×
Ad

Vijayanagar | ಖಾಸಗಿ ಶಿಕ್ಷಣ ಸಂಸ್ಥೆಗಳು ನಿಗದಿತ ಶುಲ್ಕಕ್ಕಿಂತ ಹೆಚ್ಚು ಹಣ ವಸೂಲಿ ಮಾಡಿದರೆ ಕಠಿಣ ಕ್ರಮ: ತಹಶೀಲ್ದಾರ್ ಅಂಬರೀಶ್

Update: 2026-06-13 21:08 IST

ಕೊಟ್ಟೂರು (ವಿಜಯನಗರ): ಖಾಸಗಿ ಶಿಕ್ಷಣ ಸಂಸ್ಥೆಗಳು ಪಾಲಕರಿಂದ ಸರ್ಕಾರ ಹಾಗೂ ಇಲಾಖೆ ನಿಗದಿಪಡಿಸಿರುವ ಅಧಿಕೃತ ಶುಲ್ಕವನ್ನು ಮಾತ್ರ ಪಡೆಯಬೇಕು. ನಿಗದಿತ ಶುಲ್ಕಕ್ಕಿಂತ ಹೆಚ್ಚಿನ ಹಣ ವಸೂಲಿ ಮಾಡಿದರೆ ಅಂತಹ ಶಿಕ್ಷಣ ಸಂಸ್ಥೆಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಹಶೀಲ್ದಾರ್ ಜಿ.ಕೆ. ಅಂಬರೀಶ್ ಎಚ್ಚರಿಕೆ ನೀಡಿದರು.

ಪಟ್ಟಣದ ತಾಲೂಕು ಕಚೇರಿಯ ಮಹಾತ್ಮ ಗಾಂಧೀಜಿ ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ಖಾಸಗಿ ಶಿಕ್ಷಣ ಸಂಸ್ಥೆಗಳ ಪದಾಧಿಕಾರಿಗಳ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.

ಶಿಕ್ಷಣ ಇಲಾಖೆಯಿಂದ ಅಗತ್ಯ ಪರವಾನಗಿ ಅಥವಾ ಮಾನ್ಯತೆ ಪಡೆಯದೇ ಶಾಲೆ-ಕಾಲೇಜುಗಳು ತಮ್ಮ ನಾಮಫಲಕಗಳಲ್ಲಿ ‘ಇಂಟರ್‌ನ್ಯಾಷನಲ್ ಸ್ಕೂಲ್’ ಅಥವಾ ‘ಇಂಟರ್‌ನ್ಯಾಷನಲ್ ಕಾಲೇಜು’ ಎಂಬ ಪದಗಳನ್ನು ಬಳಸುವುದು ಕಾನೂನುಬಾಹಿರವಾಗಿದ್ದು, ಅಂತಹ ಸಂಸ್ಥೆಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಮೈಲೇಶ ಬೇವೂರು ಮಾತನಾಡಿ, ಸಿಬಿಎಸ್‌ಇ ಮಾನ್ಯತೆ ಪಡೆಯದೇ ಇದ್ದರೂ ಮಾನ್ಯತೆ ಪಡೆದಿರುವುದಾಗಿ ಸುಳ್ಳು ಮಾಹಿತಿ ನೀಡಿ ವಿದ್ಯಾರ್ಥಿಗಳ ಪ್ರವೇಶ ಮಾಡಿಸಿಕೊಳ್ಳುವ ಮೂಲಕ ಪಾಲಕರನ್ನು ದಾರಿ ತಪ್ಪಿಸುವ ಶಿಕ್ಷಣ ಸಂಸ್ಥೆಗಳ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದರು.

ಶಿಕ್ಷಣ ಸಂಸ್ಥೆಗಳು ನಿಯಮಾನುಸಾರ ಕಾರ್ಯನಿರ್ವಹಿಸಿ, ಪಾಲಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಸರಿಯಾದ ಮಾಹಿತಿ ನೀಡಬೇಕು. ಶಿಕ್ಷಣ ಕ್ಷೇತ್ರದಲ್ಲಿ ಪಾರದರ್ಶಕತೆ ಕಾಪಾಡುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಹೇಳಿದರು.

ಸಭೆಯಲ್ಲಿ ಬುದ್ದಿ ದುರ್ಗೇಶ್, ಬುದ್ದಿ ಮರಿಸ್ವಾಮಿ, ವಕೀಲ ಹನುಮಂತಪ್ಪ, ಸಿಪಿಐ ದುರುಗಪ್ಪ, ಪಿಎಸ್‌ಐ ಗೀತಾಂಜಲಿ ಶಿಂಧೆ, ಎನ್. ಭರುಮಣ್ಣ, ಜಯಪ್ರಕಾಶ್ ನಾಯ್ಕ, ಚಂದ್ರಶೇಖರ್ ಸೇರಿದಂತೆ ವಿವಿಧ ಶಾಲಾ-ಕಾಲೇಜುಗಳ ಆಡಳಿತ ಮಂಡಳಿಯ ಪ್ರತಿನಿಧಿಗಳು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News