×
Ad

Hosapete | ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳು ಜನರಿಗೆ ಸಮರ್ಪಕವಾಗಿ ತಲುಪಲಿ : ಡಾ.ಶರಣಬಸಪ್ಪ ಗಣಜಲಖೇಡ

Update: 2026-05-23 19:40 IST

ಹೊಸಪೇಟೆ : ಸರ್ಕಾರ ಜಾರಿಗೊಳಿಸುತ್ತಿರುವ ಎಲ್ಲಾ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳು ಸಾರ್ವಜನಿಕರಿಗೆ ಸಮರ್ಪಕವಾಗಿ ತಲುಪಬೇಕು. ಈ ನಿಟ್ಟಿನಲ್ಲಿ ಜಿಲ್ಲೆಯ ಆರೋಗ್ಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಸಮರ್ಪಣಾ ಭಾವದಿಂದ ಕೆಲಸ ಮಾಡಬೇಕು ಎಂದು ಕಲ್ಬುರ್ಗಿ ವಿಭಾಗೀಯ ಸಹ ನಿರ್ದೇಶಕರ ಕಚೇರಿಯ ಉಪನಿರ್ದೇಶಕರಾದ ಡಾ. ಶರಣಬಸಪ್ಪ ಗಣಜಲಖೇಡ ಸೂಚಿಸಿದರು.

ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ ಶುಕ್ರವಾರ ನಡೆದ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಗರ್ಭಿಣಿಯರು ಹಾಗೂ ಬಾಣಂತಿಯರ ಆರೈಕೆಗೆ ಮೊದಲ ಆದ್ಯತೆ ನೀಡಬೇಕು. ಜಿಲ್ಲೆಯಲ್ಲಿ ತಾಯಿ ಮರಣ ಹಾಗೂ ಶಿಶು ಮರಣ ಪ್ರಮಾಣವನ್ನು ಶೂನ್ಯಕ್ಕೆ ತರುವ ನಿಟ್ಟಿನಲ್ಲಿ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ಮಕ್ಕಳು ಮತ್ತು ಗರ್ಭಿಣಿಯರಿಗೆ ನೀಡಲಾಗುವ ಲಸಿಕೆಗಳನ್ನು ಯಾವುದೇ ಲೋಪವಿಲ್ಲದೆ ನಿಗದಿತ ಗುರಿಯಂತೆ ಪೂರ್ಣಗೊಳಿಸಬೇಕು ಎಂದು ತಿಳಿಸಿದರು.

ಮಳೆಗಾಲ ಸಮೀಪಿಸುತ್ತಿರುವ ಹಿನ್ನೆಲೆ ಮಲೇರಿಯಾ, ಡೆಂಗು ಹಾಗೂ ಚಿಕನ್‌ಗುನ್ಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳು ಹರಡದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು. ಸಾರ್ವಜನಿಕರ ಆರೋಗ್ಯ ರಕ್ಷಣೆಗೆ ಅಗತ್ಯ ಔಷಧಗಳ ಕೊರತೆಯಾಗದಂತೆ ನಿರಂತರ ನಿಗಾವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲೆಯ ಎಲ್ಲಾ ತಾಲೂಕು ಆಸ್ಪತ್ರೆಗಳು ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ನಾಯಿ ಕಡಿತ ಮತ್ತು ಹಾವು ಕಡಿತಕ್ಕೆ ಅಗತ್ಯವಿರುವ ಲಸಿಕೆ ಹಾಗೂ ಔಷಧಗಳು ಸದಾ ಲಭ್ಯವಿರಬೇಕು ಎಂದು ಖಡಕ್ ಸೂಚನೆ ನೀಡಿದರು.

ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಆರಂಭಿಕ ಹಂತದಲ್ಲೇ ಕ್ಷಯರೋಗಿಗಳನ್ನು ಪತ್ತೆಹಚ್ಚಿ ಸೂಕ್ತ ಚಿಕಿತ್ಸೆ ನೀಡಬೇಕು. ಜೊತೆಗೆ ಕುಷ್ಠರೋಗ ನಿರ್ಮೂಲನೆಗೂ ವಿಶೇಷ ಒತ್ತು ನೀಡಬೇಕು ಎಂದು ಹೇಳಿದರು.

ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಲ್.ಆರ್. ಶಂಕರ ನಾಯ್ಕ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ. ಜಂಬಯ್ಯ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ. ಸತೀಶ್ ಚಂದ್ರ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಷಣ್ಮುಖ, ಶಸ್ತ್ರಚಿಕಿತ್ಸಕ ಡಾ. ಹರಿಪ್ರಸಾದ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಎಂ.ಪಿ. ದೊಡ್ಡಮನಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News