×
Ad

2026ರ ಅಂತ್ಯದೊಳಗೆ ವಸತಿ ರಹಿತರಿಗೆ ಸೂರು-ಇದು ಸರಕಾರದ ಆರನೇ ಗ್ಯಾರಂಟಿ: ಸಚಿವ ಝಮೀರ್ ಅಹ್ಮದ್ ಖಾನ್

Update: 2026-01-26 15:45 IST

ವಿಜಯನಗರ (ಹೊಸಪೇಟೆ) : ಪ್ರಣಾಳಿಕೆಯಲ್ಲಿ ಘೋಷಿಸಿದ್ದ ಐದು ಗ್ಯಾರಂಟಿ ಯೋಜನೆಗಳನ್ನು ಅಧಿಕಾರಕ್ಕೆ ಬಂದ ಒಂದು ತಿಂಗಳಲ್ಲೇ ಜಾರಿಗೆ ತರಲಾಗಿದೆ. ಬಡವರು, ಹಿಂದುಳಿದವರು ಹಾಗೂ ವಸತಿ ರಹಿತರ ಕಾಳಜಿಗೆ ಸರ್ಕಾರ ವಿಶೇಷ ಒತ್ತು ನೀಡಿದ್ದು, 2026ರ ಅಂತ್ಯದೊಳಗೆ ಎಲ್ಲಾ ವಸತಿ ರಹಿತರಿಗೆ ಸೂರು ಕಲ್ಪಿಸಲಾಗುವುದು. ಇದು ಸರ್ಕಾರದ ಆರನೇ ಗ್ಯಾರಂಟಿಯಾಗಿದೆ ಎಂದು ವಕ್ಫ್, ವಸತಿ ಹಾಗೂ ಅಲ್ಪಸಂಖ್ಯಾತ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಝಮೀರ್ ಅಹ್ಮದ್ ಖಾನ್ ಹೇಳಿದರು.

ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ ವತಿಯಿಂದ ಸೋಮವಾರ ಆಯೋಜಿಸಿದ್ದ 77ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.

2024ರ ಮಾರ್ಚ್ ತಿಂಗಳಲ್ಲಿ ವಿವಿಧ ವಸತಿ ಯೋಜನೆಗಳಡಿ 36,780 ಮನೆಗಳನ್ನು ಮತ್ತು ಇತ್ತೀಚೆಗೆ ಹುಬ್ಬಳ್ಳಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ 42,345 ಮನೆಗಳನ್ನು ಫಲಾನುಭವಿಗಳಿಗೆ ಹಂಚಿಕೆ ಮಾಡಲಾಗಿದೆ. ಒಟ್ಟಾರೆ ರಾಜ್ಯದಲ್ಲಿ 80 ಸಾವಿರಕ್ಕೂ ಹೆಚ್ಚು ಮನೆಗಳನ್ನು ವಸತಿ ರಹಿತರಿಗೆ ವಿತರಿಸಲಾಗಿದೆ ಎಂದು ಮಾಹಿತಿ ನೀಡಿದರು.

ಸಂಡೂರಿನಲ್ಲಿ ಆಯೋಜಿಸಿದ ಕಾರ್ಯಕ್ರಮದಲ್ಲಿ ರೂ.1600 ಕೋಟಿ, ಕೊಪ್ಪಳದಲ್ಲಿ 1310 ಕೋಟಿ ರೂ. ಮೌಲ್ಯದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಮುಖ್ಯಮಂತ್ರಿ ಚಾಲನೆ ನೀಡಿದ್ದಾರೆ. ರಾಜೀವ್ ಗಾಂಧಿ ಹಾಗೂ ಆಶ್ರಯ ಯೋಜನೆಗಳಡಿ ಬಡವರು, ವಸತಿ ರಹಿತರು, ನಿರ್ಗತಿಕರು ಹಾಗೂ ಕೂಲಿ ಕಾರ್ಮಿಕರಿಗೆ ಸರ್ಕಾರವೇ ಸೂರು ಕಲ್ಪಿಸುವ ಯೋಜನೆ ಹೊಂದಿದೆ. ಈ ಕುರಿತು ಸಮಗ್ರ ವರದಿಯನ್ನು ಮುಖ್ಯಮಂತ್ರಿಗಳಿಗೆ ಸಲ್ಲಿಸಲಾಗಿದ್ದು, ಅನುಮೋದನೆ ನೀಡುವ ಭರವಸೆ ದೊರೆತಿದೆ ಎಂದರು.

ಬೆಂಗಳೂರಿನಲ್ಲಿ ಬಡಜನರ ಅನುಕೂಲಕ್ಕಾಗಿ 2016ರಲ್ಲಿ 1,023 ಎಕರೆ ಭೂಮಿಯನ್ನು ರಾಜೀವ್ ಗಾಂಧಿ ವಸತಿ ಯೋಜನೆಗೆ ಮೀಸಲಿಟ್ಟು, ಬಡವರಿಗೆ ಸ್ವಂತ ಮನೆ ಕಟ್ಟಿಕೊಳ್ಳಲು ಸಹಕಾರ ನೀಡಲಾಗಿದೆ ಎಂದು ಹೇಳಿದರು.

ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಿಗೆ ವಾರ್ಷಿಕವಾಗಿ ಸುಮಾರು ರೂ.60 ಸಾವಿರ ಕೋಟಿ ವೆಚ್ಚ ಮಾಡಲಾಗುತ್ತಿದೆ. ಈ ಯೋಜನೆಗಳಿಂದ ಬಡ ಹಾಗೂ ಮಧ್ಯಮ ವರ್ಗದ ಜನರ ಆರ್ಥಿಕ ಮತ್ತು ಜೀವನಮಟ್ಟದಲ್ಲಿ ಮಹತ್ವದ ಸುಧಾರಣೆ ಕಂಡುಬಂದಿದೆ. ಗ್ಯಾರಂಟಿ ಯೋಜನೆಗಳಿಂದ ಸರ್ಕಾರ ದಿವಾಳಿಯಾಗುತ್ತದೆ ಎನ್ನುವ ಟೀಕೆಗೆ ಅಭಿವೃದ್ಧಿ ಕಾರ್ಯಗಳ ಮೂಲಕ ಉತ್ತರ ನೀಡಲಾಗುತ್ತಿದೆ ಎಂದು ಜಮೀರ್ ಅಹ್ಮದ್ ಖಾನ್ ಸ್ಪಷ್ಟಪಡಿಸಿದರು.

ಈ ಸಂದರ್ಭದಲ್ಲಿ ರಾಜ್ಯ ಯುವ ಸಂಸತ್ ಭವನದಲ್ಲಿ ನಡೆದ ಚರ್ಚಾ ಸ್ಪರ್ಧೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿ ಚಿರು ಅವರಿಗೆ 50 ಸಾವಿರ ರೂ. ನಗದು ಬಹುಮಾನ ನೀಡಿ ಗೌರವಿಸಲಾಯಿತು. ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ಹಾಗೂ ಸ್ಮರಣಿಕೆ ವಿತರಿಸಲಾಯಿತು.

ಪರೇಡ್ ಕಮಾಂಡರ್ ಗೋವಿಂದ್ ನೇತೃತ್ವದಲ್ಲಿ ಪೊಲೀಸ್ ಇಲಾಖೆ, ಗೃಹರಕ್ಷಕ ದಳ, ಎನ್‌ಸಿಸಿ, ಸ್ಕೌಟ್ಸ್ ಮತ್ತು ಗೈಡ್ಸ್, ಸೇವಾದಳ ಹಾಗೂ ವಿವಿಧ ಶಾಲೆಗಳ ವಿದ್ಯಾರ್ಥಿಗಳಿಂದ ಆಕರ್ಷಕ ಪಥಸಂಚಲನ ನಡೆಯಿತು. ಶಾಲಾ ಮಕ್ಕಳಿಂದ ಕನ್ನಡ ಭಾಷೆ, ನಾಡು-ನುಡಿ ಹಾಗೂ ದೇಶಭಕ್ತಿ ಮೂಡಿಸುವ ಸಾಂಸ್ಕೃತಿಕ ಕಾರ್ಯಕ್ರಮಗಳು ಗಮನ ಸೆಳೆದವು.

ಕಾರ್ಯಕ್ರಮದಲ್ಲಿ ಹೊಸಪೇಟೆ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಹೆಚ್.ಎನ್.ಎಫ್. ಇಮಾಮ್ ನಿಯಾಜಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಕೆ. ಶಿವಮೂರ್ತಿ, ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ, ಜಿಲ್ಲಾ ಪಂಚಾಯತ್ ಸಿಇಒ ನೋಂಗ್ಜಾಯ್ ಮೊಹಮ್ಮದ್ ಅಲಿ ಅಕ್ರಮ್ ಷಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್. ಜಾಹ್ನವಿ, ಅಪರ ಜಿಲ್ಲಾಧಿಕಾರಿ ಇ. ಬಾಲಕೃಷ್ಣಪ್ಪ, ಸಹಾಯಕ ಆಯುಕ್ತ ಪಿ. ವಿವೇಕಾನಂದ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News