×
Ad

ವಿಜಯನಗರ | ಹಂಪಿ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಸಿದ್ಧ : ಗಜೇಂದ್ರ ಸಿಂಗ್ ಶೇಖಾವತ್

Update: 2026-01-06 22:52 IST

ವಿಜಯನಗರ / ಹೊಸಪೇಟೆ : ವಿಶ್ವ ಪರಂಪರೆ ಪಟ್ಟಿಯಲ್ಲಿ ಸ್ಥಾನ ಪಡೆದಿರುವ ವಿಜಯನಗರ ಸಾಮ್ರಾಜ್ಯದ ರಾಜಧಾನಿ ಹಂಪಿಯ ಸಮಗ್ರ ಅಭಿವೃದ್ಧಿಗೆ ಅಗತ್ಯವಿರುವ ಎಲ್ಲಾ ಯೋಜನೆಗಳನ್ನು ಅನುಷ್ಠಾನಗೊಳಿಸಲು ಕೇಂದ್ರ ಸರ್ಕಾರ ಸಂಪೂರ್ಣ ಸಿದ್ಧವಾಗಿದೆ. ಆದರೆ ಇದಕ್ಕೆ ರಾಜ್ಯ ಸರ್ಕಾರದ ಸಹಭಾಗಿತ್ವ ಅತ್ಯಂತ ಅಗತ್ಯವಾಗಿದೆ ಎಂದು ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರು ಹೇಳಿದರು.

ಹಂಪಿ ಹೆರಿಟೇಜ್ ಹೋಟೆಲ್‌ನಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಜಯನಗರ ಕ್ಷೇತ್ರದ ಶಾಸಕ ಗವಿಯಪ್ಪ ಅವರಿಂದ ಆಯೋಜಿಸಲಾಗಿದ್ದ ಹಂಪಿ ಅಭಿವೃದ್ಧಿ ಕುರಿತ ವಿಶೇಷ ಪಕ್ಷಿ ನೋಟ (ಬರ್ಡ್ಸ್ ಐ ವ್ಯೂ) ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ಬೆಂಗಳೂರಿನ ಖ್ಯಾತ ವಾಸ್ತುಶಿಲ್ಪಿಯವರು ಹಂಪಿ ಅಭಿವೃದ್ಧಿಗೆ ಸಂಬಂಧಿಸಿದ ಪಿಪಿಟಿ ಪ್ರಸ್ತುತಪಡಿಸಿದ್ದು, ಅದನ್ನು ವೀಕ್ಷಿಸಿದ ನಂತರ ಸಂತಸ ವ್ಯಕ್ತಪಡಿಸಿದ ಶೇಖಾವತ್ ಅವರು,

ಹಂಪಿಯ ಧಾರ್ಮಿಕ ಪ್ರವಾಸೋದ್ಯಮ ಹಾಗೂ ಸಾಂಸ್ಕೃತಿಕ ಪ್ರವಾಸೋದ್ಯಮವನ್ನು ಉತ್ತೇಜಿಸುವ ಜೊತೆಗೆ ಅದರ ಮೂಲ ಅಸ್ತಿತ್ವವನ್ನು ಉಳಿಸಿಕೊಂಡು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಬಹುದು ಎಂದು ಹೇಳಿದರು. ಈ ಮಹತ್ವದ ಯೋಜನೆ ಯಶಸ್ವಿಯಾಗಬೇಕಾದರೆ ರಾಜ್ಯ ಸರ್ಕಾರದ ಸಹಕಾರ ಅತ್ಯಗತ್ಯ ಎಂದು ಪುನರುಚ್ಚರಿಸಿದರು.

ಕೇಂದ್ರ ಸರ್ಕಾರ ಈಗಾಗಲೇ ಅಭಿವೃದ್ಧಿಗೆ ಬದ್ಧವಾಗಿದ್ದು, ಹಣಕಾಸು ಸಚಿವರನ್ನು ಒಳಗೊಂಡಂತೆ ಅನೇಕರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಂಪಿಯ ಸ್ವಚ್ಛತೆ, ಮೂಲಸೌಕರ್ಯ ಹಾಗೂ ಸಮಗ್ರ ಅಭಿವೃದ್ಧಿಗೆ ಪೂರಕವಾದ ಯೋಜನೆಗಳನ್ನು ರೂಪಿಸಲು ಕೇಂದ್ರ ಸರ್ಕಾರ ಸಿದ್ಧವಾಗಿದೆ ಎಂದರು.

ಹಂಪಿಯ ಅಭಿವೃದ್ಧಿ ಕಾರ್ಯಗಳ ಜವಾಬ್ದಾರಿಯನ್ನು ಸ್ಥಳೀಯ ಆಡಳಿತಕ್ಕೆ ನೀಡಲಾಗಿದ್ದು, ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಚುನಾಯಿತ ಶಾಸಕರನ್ನು ಒಳಗೊಂಡ ಸಮಿತಿಯನ್ನು ರಚಿಸಲಾಗಿದೆ. ಸಮಿತಿಯು ಅಗತ್ಯ ಅಂಶಗಳ ಪಟ್ಟಿಯನ್ನು ಸಿದ್ಧಪಡಿಸಿ ರಾಜ್ಯ ಸರ್ಕಾರದ ಅನುಮೋದನೆ ದೊರೆತ ಬಳಿಕ, ಕೇಂದ್ರ ಸರ್ಕಾರವು ಸಂಪೂರ್ಣ ಸಹಕಾರ ನೀಡಲಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ವಿಜಯನಗರ ಕ್ಷೇತ್ರ, ಹೊಸಪೇಟೆ ಹಾಗೂ ಹಂಪಿಗೆ ಅಗತ್ಯವಿರುವ ಮೂಲಭೂತ ಸೌಲಭ್ಯಗಳ ಕುರಿತು ಶಾಸಕರು ಮನವಿ ಪತ್ರ ಸಲ್ಲಿಸಿದರು. ಮನವಿ ಪತ್ರವನ್ನು ಸ್ವೀಕರಿಸಿದ ಶೇಖಾವತ್ ಅವರು, ಸೂಕ್ತ ಸಮಯದಲ್ಲಿ ಎಲ್ಲ ಕಾಮಗಾರಿಗಳನ್ನು ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಕವಿತಾ ಮನಿಕೇರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೊಹಮ್ಮದ್ ಅಲಿ ಅಕ್ರಮ್ ಶಾ, ಉಪಯುಕ್ತರು ವಿವೇಕಾನಂದ, ತಾಲೂಕು ದಂಡಾಧಿಕಾರಿ ಶ್ರುತಿ ಮಲ್ಲಪ್ಪ ಗೌಡ, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಪ್ರವಾಸೋದ್ಯಮ ಇಲಾಖೆಯ ಹಿರಿಯ ಅಧಿಕಾರಿಗಳು ಸೇರಿದಂತೆ ಅನೇಕ ಗಣ್ಯರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News