×
Ad

ದೇಶದ ಭವಿಷ್ಯ ರೂಪಿಸುವಲ್ಲಿ ಸಂವಿಧಾನ ಪ್ರಮುಖ ಪಾತ್ರ ವಹಿಸಿದೆ : ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣಪ್ಪ

Update: 2025-11-26 23:22 IST

ವಿಜಯನಗರ(ಹೊಸಪೇಟೆ) : ದೇಶದ ಭವಿಷ್ಯವನ್ನು ರೂಪಿಸುವಲ್ಲಿ ಸಂವಿಧಾನವು ಪ್ರಮುಖ ಪಾತ್ರವನ್ನು ವಹಿಸುತ್ತದೆ. ಸಂವಿಧಾನವು ಮೂಲಭೂತ ಹಕ್ಕುಗಳನ್ನು ನೀಡಿದ್ದು, ಇವುಗಳು ಪ್ರಜೆಗಳ ಅಸ್ತಿತ್ವ ಮತ್ತು ಸರ್ವಾಂಗೀಣ ಅಭಿವೃದ್ದಿಗೆ ಅವಶ್ಯಕವಾಗಿವೆ ಎಂದು ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣಪ್ಪ ಹೇಳಿದರು.

ನಗರದ ಜಿಲ್ಲಾ ಒಳಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆಯಿಂದ ಹಮ್ಮಿಕೊಂಡಿದ್ದ ರಾಷ್ಟ್ರೀಯ ಸಂವಿಧಾನ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಇ.ಬಾಲಕೃಷ್ಣಪ್ಪ, 1949ರ ನವೆಂಬರ್ 26ರಂದು ಭಾರತ ಸಂವಿಧಾನವನ್ನು ಅಂಗೀಕರಿಸಿದ ಐತಿಹಾಸಿಕ ದಿನದ ನೆನಪಿಗಾಗಿ ಮತ್ತು ಸಂವಿಧಾನದ ಮಹತ್ವದ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸವ ನಿಟ್ಟಿನಲ್ಲಿ ಸಂವಿಧಾನ ದಿನಾಚರಣೆಯನ್ನು ಆಚರಿಸಲಾಗುತ್ತದೆ. ಮೂಲಭೂತ ಹಕ್ಕುಗಳಾದ ಸಮಾನತೆ ಹಕ್ಕು, ಶೋಷಣೆಯ ವಿರುದ್ಧದ ಹಕ್ಕು, ಧಾರ್ಮಿಕ ಸ್ವಾತಂತ್ರ್ಯದ ಹಕ್ಕು, ಸಾಂಸ್ಕೃತಿಕ ಮತ್ತು ಶೈಕ್ಷಣಿಕ ಹಕ್ಕು ಮತ್ತು ಸಂವಿಧಾನಾತ್ಮಕ ಪರಿಹಾರ ಹಕ್ಕುಗಳ ಬಗ್ಗೆ ನಾವು ತಿಳಿದುಕೊಳ್ಳುವುದು ಅಗತ್ಯವಿದೆ. ಸಂವಿಧಾನದಲ್ಲಿರುವ ಮೂಲಭೂತ ಕರ್ತವ್ಯಗಳನ್ನು ಪಾಲಿಸುವುದು ಕಡ್ಡಾಯವಾಗಿದೆ. ಇಂತಹ ಮೂಲಭೂತ ಹಕ್ಕುಗಳು ಮತ್ತು ಕರ್ತವ್ಯಗಳನ್ನು ಅರಿತುಕೊಳ್ಳಲು ಸಾಮಾನ್ಯ ಜನರಿಗೆ ಜಾಗೃತಿ ಮೂಡಿಸಲು ಸರ್ಕಾರದ ಜತೆಗೆ ಅನೇಕ ಸಂಘ ಸಂಸ್ಥೆಗಳು ಕೈಜೋಡಿಸಬೇಕಿದೆ. ಸಂವಿಧಾನವನ್ನು ಅರ್ಥೈಸಿಕೊಂಡು ಪಾಲಿಸುವುದು ನಾಗರಿಕರ ಕರ್ತವ್ಯವಾಗಬೇಕು ಎಂದು ಹೇಳಿದರು.  

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ದಲಿಂಗೇಶ ರಂಗಣ್ಣನವರು ಮಾತನಾಡಿ, ನಮ್ಮ ಸಂವಿಧಾನವು ಮಾನವ ಘನತೆ, ಸಮಾನತೆ ಮತ್ತು ಸ್ವಾತಂತ್ರ್ಯಕ್ಕೆ ಅತ್ಯುನ್ನತ ಮೌಲ್ಯವನ್ನು ನೀಡುತ್ತದೆ. ಇದು ನಮಗೆ ಹಕ್ಕುಗಳನ್ನು ನೀಡುತ್ತದೆ. ಹಲವಾರು ಮಹನೀಯರ ಪ್ರಾಣ ಬಲಿದಾನ ಮತ್ತು ನಿರಂತರ ಹೋರಾಟದ ಫಲವಾಗಿ ನಮ್ಮ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿದೆ.  ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮಾತ್ರ ಸಂವಿಧಾನ ಜೀವಂತಾಗಿರುತ್ತದೆ. ಸಂವಿಧಾನ ಮೂಲಭೂತ ಹಕ್ಕು ಮತ್ತು ಕರ್ತವ್ಯಗಳ ಜತೆ ದೇಶದ ಆಡಳಿತ ಮತ್ತು ಅಧಿಕಾರಿವನ್ನು ತಿಳಿಸುತ್ತದೆ. ಅನುಭವ ಮಂಟಪದ ಮೂಲಕ ಜಗತ್ತಿಗೆ ಮೊದಲ ಸಂಸತ್ತನ್ನು ಪರಿಚಯ ಮಾಡಿಕೊಟ್ಟವರು ಬಸವಣ್ಣನವರು ಎಂದರು.

ಕಾರ್ಯಕ್ರಮದಲ್ಲಿ ಥಿಯೋಸಾಫಿಕಲ್ ಕಾಲೇಜು ರಾಜ್ಯಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕ ಡಾ.ಕಿಚಡಿ ಚನ್ನಪ್ಪ ಅವರು ಭಾರತದ ಸಂವಿಧಾನದ ರಚನಾ ಸಭೆ ಹಾಗೂ ಸಂವಿಧಾನದ ಮುಖ್ಯಾಂಶಗಳ ಬಗ್ಗೆ ವಿಶೇಷ ಉಪನ್ಯಾಸ ನೀಡಿದರು.

ಈ ವೇಳೆ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಕೆ.ತಿಮ್ಮಪ್ಪ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ವೈ.ಎ.ಕಾಳೆ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕಿ ಶಾಹೇಖಾ ಆಹ್ಮದಿ, ಪ್ರಮುಖರಾದ ರಾಮಣ್ಣ, ಉದಯ ಕುಮಾರ್, ಭರತ್ ನಾಗರಾಜ, ಪಿ.ವಸಂತಕುಮಾರ್, ಭೀಮಪ್ಪ ನಾಯ್ಕರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.  

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News