Hosapete | ಭಿಕ್ಷಾಟನೆ, ಬಾಲ್ಯ ವಿವಾಹ ತಡೆಗೆ ಕಟ್ಟುನಿಟ್ಟಿನ ಕ್ರಮ: ಅಧಿಕಾರಿಗಳಿಗೆ ನ್ಯಾಯಾಧೀಶರ ಸೂಚನೆ
ಜಿಲ್ಲಾ ಮಟ್ಟದ ಮಾಸಿಕ ಪ್ರಗತಿ ಪರಿಶೀಲನಾ ಸಭೆ
ಹೊಸಪೇಟೆ : ನಗರದ ರಸ್ತೆ, ಜಂಕ್ಷನ್ ಹಾಗೂ ಧಾರ್ಮಿಕ ಸ್ಥಳಗಳಲ್ಲಿ ಮಕ್ಕಳೊಂದಿಗೆ ಭಿಕ್ಷಾಟನೆ ಮಾಡುತ್ತಿರುವವರನ್ನು ತಕ್ಷಣ ರಕ್ಷಿಸಿ ನಿರಾಶ್ರಿತರ ಕೇಂದ್ರ ಹಾಗೂ ಬಾಲ ಮಂದಿರಗಳಿಗೆ ದಾಖಲಿಸುವಂತೆ ಬಳ್ಳಾರಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಕೆ.ಎಂ. ರಾಜಶೇಖರ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾ ನ್ಯಾಯಾಲಯದಲ್ಲಿ ನಡೆದ ದ್ವೈಮಾಸಿಕ ಸಭೆಯಲ್ಲಿ ಮಾತನಾಡಿದ ಅವರು, ಭಿಕ್ಷಾಟನೆ ನಡೆಸುತ್ತಿರುವ ಮಕ್ಕಳು ಕಂಡುಬಂದರೆ ಪೊಲೀಸ್ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಜಂಟಿಯಾಗಿ ಕಾರ್ಯಾಚರಣೆ ನಡೆಸಬೇಕು. ಸಾರ್ವಜನಿಕರು 1098 ಅಥವಾ 112 ಸಹಾಯವಾಣಿ ಸಂಖ್ಯೆಗೆ ಮಾಹಿತಿ ನೀಡುವಂತೆ ಮನವಿ ಮಾಡಿದರು.
ಗ್ರಾಮೀಣ ಪ್ರದೇಶಗಳಲ್ಲಿ ಬಾಲ್ಯ ವಿವಾಹ ಹಾಗೂ ಪೋಕ್ಸೋ ಪ್ರಕರಣಗಳು ಹೆಚ್ಚುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿದ ಅವರು, ಪೊಲೀಸ್, ಶಿಕ್ಷಣ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ ಬಾಲ್ಯ ವಿವಾಹ ತಡೆಗೆ ಜಾಗೃತಿ ಮೂಡಿಸಬೇಕು ಎಂದು ಸೂಚಿಸಿದರು.
ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮನೆ-ಮನೆ ಸಮೀಕ್ಷೆ ಮೂಲಕ ಗುರುತಿಸಿ ಮತ್ತೆ ಶಾಲೆಗೆ ಸೇರಿಸುವ ವಿಶೇಷ ಅಭಿಯಾನ ನಡೆಸಬೇಕು. ಹೆಣ್ಣುಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ತಿಳಿಸಿದರು.
ಕಂದಾಯ ಇಲಾಖೆಯ ವಿರುದ್ಧ ಜಮೀನು ಸರ್ವೇ, ಹದ್ದುಬಸ್ತು ಹಾಗೂ ಪೋಡಿ ಕಾರ್ಯಗಳ ವಿಳಂಬದ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬರುತ್ತಿವೆ. ಈ ಸಮಸ್ಯೆಗಳನ್ನು ತಳಮಟ್ಟದಲ್ಲೇ ಬಗೆಹರಿಸಿ ಭೂ ವಿವಾದಗಳು ನ್ಯಾಯಾಲಯಕ್ಕೆ ಬರದಂತೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಜುಲೈ 11ರಂದು ನಡೆಯಲಿರುವ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ 4,000ಕ್ಕೂ ಹೆಚ್ಚು ಸಿವಿಲ್, ಕ್ರಿಮಿನಲ್ ಹಾಗೂ ರಾಜಿ ಮಾಡಿಕೊಳ್ಳಬಹುದಾದ ಪ್ರಕರಣಗಳನ್ನು ಇತ್ಯರ್ಥಗೊಳಿಸುವ ಗುರಿ ಹೊಂದಿದ್ದು, ಸಾರ್ವಜನಿಕರು ಇದರ ಪ್ರಯೋಜನ ಪಡೆಯುವಂತೆ ಕರೆ ನೀಡಿದರು.
ಸಭೆಯಲ್ಲಿ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಬಿ.ಟಿ.ಕುಮಾರಸ್ವಾಮಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಎನ್.ಸುಬ್ರಮಣ್ಯ, ಹಿರಿಯ ಸಿವಿಲ್ ನ್ಯಾಯಾಧೀಶರಾದ ಪ್ರಶಾಂತ್ ನಾಗಲಾಪುರ, 2ನೇ ಅಪರ ಸಿವಿಲ್ ನ್ಯಾಯಾಧೀಶರಾದ ಶೃತಿ ತೇಲಿ, 3ನೇ ಅಪರ ಸಿವಿಲ್ ನ್ಯಾಯಾಧೀಶರಾದ ಶರದಿ ರಾಜ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮಂಜುನಾಥ್, ಉಪವಿಭಾಗಾಧಿಕಾರಿ ಪಿ.ವಿವೇಕಾನಂದ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಎಂ.ವೈ ಕಾಳೆ, ನಗರಸಭೆ ಪೌರಾಯುಕ್ತ ಎರಗುಡಿ ಶಿವಕುಮಾರ್, ವಕೀಲರ ಸಂಘದ ಜಿಲ್ಲಾಧ್ಯಕ್ಷ ಗುಜ್ಜಲ ನಾಗರಾಜ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.