿಗಳು ಒಂದಕ್ಕೊಂದು ತಗುಲಿ ಶಾರ್ಟ್ ಸರ್ಕ್ಯೂಟ್ ಸಂಭವಿಸಿದೆ ಎನ್ನಲಾಗಿದ್ದು, ಇದರಿಂದ ಕಬ್ಬಿನ ಬೆಳೆಗೆ ಬೆಂಕಿ ಹೊತ್ತಿಕೊಂಡಿದೆ. ಪರಿಣಾಮ ಒಂದು ಎಕರೆಗೂ ಹೆಚ್ಚು ಪ್ರದೇಶದಲ್ಲಿನ ಕಬ್ಬಿನ ಬೆಳೆ ಬೆಂಕಿಗೆ ಆಹುತಿಯಾಗಿದ್ದು, ರೈತ ಮಹಿಳೆಗೆ ಅಪಾರ ಆರ್ಥಿಕ ನಷ್ಟ ಉಂಟಾಗಿದೆ.
ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಹರಿಹರ ತಾಲೂಕಿನ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದರು.
ಘಟನೆ ಕುರಿತು ಪ್ರತಿಕ್ರಿಯಿಸಿರುವ ಜೆಡಿಎಸ್ ತಾಲೂಕು ಅಧ್ಯಕ್ಷ ಮಲಕಪ್ಪ ತಾವರಗೊಂದಿ, ರೈತರ ಜಮೀನಿನಲ್ಲಿ ಹಾದುಹೋಗಿರುವ ವಿದ್ಯುತ್ ತಂತಿಗಳಿಂದ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ರೈತ ಮಹಿಳೆಗೆ ಅಪಾರ ನಷ್ಟ ಉಂಟಾಗಿದೆ. ಕೂಡಲೇ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸಿ, ಹಾನಿಗೊಳಗಾದ ರೈತ ಮಹಿಳೆಗೆ ಸೂಕ್ತ ಪರಿಹಾರ ಒದಗಿಸಬೇಕು ಎಂದು ಆಗ್ರಹಿಸಿದ್ದಾರೆ.
ಕಬ್ಬಿನ ಬೆಳೆಗೆ ಬೆಂಕಿ ಬಿದ್ದ ತಕ್ಷಣ ಹರಪನಹಳ್ಳಿ ಅಗ್ನಿಶಾಮಕ ದಳಕ್ಕೆ ಕರೆ ಮಾಡಿ ಮಾಹಿತಿ ನೀಡಿದರೂ, ಸಿಬ್ಬಂದಿ ಸಮಯಕ್ಕೆ ಸರಿಯಾಗಿ ಸ್ಥಳಕ್ಕೆ ಆಗಮಿಸದೆ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಮಲಕಪ್ಪ ತಾವರಗೊಂದಿ ಆರೋಪಿಸಿದ್ದಾರೆ. ಕೊನೆಗೆ ಹರಿಹರ ತಾಲೂಕಿನ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದರು ಎಂದು ಅವರು ತಿಳಿಸಿದ್ದಾರೆ.