ಹೊಸಪೇಟೆ ತಹಶೀಲ್ದಾರ್ ಕಚೇರಿ ಎದುರು ಎಸ್‌ಡಿಪಿಐ ಪ್ರತಿಭಟನೆ
ಹೊಸಪೇಟೆ/ವಿಜಯನಗರ: ಗೋ ರಕ್ಷಕರ ಹೆಸರಿನಲ್ಲಿ ಕೆಲ ಸಂಘಟನೆಗಳು ರೈತರು ಹಾಗೂ ಅಲ್ಪಸಂಖ್ಯಾತರ ಮೇಲೆ ಒತ್ತಡ ಹೇರುತ್ತಿದ್ದು, ಸರ್ಕಾರ ಇಂತಹ ಘಟನೆಗಳನ್ನು ಗಂಭೀರವಾಗಿ ಪರಿಗಣಿಸಿ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಎಸ್‌ಡಿಪಿಐ ಕಾರ್ಯಕರ್ತರು ಇಂದು ಹೊಸಪೇಟೆ ತಾಲ್ಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯನ್ನುದ್ದೇಶಿಸಿ ಎಸ್‌ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಅಪ್ಸರ್ ಕೊಡ್ಲಿಪೇಟೆ ಮಾತನಾಡಿದರು.
“ಡಾ. ಬಾಬಾಸಾಹೇಬ್ ಅಂಬೇಡ್ಕರ್ ರಚಿಸಿದ ಸಂವಿಧಾನದಲ್ಲಿ ಆಹಾರದ ವಿಚಾರದಲ್ಲಿ ಯಾವುದೇ ನಿರ್ಬಂಧಗಳಿಲ್ಲ. ಪ್ರತಿಯೊಬ್ಬರಿಗೂ ತಮ್ಮ ಆಹಾರ, ಧರ್ಮ ಹಾಗೂ ಆಚರಣೆಗಳನ್ನು ಅನುಸರಿಸುವ ಹಕ್ಕು ಇದೆ. ಬಕ್ರೀದ್ ಹಬ್ಬವನ್ನು ತಲಾತಲಾಂತರಗಳಿಂದ ಆಚರಿಸಲಾಗುತ್ತಿದ್ದು, ಇದನ್ನು ರಾಜಕೀಯವಾಗಿ ದುರುಪಯೋಗಪಡಿಸಿಕೊಂಡು ಕೆಲವರು ಸಮಾಜದಲ್ಲಿ ವಿಷಬೀಜ ಬಿತ್ತುತ್ತಿದ್ದಾರೆ” ಎಂದು ಅವರು ಆರೋಪಿಸದರು.
ಪ್ರತಿಭಟನೆಯಲ್ಲಿ ಸದ್ದಾಮ್ ಹಂಪಿ, ನೂರ್ ಮೊಹಮ್ಮದ್, ಸಲೀಮ್ ಮಲಿಕ್ ಸೇರಿದಂತೆ ಜಿಲ್ಲೆಯ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಭಾಗವಹಿಸಿದ್ದರು.