ವಿಜಯನಗರ | ಮಕ್ಕಳ ಆರೋಗ್ಯಕ್ಕೆ ಮೊದಲ ಆದ್ಯತೆ ನೀಡಬೇಕು : ಸಿಇಓ ಮುಹಮ್ಮದ್ ಅಲಿ ಅಕ್ರಂ ಷಾ
ವಿಜಯನಗರ(ಹೊಸಪೇಟೆ) : ಎಲ್ಲಾ ಶಾಲೆಗಳಲ್ಲಿ ಮಕ್ಕಳಿಗೆ ನೀಡುವ ಬಿಸಿಯೂಟ ಸೇರಿ ಶುಚಿ, ರುಚಿ, ಸ್ವಾಸ್ಥ್ಯದೊಂದಿಗೆ ಮಕ್ಕಳ ಆರೋಗ್ಯಕ್ಕೆ ಮೊದಲ ಆದ್ಯತೆ ನೀಡಬೇಕು .ಇದಕ್ಕೆ ವಿವಿಧ ಇಲಾಖೆಗಳ ಅಧಿಕಾರಿಗಳ ಸಮನ್ವಯತೆ ಮುಖ್ಯ. ಅಧಿಕಾರಿಗಳು ತಮ್ಮ ಜವಾಬ್ದಾರಿಗಳನ್ನು ಅರಿತು ಕರ್ತವ್ಯ ನಿರ್ವಹಿಸಿ ಎಂದು ಜಿಪಂ ಸಿಇಓ ನೋಂಗ್ಜಾಯ್ ಮುಹಮ್ಮದ್ ಅಲಿ ಅಕ್ರಂ ಷಾ ಸೂಚನೆ ನೀಡಿದರು.
ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವಿಜಯ ವಿಠಲ ಸಭಾಂಗಣದಲ್ಲಿ ಏರ್ಪಡಿಸಿದ್ದ ʼಅತಿಸಾರ ಭೇದಿ ನಿಯಂತ್ರಣ ಅಂತರ ಇಲಾಖೆ ಸಮನ್ವಯ ಸಮಿತಿ ಸಭೆʼಯ ಅಧ್ಯಕ್ಷತೆ ವಹಿಸಿ ಶುಕ್ರವಾರ ಮಾತನಾಡಿದರು.
ಜಿಲ್ಲೆಯಲ್ಲಿ ತೀವ್ರ ಅತಿಸಾರದಿಂದ ಮಕ್ಕಳ ಮರಣವನ್ನು ಶೂನ್ಯಕ್ಕೆ ತರುವುದನ್ನು ಗುರಿಯಾಗಿಸಿ ತೀವ್ರ ಅತಿಸಾರ ಭೇದಿ ನಿಯಂತ್ರಣ ಪಾಕ್ಷಿಕ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಶಂಕರ್ ನಾಯ್ಕ.ಎಲ್.ಆರ್, ಆರ್‌ಸಿಹೆಚ್ ಅಧಿಕಾರಿ ಡಾ.ಜಂಬಯ್ಯ ಮಾತನಾಡಿದರು.
ಈ ವೇಳೆ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಷಣ್ಮುಖ ಗೌಡ, ಜಿಲ್ಲಾ ಮಲೇರಿಯಾ ನಿರ್ಮೂಲನಾಧಿಕಾರಿ ಡಾ.ಸತೀಶ್‌ಚಂದ್ರ, ಶಿಶು ಅಭಿವೃದ್ದಿ ಇಲಾಖೆ, ಆರೋಗ್ಯ ಇಲಾಖೆ, ಶಿಕ್ಷಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.