ವಿಜಯನಗರ | ಅ.7ರಂದು ಜಿಲ್ಲಾ ಮಟ್ಟದ ವಾಲ್ಮೀಕಿ ಜಯಂತಿ ಆಚರಣೆ : ಡಿಸಿ ಕವಿತಾ ಎಸ್.ಮನ್ನಿಕೇರಿ
ವಿಜಯನಗರ (ಹೊಸಪೇಟೆ): ಶೀಗಿ ಹುಣ್ಣಿಮೆ ಪ್ರಯುಕ್ತ ಅ.7ರಂದು ನಗರದ ಪುಣ್ಯಾನಂದಪುರಿ ಕಲ್ಯಾಣ ಮಂಟಪದಲ್ಲಿ ಶ್ರೀಮಹರ್ಷಿ ವಾಲ್ಮೀಕಿ ಜಯಂತಿಯನ್ನು ಜಿಲ್ಲಾ ಮಟ್ಟದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ತಿಳಿಸಿದ್ದಾರೆ.
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಪ್ರತಿವರ್ಷದಂತೆ ಈ ಬಾರಿಯೂ ಸಕಲ ಸಿದ್ಧತೆಗಳನ್ನು ಕೈಗೊಳ್ಳಬೇಕು ಎಂದು ಸೂಚಿಸಿದರು. ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆ, ಸಾಮಾಜಿಕ ಸೇವೆ ಹಾಗೂ ಉನ್ನತ ಶಿಕ್ಷಣದಲ್ಲಿ ಸಾಧನೆಗೈದವರನ್ನು ಗುರುತಿಸಿ ಪ್ರತಿಭಾ ಪುರಸ್ಕಾರ ನೀಡಲಾಗುವುದು ಎಂದರು.
ಸಭೆಯಲ್ಲಿ ವಾಲ್ಮೀಕಿ ಮಹಾಸಭಾದ ತಾಲೂಕು ಅಧ್ಯಕ್ಷ ಗೋಸಲ ಭರಮಪ್ಪ ಮಾತನಾಡಿ, ರಾಜ್ಯದ ವಾಲ್ಮೀಕಿ ಸಮುದಾಯದ ಹಕ್ಕುಗಳಿಗೆ ಧಕ್ಕೆಯಾಗುತ್ತಿರುವ ವಿಚಾರವನ್ನು ಖಂಡಿಸಿ, ಸುಳ್ಳು ಜಾತಿ ಪ್ರಮಾಣ ಪತ್ರದ ಮೂಲಕ ಸೌಲಭ್ಯ ಪಡೆಯುವವರ ವಿರುದ್ಧ ಮೌನ ಹೋರಾಟಕ್ಕೆ ಸಜ್ಜಾಗುತ್ತಿರುವುದಾಗಿ ಹೇಳಿದರು. ಜಯಂತಿ ಆಚರಣೆ ಕುರಿತು ಮುಂದಿನ ಸಭೆಯಲ್ಲಿ ನಿರ್ಧಾರ ಕೈಗೊಳ್ಳುವುದಾಗಿ ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್. ಜಾಹ್ನವಿ, ಅಪರ ಜಿಲ್ಲಾಧಿಕಾರಿ ಇ. ಬಾಲಕೃಷ್ಣಪ್ಪ, ಹೊಸಪೇಟೆ ಸಹಾಯಕ ಆಯುಕ್ತ ಪಿ. ವಿವೇಕಾನಂದ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಕೆ. ರವಿಕುಮಾರ್, ಸಮಾಜ ಕಲ್ಯಾಣ ಇಲಾಖೆಯ ವೈ. ಎ. ಕಾಳೆ ಸೇರಿದಂತೆ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.