ವಿಜಯನಗರ| ಸಿರಿಧಾನ್ಯಗಳ ನಡಿಗೆ ಜಾಗೃತಿ ಜಾಥಾಕ್ಕೆ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಚಾಲನೆ
ವಿಜಯನಗರ(ಹೊಸಪೇಟೆ): ದೈನಂದಿನ ಆಹಾರದಲ್ಲಿ ಪ್ರತಿಯೊಬ್ಬರು ಸಿರಿಧಾನ್ಯಗಳ ಬಳಕೆಯನ್ನು ಹೆಚ್ಚಿಸಿ ಆರೋಗ್ಯಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ಪ್ರಸ್ತುತದಲ್ಲಿ ಆಹಾರವೇ ಆರೋಗ್ಯವಾಗಿದೆ ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಹೇಳಿದರು.
ನಗರದ ಕನಕದಾಸರ ವೃತ್ತದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಕೃಷಿ ಇಲಾಖೆ ವತಿಯಿಂದ ಅಹಾರ ಮತ್ತು ಪೌಷ್ಠಿಕ ಭದ್ರತೆ ಯೋಜನೆಯ ನ್ಯೂಟ್ರಿ ಸಿರಿಧಾನ್ಯಗಳ ಕಾರ್ಯಕ್ರಮದಲ್ಲಿ ಆಹಾರ ಜಿಲ್ಲಾ ಮಟ್ಟದ ಸಿರಿಧಾನ್ಯ ಹಾಗೂ ಸಾವಯವ ಮೇಳದ ಪ್ರಯುಕ್ತ ಏರ್ಪಡಿಸಿದ್ದ ಸಿರಿಧಾನ್ಯಗಳ ನಡಿಗೆ, ಜಾಗೃತಿ ಜಾಥಕ್ಕೆ ಚಾಲನೆ ನೀಡಿ ಮಾತನಾಡಿದ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ, ದೇಶದಲ್ಲಿನ ಸಿರಿಧಾನ್ಯಗಳು ಸಾಂಪ್ರದಾಯಿಕ ಭಾರತೀಯ ಕೃಷಿಯಲ್ಲಿ ಅತ್ಯಂತ ಪೌಷ್ಠಿಕಾಂಶಯುಕ್ತವಾದ ಧಾನ್ಯಗಳಾಗಿವೆ. ಇವುಗಳನ್ನು ಆಹಾರ ಪದ್ದತಿಯಲ್ಲಿ ಹೆಚ್ಚಾಗಿ ಬಳಕೆ ಮಾಡುವುದರಿಂದ ಉತ್ತಮ ಆರೋಗ್ಯವನ್ನು ಪಡೆಯಬಹುದು. ಸಿರಿಧಾನ್ಯಗಳಲ್ಲಿ ನಾರು, ಕಬ್ಬಿಣದ ಅಂಶಗಳು ಹಾಗೂ ಕಾರ್ಬೋಹೈಡ್ರೇಟ್‌ಗಳು ಹೆಚ್ಚಾಗಿವೆ ಎಂದು ಹೇಳಿದರು.
ಈ ವೇಳೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನೋಂಗ್ಜಾಯ್ ಮುಹಮ್ಮದ್ ಅಲಿ ಅಕ್ರಮ್ ಶಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್.ಜಾಹ್ನವಿ, ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣಪ್ಪ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಕೆ.ತಿಮ್ಮಪ್ಪ, ಜಂಟಿ ಕೃಷಿ ನಿರ್ದೇಶಕ ಡಿ.ಟಿ.ಮಂಜುನಾಥ್, ಕೃಷಿ ಇಲಾಖೆ ಉಪನಿರ್ದೇಶಕ ನೂರ್‌ಭಾಷಾ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.