ಬೂತ್ ಮಟ್ಟದಲ್ಲಿ ಕಾಂಗ್ರೆಸ್ ಸಂಘಟನೆ ಬಲಪಡಿಸಿ: ಶಾಸಕಿ ಎಂ.ಪಿ.ಲತಾ ಮಲ್ಲಿಕಾರ್ಜುನ
ಹರಪನಹಳ್ಳಿ: ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಬೂತ್ ಹಾಗೂ ವಾರ್ಡ್ ಮಟ್ಟದಲ್ಲಿ ಕಾಂಗ್ರೆಸ್ ಪಕ್ಷದ ಸಂಘಟನೆಯನ್ನು ಮತ್ತಷ್ಟು ಬಲಪಡಿಸಬೇಕು ಎಂದು ಶಾಸಕಿ ಎಂ.ಪಿ. ಲತಾ ಮಲ್ಲಿಕಾರ್ಜುನ ಕರೆ ನೀಡಿದರು.
ನಗರದ ಕಾಶಿಮಠದ ಕಾಂಗ್ರೆಸ್ ಭವನದಲ್ಲಿ ಬುಧವಾರ ನಡೆದ ಹರಪನಹಳ್ಳಿ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿಯ ಪದಾಧಿಕಾರಿಗಳ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು.
ಕ್ಷೇತ್ರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿದ್ದು, ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಸೇರಿದಂತೆ ಜನಪರ ಕಾರ್ಯಕ್ರಮಗಳ ಮಾಹಿತಿಯನ್ನು ಮನೆಮನೆಗೆ ತಲುಪಿಸುವ ಜವಾಬ್ದಾರಿ ಪಕ್ಷದ ಕಾರ್ಯಕರ್ತರ ಮೇಲಿದೆ ಎಂದು ಹೇಳಿದರು.
ಬೂತ್ ಮಟ್ಟದಲ್ಲಿ ಕಾರ್ಯಕರ್ತರನ್ನು ಸಂಘಟಿಸಿ ಪಕ್ಷವನ್ನು ಸದೃಢಗೊಳಿಸುವ ನಿಟ್ಟಿನಲ್ಲಿ ಪ್ರಚಾರ ಸಮಿತಿಯ ಪದಾಧಿಕಾರಿಗಳು ಪರಿಣಾಮಕಾರಿಯಾಗಿ ಕೆಲಸ ಮಾಡಬೇಕು. ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ಈಗಿನಿಂದಲೇ ಸಿದ್ಧತೆ ಆರಂಭಿಸಿ, ಪಕ್ಷ ಸೂಚಿಸುವ ಅಭ್ಯರ್ಥಿಗಳ ಗೆಲುವಿಗೆ ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸಬೇಕು ಎಂದು ತಿಳಿಸಿದರು.
ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಭಾರತ್ ಜೋಡೋ ಯುವ ಸಂಘ ಹಾಗೂ ಆರು ಗ್ಯಾರಂಟಿ ಯೋಜನೆಗಳ ಸಮಿತಿಗಳಿಗೆ ಸಕ್ರಿಯ ಮತ್ತು ಸಮರ್ಥ ಕಾರ್ಯಕರ್ತರನ್ನು ನೇಮಕ ಮಾಡುವ ಕಾರ್ಯಕ್ಕೂ ಆದ್ಯತೆ ನೀಡಬೇಕು ಎಂದು ಸಲಹೆ ನೀಡಿದರು.
ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎಂ.ವಿ. ಅಂಜಿನಪ್ಪ ಮಾತನಾಡಿ, ವಿಜಯನಗರ ಜಿಲ್ಲೆಯಲ್ಲಿಯೇ ಹರಪನಹಳ್ಳಿ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದ್ದು, ಪಕ್ಷ ಸಂಘಟನೆಯಲ್ಲಿ ಮುಂಚೂಣಿಯಲ್ಲಿದೆ. ಪ್ರಚಾರ ಸಮಿತಿಯ ಎಲ್ಲಾ ಸಂಘಟನಾ ಚಟುವಟಿಕೆಗಳಿಗೆ ಬ್ಲಾಕ್ ಕಾಂಗ್ರೆಸ್ ಸಮಿತಿಯಿಂದ ಸಂಪೂರ್ಣ ಸಹಕಾರ ನೀಡಲಾಗುವುದು ಎಂದರು.
ಪ್ರಚಾರ ಸಮಿತಿ ಅಧ್ಯಕ್ಷ ಪೂಜಾರ ಕೃಷ್ಣ ನಾಯ್ಕ ಮಾತನಾಡಿ, ಉತ್ತರಾಖಂಡದ ಹಲ್ದ್ವಾನಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾಗವಹಿಸಿದ್ದ ಕಾರ್ಯಕ್ರಮದ ಸ್ಥಳವನ್ನು ‘ಶುದ್ಧೀಕರಣ’ ಮಾಡಲಾಗಿದೆ ಎನ್ನಲಾದ ಘಟನೆ ಹಾಗೂ ಈ ಕುರಿತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಧ್ವನಿ ಎತ್ತಿದ ಬಳಿಕ ಅವರ ವಿರುದ್ಧ ಎಫ್‌ಐಆರ್ ದಾಖಲಿಸಿರುವ ವಿಚಾರವನ್ನು ಪ್ರಸ್ತಾಪಿಸಿದರು.
ಈ ಘಟನೆ ಸಾಮಾಜಿಕ ಸಮಾನತೆ, ಮಾನವೀಯ ಮೌಲ್ಯಗಳು ಹಾಗೂ ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿದ್ದು, ಸಂಬಂಧಪಟ್ಟವರ ವಿರುದ್ಧ ಕಾನೂನುಬದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಇದೇ ವೇಳೆ, ಕೆಪಿಸಿಸಿ ಪ್ರಚಾರ ಸಮಿತಿ ಹಾಗೂ ವಿಜಯನಗರ ಜಿಲ್ಲಾ ಉಸ್ತುವಾರಿಗಳ ನೇತೃತ್ವದಲ್ಲಿ ಸೆಪ್ಟೆಂಬರ್ 11 ಮತ್ತು 12ರಂದು ಹೊಸಪೇಟೆಯಲ್ಲಿ ನಡೆಯಲಿರುವ ಹೋರಾಟದಲ್ಲಿ ಪಕ್ಷದ ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕರೆ ನೀಡಿದರು.
ಸಭೆಯಲ್ಲಿ ಮಾಜಿ ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಲಾಟಿ ದಾದಾಪೀರ್, ಪ್ರಚಾರ ಸಮಿತಿ ಉಪಾಧ್ಯಕ್ಷೆ ವನಜಾಕ್ಷಿ ಶಿವಯೋಗಿ, ನರೇಶ್, ಶಿವಣ್ಣ, ರಾಜಣ್ಣ, ರಾಮಕೃಷ್ಣ, ಭಾಷಾ, ಅಂಜಿನಪ್ಪ, ಸೋಮಣ್ಣ, ಮಹೇಶ್, ಹನಮಂತಪ್ಪ, ಹರೀಶ್, ನೇತ್ರಾವತಿ, ವಿಶ್ವನಾಥ್ ಸೇರಿದಂತೆ ಪಕ್ಷದ ಮುಖಂಡರು, ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.