ಹಂಪಿಯಲ್ಲಿ 1 ಕೋಟಿ ರೂ. ವೆಚ್ಚದ ಸುಸಜ್ಜಿತ ಗ್ರಾಮ ಪಂಚಾಯತ್ ಕಚೇರಿ ನಿರ್ಮಾಣಕ್ಕೆ ಸಂಸದ ತುಕಾರಾಂ ಶಂಕುಸ್ಥಾಪನೆ
ವಿಜಯನಗರ (ಹೊಸಪೇಟೆ) : ಹಂಪಿಯಲ್ಲಿ 1 ಕೋಟಿ ರೂ. ವೆಚ್ಚದ ನೂತನ ಗ್ರಾಮ ಪಂಚಾಯತ್ ಕಚೇರಿ ಕಟ್ಟಡ ನಿರ್ಮಾಣಕ್ಕೆ ಸಂಸದ ಈ. ತುಕಾರಾಂ ಸೋಮವಾರ ಶಂಕುಸ್ಥಾಪನೆ ನೆರವೇರಿಸಿದರು.
ಈ ವೇಳೆ ಮಾತನಾಡಿದ ಅವರು, ಜಿಂದಾಲ್ ಸಂಸ್ಥೆಯಿಂದ 80 ಲಕ್ಷ ರೂ. ಹಾಗೂ ಸರ್ಕಾರದಿಂದ 20 ಲಕ್ಷ ರೂ. ಅನುದಾನ ಸೇರಿ ಒಟ್ಟು 1 ಕೋಟಿ ರೂ. ವೆಚ್ಚದಲ್ಲಿ ಹೈದ್ರಾಬಾದ್-ಕರ್ನಾಟಕ ಭಾಗದಲ್ಲೇ ಮಾದರಿಯಾದ, ಸುಸಜ್ಜಿತ ಹಾಗೂ ಅತ್ಯಾಧುನಿಕ ಗ್ರಾಮ ಪಂಚಾಯಿತಿ ಕಟ್ಟಡವನ್ನು ನಿರ್ಮಿಸಲಾಗುತ್ತಿದೆ ಎಂದು ಹೇಳಿದರು.
ಹಂಪಿಯಲ್ಲಿ ನೂತನ ಕಟ್ಟಡ ನಿರ್ಮಾಣಕ್ಕೆ ಚಾಲನೆ ನೀಡಿರುವುದು ಸಂತೋಷ ತಂದಿದೆ. ನಮ್ಮ ಉಸಿರು ಶಾಶ್ವತವಲ್ಲ, ಆದರೆ ನಾವು ಮಾಡುವ ಕೆಲಸಗಳು ಶಾಶ್ವತವಾಗಿರುತ್ತವೆ. ಆಡಳಿತ ಕಚೇರಿ ಸುಸಜ್ಜಿತವಾಗಿದ್ದರೆ, ಜನಸೇವೆ ಸುಗಮವಾಗುತ್ತದೆ. ಇದನ್ನು ಪಂಚಾಯಿತಿ ಸದಸ್ಯರು ಹಾಗೂ ಸಾರ್ವಜನಿಕರು ಸದ್ಬಳಕೆ ಮಾಡಿಕೊಳ್ಳಬೇಕು. ಅಭಿವೃದ್ಧಿ ಕಾರ್ಯಗಳು ಎಲ್ಲರ ಸಹಕಾರದಿಂದಲೇ ಸಾಧ್ಯ ಎಂದು ಸಂಸದ ತುಕಾರಾಂ ಅಭಿಪ್ರಾಯಪಟ್ಟರು.
ಜಿಲ್ಲೆಯ ಹಂಪಿ ಅಭಿವೃದ್ಧಿಗೆ ಉತ್ತೇಜನ ನೀಡುವ ಉದ್ದೇಶದಿಂದ ನವೆಂಬರ್ 1 ರಿಂದ ಹಂಪಿ–ಬೆಂಗಳೂರು ನಡುವೆ ಸ್ಟಾರ್ ಏರ್ ವೇಸ್ ಸಂಸ್ಥೆ ನೂತನ ವಿಮಾನ ಸೇವೆ ಪ್ರಾರಂಭಿಸಲು ಮುಂದಾಗಿದೆ ಎಂದು ತಿಳಿಸಿದರು.
ಇದೇ ವೇಳೆ ಸಂಸದ ನಿಧಿಯಿಂದ 14 ಲಕ್ಷ ರೂ. ವೆಚ್ಚದಲ್ಲಿ ಹಂಪಿ ಗ್ರಾಮ ಪಂಚಾಯಿತಿಗೆ 2 ಹೈಮಾಸ್ಟ್ ದೀಪಗಳನ್ನು ನೀಡುವುದಾಗಿ ಘೋಷಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನೊಂಗ್ಜಾಯ್ ಮೊಹಮ್ಮದ್ ಅಲಿ ಅಕ್ರಮ್ ಷಾ, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಎಂ.ಡಿ. ಆಲಂ ಭಾಷಾ, ಹಂಪಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ರಜನಿ ಷಣ್ಮುಖಗೌಡ, ಉಪಾಧ್ಯಕ್ಷ ಹನುಮಂತ, ಹೊಸಪೇಟೆ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಹೆಚ್.ಎನ್.ಎಫ್. ಮಹಮ್ಮದ್ ಇಮಾಮ್ ನಿಯಾಜಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.