Harpanahalli | ಖಾಸಗಿ ಶಾಲೆಗಳ ಡೊನೇಷನ್ ಹಾವಳಿ ಖಂಡಿಸಿ ಪ್ರತಿಭಟನೆ
ಹರಪನಹಳ್ಳಿ : ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತ ಖಾಸಗಿ ಶಾಲೆ-ಕಾಲೇಜುಗಳಲ್ಲಿ ಸರ್ಕಾರಿ ಶುಲ್ಕ ನಿಯಮಗಳನ್ನು ಉಲ್ಲಂಘಿಸಿ ಅಕ್ರಮವಾಗಿ ಡೊನೇಷನ್ ವಸೂಲಿ ಮಾಡುತ್ತಿರುವ ಶಿಕ್ಷಣ ಸಂಸ್ಥೆಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘಟನೆ ಕಾರ್ಯಕರ್ತರು ಗುರುವಾರ ಪ್ರತಿಭಟನೆ ನಡೆಸಿ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಪ್ರತಿಭಟನಾಕಾರರು, ಹರಪನಹಳ್ಳಿ ಅತ್ಯಂತ ಹಿಂದುಳಿದ ತಾಲೂಕಾಗಿದ್ದು, ಇಲ್ಲಿ ಬಡವರು ಹಾಗೂ ಕೂಲಿ ಕಾರ್ಮಿಕರ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಆದರೆ ಖಾಸಗಿ ಶಿಕ್ಷಣ ಸಂಸ್ಥೆಗಳ ಡೊನೇಷನ್ ಹಾವಳಿಯಿಂದ ಪೋಷಕರು ಶುಲ್ಕ ಪಾವತಿಸಲು ಸಾಧ್ಯವಾಗದೆ ಸಂಕಷ್ಟ ಅನುಭವಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಖಾಸಗಿ ಶಾಲೆ ಮತ್ತು ಕಾಲೇಜುಗಳ ಆಡಳಿತ ಮಂಡಳಿಗಳು ಸರ್ಕಾರದ ಆದೇಶಗಳನ್ನು ಗಾಳಿಗೆ ತೂರಿ ಮನಬಂದಂತೆ ಹಣ ವಸೂಲಿ ಮಾಡುತ್ತಿದ್ದು, ಶಿಕ್ಷಣವನ್ನು ವ್ಯಾಪಾರವಾಗಿಸಿಕೊಂಡಿವೆ ಎಂದು ಆರೋಪಿಸಿದರು.
ಡೊನೇಷನ್ ಹಾವಳಿ ವಿರುದ್ಧ ಹಲವು ವರ್ಷಗಳಿಂದ ಅಖಿಲ ಭಾರತ ವಿದ್ಯಾರ್ಥಿ ಸಂಘಟನೆ ವಿದ್ಯಾರ್ಥಿಗಳ ಪರ ಹೋರಾಟ ನಡೆಸುತ್ತಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ದೂರಿದರು.
ಕೂಡಲೇ ಹೆಚ್ಚು ಡೊನೇಷನ್ ಪಡೆಯುತ್ತಿರುವ ಖಾಸಗಿ ಶಿಕ್ಷಣ ಸಂಸ್ಥೆಗಳ ವಿರುದ್ಧ ಕಾನೂನು ಕ್ರಮ ಕೈಗೊಂಡು, ಅಂತಹ ಶಾಲೆ-ಕಾಲೇಜುಗಳ ಮಾನ್ಯತೆ ರದ್ದುಪಡಿಸಲು ಜಿಲ್ಲಾಧಿಕಾರಿಗಳಿಗೆ ಶಿಫಾರಸ್ಸು ಮಾಡಬೇಕು. ಜೊತೆಗೆ ಎಲ್ಲಾ ಖಾಸಗಿ ಶಾಲೆ-ಕಾಲೇಜುಗಳಲ್ಲಿ ಶುಲ್ಕ ಪಟ್ಟಿ ಕಡ್ಡಾಯವಾಗಿ ಪ್ರದರ್ಶಿಸುವಂತೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.