×
Ad

ವಿಜಯನಗರ | ಮಾನವ ಅಭಿವೃದ್ಧಿಗೆ ನಿಖರ ದತ್ತಾಂಶ ಅಗತ್ಯ: ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ

Update: 2026-01-28 23:09 IST

ವಿಜಯನಗರ (ಹೊಸಪೇಟೆ) : ಮಾನವ ಸಂಪನ್ಮೂಲ ಅಭಿವೃದ್ಧಿ ನಗರ ಹಾಗೂ ಗ್ರಾಮೀಣ ಹಂತದಿಂದ ಆರಂಭವಾದಾಗ ಮಾತ್ರ ಜಿಲ್ಲೆಯ ಸಮಗ್ರ ಅಭಿವೃದ್ಧಿ ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಜಿಲ್ಲೆಗೆ ಸಂಬಂಧಿಸಿದ ಸಮಗ್ರ ಮಾನವ ಅಭಿವೃದ್ಧಿ ವರದಿಯನ್ನು ಫೆ.10ರೊಳಗೆ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಸೂಚಿಸಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ 2025ರ ಮಾನವ ಅಭಿವೃದ್ಧಿ ವರದಿ ಮತ್ತು 2031ರವರೆಗೆ ಸಮಗ್ರ ಹಾಗೂ ಸುಸ್ಥಿರ ಜಿಲ್ಲಾ ಅಭಿವೃದ್ಧಿ ಯೋಜನೆ ವರದಿ ತಯಾರಿಕೆ ಕುರಿತು ಹಮ್ಮಿಕೊಳ್ಳಲಾಗಿದ್ದ ಜಿಲ್ಲಾ ಮಟ್ಟದ ತರಬೇತಿ ಕಾರ್ಯಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಭವಿಷ್ಯದ ಯೋಜನೆ ರೂಪಿಸುವ ಸಂದರ್ಭದಲ್ಲಿ ಅಧಿಕಾರಿಗಳು ಒತ್ತಡಕ್ಕೆ ಒಳಗಾಗಿ ತಪ್ಪು ಮಾಹಿತಿ ನೀಡದೇ ನಿಖರ, ಸ್ಪಷ್ಟ ಹಾಗೂ ವಾಸ್ತವಾಧಾರಿತ ದತ್ತಾಂಶವನ್ನು ಒದಗಿಸಬೇಕು ಎಂದು ತಿಳಿಸಿದರು. ಜಿಲ್ಲೆಯ ಅಭಿವೃದ್ಧಿಗೆ ಅಗತ್ಯವಿರುವ ಶಿಕ್ಷಣ, ಮಾನವ ಅಭಿವೃದ್ಧಿ ಸೂಚ್ಯಂಕ, ತಲಾ ಆದಾಯ ಸೇರಿದಂತೆ ಎಲ್ಲಾ ಅಂಶಗಳ ಸಮಗ್ರ ಮಾಹಿತಿ ಅತ್ಯಂತ ಮಹತ್ವದ್ದು ಎಂದು ಅವರು ಹೇಳಿದರು.

ಅಧಿಕಾರಿಗಳು ನೀಡುವ ದತ್ತಾಂಶದ ಆಧಾರದಲ್ಲಿಯೇ ಮುಂದಿನ ಯೋಜನೆಗಳು ರೂಪುಗೊಳ್ಳುವುದರಿಂದ, ಯಾವುದೇ ರೀತಿಯ ಗೊಂದಲ ಅಥವಾ ಸಮಸ್ಯೆಗಳು ಉಂಟಾಗದಂತೆ ಎಚ್ಚರ ವಹಿಸಬೇಕು. ಈ ನಿಟ್ಟಿನಲ್ಲಿ ಎಲ್ಲಾ ಇಲಾಖೆಗಳ ಅಧಿಕಾರಿಗಳು ಪರಸ್ಪರ ಸಮನ್ವಯತೆಯಿಂದ ಕಾರ್ಯನಿರ್ವಹಿಸಿ ಪೂರಕ ವರದಿ ತಯಾರಿಸಿ ಜೂನ್ ಅಂತ್ಯದೊಳಗೆ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿಗಳು ಸೂಚಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸಿಇಓ ನೊಗ್ಜಾಯ್ ಮಹಮದ್ ಅಲಿ ಅಕ್ರಂ ಷಾ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮಂಜುನಾಥ, ಕನ್ನಡ ವಿಶ್ವವಿದ್ಯಾಲಯದ ಸಮಾಜ ವಿಜ್ಞಾನಗಳ ನಿಕಾಯ ಡೀನ್ ಹೆಚ್.ಡಿ. ಪ್ರಶಾಂತ, ಡಾ. ಜಿ.ಎಸ್. ಗಣೇಶ್ ಪ್ರಸಾದ್, ಟೆಕ್ ಏಜೆನ್ಸಿ ಹಾಗೂ ಜಿಲ್ಲಾ ನೋಡಲ್ ಅಧಿಕಾರಿ ನಾರಾಯಣ ಶಾಸ್ತ್ರಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News