ಝಮೀರ್ ಅಹ್ಮದ್ ಖಾನ್‌ಗೆ ಡಿಸಿಎಂ ಅಥವಾ ಸಚಿವ ಸ್ಥಾನ ನೀಡಲು ಆಗ್ರಹಿಸಿ ಪ್ರತಿಭಟನೆ
ಕಮಲಾಪುರ/ವಿಜಯನಗರ : ರಾಜ್ಯ ಸಚಿವ ಸಂಪುಟದ ಎರಡನೇ ಹಂತದ ವಿಸ್ತರಣೆಯಲ್ಲಿ ಕಾಂಗ್ರೆಸ್ ಹಿರಿಯ ಮುಖಂಡ ಹಾಗೂ ಮಾಜಿ ಜಿಲ್ಲಾ ಉಸ್ತುವಾರಿ ಸಚಿವ ಝಮೀರ್ ಅಹ್ಮದ್ ಖಾನ್ ಅವರಿಗೆ ಉಪಮುಖ್ಯಮಂತ್ರಿ (ಡಿಸಿಎಂ) ಅಥವಾ ಕ್ಯಾಬಿನೆಟ್ ದರ್ಜೆಯ ಸಚಿವ ಸ್ಥಾನ ನೀಡಬೇಕು ಎಂದು ಆಗ್ರಹಿಸಿ ವಿಜಯನಗರ ಜಿಲ್ಲೆಯ ಕಮಲಾಪುರ ಪಟ್ಟಣದಲ್ಲಿ ರೈತರು ಹಾಗೂ ವಿವಿಧ ದಲಿತ ಸಂಘಟನೆಗಳ ನೇತೃತ್ವದಲ್ಲಿ ಬುಧವಾರ ಪ್ರತಿಭಟನೆ ನಡೆಸಲಾಯಿತು.
ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ರಾಜ್ಯ ಸರ್ಕಾರ ಹಾಗೂ ಕಾಂಗ್ರೆಸ್ ಹೈಕಮಾಂಡ್‌ಗೆ ವಿರುದ್ಧ ಘೋಷಣೆಗಳನ್ನು ಕೂಗಿ, ಜಮೀರ್ ಅಹಮ್ಮದ್ ಖಾನ್ ಅವರಿಗೆ ಸಚಿವ ಸಂಪುಟದಲ್ಲಿ ಸೂಕ್ತ ಸ್ಥಾನಮಾನ ಕಲ್ಪಿಸುವಂತೆ ಒತ್ತಾಯಿಸಿದರು. ಬಳಿಕ ಉಪತಹಶೀಲ್ದಾರ್ ಮೂಲಕ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಹೈಕಮಾಂಡ್‌ಗೆ ಮನವಿ ಪತ್ರ ಸಲ್ಲಿಸಿದರು.
ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಮುಖಂಡರು, ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಅವಧಿಯಲ್ಲಿ ಜಮೀರ್ ಅಹಮ್ಮದ್ ಖಾನ್ ಅವರು ಜಿಲ್ಲೆಯ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಿದ್ದಾರೆ ಎಂದು ಹೇಳಿದರು. ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ಅಳವಡಿಕೆ ಕಾಮಗಾರಿಗೆ ವೇಗ ನೀಡುವುದು ಸೇರಿದಂತೆ ಹಲವು ಅಭಿವೃದ್ಧಿ ಯೋಜನೆಗಳನ್ನು ಅನುಷ್ಠಾನಗೊಳಿಸಿ ಜನಮನ್ನಣೆ ಗಳಿಸಿದ್ದಾರೆ ಎಂದು ತಿಳಿಸಿದರು.
ಬಡವರು ಹಾಗೂ ಹಿಂದುಳಿದ ವರ್ಗಗಳ ಅಭಿವೃದ್ಧಿಗಾಗಿ ವಿವಿಧ ವಸತಿ ಯೋಜನೆಗಳು ಮತ್ತು ಮೂಲಸೌಕರ್ಯ ಅಭಿವೃದ್ಧಿ ಕಾರ್ಯಕ್ರಮಗಳನ್ನು ಜಾರಿಗೆ ತಂದಿರುವ ಜಮೀರ್ ಅಹಮ್ಮದ್ ಖಾನ್ ಅವರಿಗೆ ಡಿಸಿಎಂ ಅಥವಾ ಕ್ಯಾಬಿನೆಟ್ ಸಚಿವ ಸ್ಥಾನ ನೀಡುವ ಮೂಲಕ ಅವರ ಸೇವೆಯನ್ನು ರಾಜ್ಯ ಮಟ್ಟದಲ್ಲಿ ಬಳಸಿಕೊಳ್ಳಬೇಕು ಎಂದು ಆಗ್ರಹಿಸಿದರು.
ಒಂದು ವೇಳೆ ಸಚಿವ ಸಂಪುಟದಲ್ಲಿ ಅವರಿಗೆ ಸ್ಥಾನ ನೀಡದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಲಾಗುವುದು. ಜೊತೆಗೆ ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಉತ್ತರ ನೀಡಲು ರೈತರು ಹಾಗೂ ವಿವಿಧ ಸಂಘಟನೆಗಳು ಸಜ್ಜಾಗಲಿವೆ ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.
ಪ್ರತಿಭಟನೆಯಲ್ಲಿ ಭಾರತೀಯ ಕಿಸಾನ್ ಜಾಗೃತಿ ರೈತ ಸಂಘದ ಅಧ್ಯಕ್ಷ ಎಸ್.ಎ. ಖಾದ್ರಿ, ಉಪಾಧ್ಯಕ್ಷೆ ರತ್ನಮ್ಮ, ಕೊಟ್ಟಾಳ್ ವೀರೇಶ್ ಸೇರಿದಂತೆ ವಿವಿಧ ರೈತ ಸಂಘಟನೆಗಳ ಮುಖಂಡರು, ಕಾರ್ಯಕರ್ತರು ಹಾಗೂ ರೈತರು ಭಾಗವಹಿಸಿದ್ದರು.