ವಿಜಯನಗರ | ಬಾಲ್ಯ ವಿವಾಹ ಶಿಕ್ಷಾರ್ಹ ಅಪರಾಧ : ಕೆ.ನಾಗಣ್ಣ ಗೌಡ
ವಿಜಯನಗರ (ಹೊಸಪೇಟೆ) : ಸರ್ಕಾರದ ಎಲ್ಲಾ ಕಚೇರಿಗಳಲ್ಲಿ ಕಾನೂನಾತ್ಮಕ ದಾಖಲೆಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ಕಡತಗಳ ಮೇಲೆ ಬಾಲ್ಯ ವಿವಾಹ ಶಿಕ್ಷಾರ್ಹ ಅಪರಾಧ ಎಂಬ ಟ್ಯಾಗ್‌ಲೈನ್ ಮುದ್ರಿಸುವಂತೆ ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ಅಧ್ಯಕ್ಷ ಕೆ.ನಾಗಣ್ಣ ಗೌಡ ಹೇಳಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ಅಧ್ಯಕ್ಷರು ಮತ್ತು ಎಲ್ಲಾ ಸದಸ್ಯರ ಉಪಸ್ಥಿತಿಯಲ್ಲಿ ಆರ್.ಟಿ.ಇ-2009, ಪೋಕ್ಸೋ-2012 ಹಾಗೂ ಬಾಲ ನ್ಯಾಯ ಕಾಯಿದೆ-2015 ರ ಅನುಷ್ಠಾನದ ಕುರಿತು ಜಿಲ್ಲಾ ಮತ್ತು ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಮಕ್ಕಳ ಪಾಲನಾ ಸಂಸ್ಥೆಗಳ ಮುಖ್ಯಸ್ಥರೊಂದಿಗೆ ಮಕ್ಕಳಿಗೆ ಸಂಬಂಧಿಸಿದ ಕಾರ್ಯಕ್ರಮ, ಯೋಜನೆಗಳ ಕುರಿತ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಂಗಳವಾರ ಮಾತನಾಡಿದರು.
ಮಕ್ಕಳ ಕುರಿತು ಕಾರ್ಯನಿರ್ವಹಿಸುವ ಎಲ್ಲಾ ಇಲಾಖೆಗಳು ಮಕ್ಕಳ ಹಕ್ಕುಗಳ ರಕ್ಷಣೆಗೆ ಮತ್ತು ಮಕ್ಕಳನ್ನು ಮುಖ್ಯವಾಹಿನಿಗೆ ತರಲು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕಿದೆ. ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ, ಪಂಚಾಯತ್ ರಾಜ್, ಕೃಷಿ, ತೋಟಗಾರಿಕೆ ಸೇರಿದಂತೆ ಎಲ್ಲಾ ಇಲಾಖೆಗಳಲ್ಲಿ ಮಕ್ಕಳಿಗೋಸ್ಕರ ಸೇವೆ ಮಾಡುವ ಸದಾವಕಾಶ ಇದೆ. ಮಕ್ಕಳೊಂದಿಗೆ ಹೆಚ್ಚು ಸಮಯ ಕಳೆಯಿರಿ, ಅವರನ್ನು ಅರ್ಥ ಮಾಡಿಕೊಳ್ಳಿ, ಅವರಿಗಾಗಿ ಉತ್ತಮ ಸೇವೆ ನೀಡಬೇಕು ಎಂದು ಹೇಳಿದರು.
ರಾಜ್ಯದಲ್ಲಿ ಬಾಲ ನ್ಯಾಯ ಕಾಯ್ದೆಯನ್ನು ಸಮರ್ಪಕವಾಗಿ ಜಾರಿಗೊಳಿಸಲು ಎಲ್ಲಾ ಇಲಾಖೆ ಅಧಿಕಾರಿಗಳಿಗೆ ತರಬೇತಿ ನೀಡುವ ಅಗತ್ಯವಿದೆ. ಪೋಕ್ಸೋ ಪ್ರಕರಣಗಳು, ಬಾಲ್ಯ ವಿವಾಹಗಳು ನಿಯಂತ್ರಿಸಲು ಸರ್ಕಾರದ ಸುತ್ತೋಲೆಗಿಂತ ಮಾನವೀಯ ನೆಲೆಗಟ್ಟಿನಲ್ಲಿ ಕರ್ತವ್ಯ ನಿರ್ವಹಿಸಬೇಕಿದೆ. ಎಲ್ಲಾ ಶಾಲೆಗಳಲ್ಲಿ ಮಕ್ಕಳ ರಕ್ಷಣಾ ನೀತಿ ಬಗ್ಗೆ ಸರ್ಕಾರದ ಪ್ರಮಾಣಿತ ಕಾರ್ಯಾಚರಣಾ ವಿಧಾನಗಳು(ಎಸ್‌ಓಪಿ)ಗಳನ್ನು ಎಲ್ಲಾ ಇಲಾಖೆ ಅಧಿಕಾರಿಗಳು ಅರಿತು ತಮ್ಮ ಇಲಾಖೆ ಸಿಬ್ಬಂದಿಗಳಿಗೆ ಜಾಗೃತಿ ಮೂಡಿಸಬೇಕಿದೆ. ಪ್ರಸ್ತುತದಲ್ಲಿ ಮಕ್ಕಳಿಗೆ ಅನ್‌ಲೈನ್ ಚಟುವಟಿಕೆಗಳು ಮತ್ತು ಮಾದಕ ವಸ್ತುಗಳು ವಿಪರೀತ ಮಾರಕವಾಗಿವೆ. ಅಧಿಕಾರಿಗಳು ಮಕ್ಕಳ ಭವಿಷ್ಯದ ಬಗ್ಗೆ ಚಿಂತನೆ ನಡೆಸಬೇಕಿದೆ ಎಂದರು.
ಆಯೋಗದ ಸದಸ್ಯ ಶಶಿಧರ ಕೊಸಂಬೆ, ಆಯೋಗದ ಸದಸ್ಯರಾದ ಡಾ.ಕೆ.ಟಿ.ತಿಪ್ಪೇಸ್ವಾಮಿ, ಆಯೋಗದ ಸದಸ್ಯರಾದ ವೆಂಕಟೇಶ್, ಆಯೋಗದ ಸದಸ್ಯರಾದ ಶೇಖರಗೌಡ ರಾಮತ್ನಾಳ ಮಾತನಾಡಿದರು.
ಈ ವೇಳೆ ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್, ಜಿಪಂ ಸಿಇಓ ನೋಂಗ್ಜಾಯ್ ಮುಹಮ್ಮದ್ ಅಕ್ರಮ್ ಅಲಿ ಷಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀಹರಿಬಾಬು ಬಿ.ಎಲ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಶ್ವೇತಾ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸುದೀಪ್ ಉಂಕಿ ಸೇರಿದಂತೆ ವಿವಿಧ ಇಲಾಖೆ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.