×
Ad

ವಿಜಯನಗರ | 74 ಫಲಾನುಭವಿಗಳಿಗೆ ನಿವೇಶನ ಹಕ್ಕುಪತ್ರ ವಿತರಣೆ

Update: 2026-03-03 21:42 IST

ವಿಜಯನಗರ (ಹೊಸಪೇಟೆ) : ಮುಖ್ಯಮಂತ್ರಿ ಗ್ರಾಮೀಣ ನಿವೇಶನ ಯೋಜನೆಯಡಿ ನಿವೇಶನ ರಹಿತ ಅರ್ಹ 74 ಫಲಾನುಭವಿಗಳಿಗೆ ಕಾನೂನುಬದ್ಧವಾಗಿ ನಿವೇಶನ ಹಕ್ಕುಪತ್ರ ವಿತರಿಸಲಾಗಿದೆ ಎಂದು ಶಾಸಕ ಎಚ್.ಆರ್.ಗವಿಯಪ್ಪ ತಿಳಿಸಿದ್ದಾರೆ.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯಿತಿ ಹಾಗೂ ಪಾಪಿನಾಯಕನಹಳ್ಳಿ ಗ್ರಾಮ ಪಂಚಾಯಿತಿ ಸಂಯುಕ್ತಾಶ್ರಯದಲ್ಲಿ ಮಂಗಳವಾರ ಪಾಪಿನಾಯಕನಹಳ್ಳಿಯ ಚಿಂದುಲ ನಾಗಮ್ಮ ಕಲ್ಯಾಣ ಮಂಟಪದಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಕ್ಕುಪತ್ರ ವಿತರಿಸಿ ಅವರು ಮಾತನಾಡಿದರು.

ಸುಪ್ರೀಂ ಕೋರ್ಟ್ ಆದೇಶದಂತೆ ನಿವೇಶನ ರಹಿತರಿಗೆ ಮೂಲ ಸೌಕರ್ಯಗಳೊಂದಿಗೆ ನಿವೇಶನ ಒದಗಿಸುವುದರ ಜೊತೆಗೆ ಮನೆ ನಿರ್ಮಾಣ ವ್ಯವಸ್ಥೆಯೂ ಮಾಡಲಾಗಿದೆ. ಈ ಯೋಜನೆಯನ್ನು ಹೊರ ರಾಜ್ಯಗಳಿಂದ ಬಂದವರಿಗಷ್ಟೇ ಅಲ್ಲದೆ ಸ್ಥಳೀಯರಿಗೂ ಅವಕಾಶ ಕಲ್ಪಿಸಲು ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಹೇಳಿದರು. ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಮತ್ತು ಉತ್ತಮ ಸಂಸ್ಕಾರ ನೀಡುವಂತೆ ಪೋಷಕರಿಗೆ ಸಲಹೆ ನೀಡಿದರು.

ಪಾಪಿನಾಯಕನಹಳ್ಳಿ ಗ್ರಾಮಸಭೆಯಲ್ಲಿ 97 ಫಲಾನುಭವಿಗಳು ಆಯ್ಕೆಯಾಗಿದ್ದು, ಈ ಪೈಕಿ 74 ಮಂದಿಗೆ ಹಕ್ಕುಪತ್ರ ವಿತರಿಸಲಾಗಿದೆ. ಉಳಿದ 23 ನಿವೇಶನಗಳಲ್ಲಿ 3 ಮಂದಿಗೆ ರೇಷನ್ ಕಾರ್ಡ್ ಇಲ್ಲದ ಕಾರಣ, 6 ಮಂದಿಗೆ ದಾಖಲೆಗಳ ಕೊರತೆಯಿಂದ ಹಾಗೂ 3 ಪ್ರಕರಣಗಳು ತಾಲ್ಲೂಕು ಪಂಚಾಯಿತಿಯಲ್ಲಿ ಬಾಕಿ ಇರುವುದರಿಂದ ಹಕ್ಕುಪತ್ರ ನೀಡಲಾಗಿಲ್ಲ. ಇವುಗಳಿಗೆ ಶೀಘ್ರ ಕ್ರಮ ಕೈಗೊಳ್ಳಲಾಗುವುದು. ಇನ್ನೂ 11 ಅರ್ಜಿಗಳು ಇತರ ವಸತಿ ಯೋಜನೆಗಳಡಿ ಅರ್ಜಿ ಸಲ್ಲಿಸಿರುವ ಹಿನ್ನೆಲೆಯಲ್ಲಿ ತಿರಸ್ಕರಿಸಲಾಗಿದೆ ಎಂದು ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಆಲಂ ಭಾಷಾ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಭೀರಪ್ಪ, ವಸತಿ ಇಲಾಖೆಯ ನೋಡಲ್ ಅಧಿಕಾರಿ ಮಹೇಶ್, ಆಡಳಿತಾಧಿಕಾರಿ ಸಿಂಧು ಅಂಗಡಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News