ವಿಜಯನಗರ | ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗಾಗಿ ಎಲ್ಲರೂ ಒಟ್ಟಾಗಿ ದುಡಿಯೋಣ : ಡಿಸಿ ಎಸ್.ಕವಿತಾ ಮನ್ನಿಕೇರಿ
ಕಲ್ಯಾಣ ಕರ್ನಾಟಕ ಉತ್ಸವ ಆಚರಣೆ
ವಿಜಯನಗರ (ಹೊಸಪೇಟೆ): ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗಾಗಿ ಎಲ್ಲರೂ ಒಟ್ಟಾಗಿ ಶ್ರಮಿಸಬೇಕು ಎಂದು ಜಿಲ್ಲಾಧಿಕಾರಿ ಎಸ್.ಕವಿತಾ ಮನ್ನಿಕೇರಿ ಹೇಳಿದರು.
ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ನಗರಸಭೆಯ ಸಹಯೋಗದಲ್ಲಿ ನಡೆದ ಕಲ್ಯಾಣ ಕರ್ನಾಟಕ ಉತ್ಸವದಲ್ಲಿ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿ ಮಾತನಾಡಿದರು.
ಹೈದರಾಬಾದ್ ನಿಜಾಮರ ಆಳ್ವಿಕೆಯಿಂದ ಮುಕ್ತಗೊಂಡು ಕಲ್ಯಾಣ ಕರ್ನಾಟಕ ಭಾಗವು 78 ವರ್ಷಗಳ ಹಿಂದೆ ಸ್ವಾತಂತ್ರ್ಯ ಕಂಡಿತು. ಇಂದು ಈ ಭಾಗಕ್ಕೆ ಶಿಕ್ಷಣ, ಆರೋಗ್ಯ, ಮೂಲಸೌಕರ್ಯಗಳ ಅಭಿವೃದ್ಧಿಗೆ ಕೋಟ್ಯಾಂತರ ಅನುದಾನ ನೀಡಲಾಗಿದೆ. ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಎಲ್ಲರೂ ಒಂದಾಗಿ ದುಡಿಯೋಣ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಶಾಸಕ ಹೆಚ್.ಆರ್. ಗವಿಯಪ್ಪ ಮಾತನಾಡಿ, ಅನುಚ್ಛೇದ 371ಜೆ ಮೂಲಕ ಕಲ್ಯಾಣ ಕರ್ನಾಟಕ ಭಾಗಕ್ಕೆ ನೀಡಿರುವ ವಿಶೇಷ ಸ್ಥಾನಮಾನವನ್ನು ಪ್ರಜೆಗಳು ಸದುಪಯೋಗಪಡಿಸಿಕೊಳ್ಳಬೇಕು. ರೈತರು ತಮ್ಮ ಕೃಷಿಭೂಮಿಯನ್ನು ಮಾರಬಾರದು ಎಂದು ತಿಳಿಸಿದರು.
ಹೂವಿನಹಡಗಲಿ ಸರ್ಕಾರಿ ಬಾಲಕಿಯರ ಕಾಲೇಜಿನ ಉಪನ್ಯಾಸಕ ಗುರುಬಸವರಾಜ್ ವಿದ್ಯಾರ್ಥಿಗಳಿಗೆ ಕಲ್ಯಾಣ ಕರ್ನಾಟಕ ವಿಮೋಚನೆಯ ಬಗ್ಗೆ ವಿಶೇಷ ಉಪನ್ಯಾಸ ನೀಡಿದರು.
ಈ ಸಂದರ್ಭದಲ್ಲಿ ಹುಡಾ ಅಧ್ಯಕ್ಷ ಹೆಚ್.ಎನ್.ಎಫ್. ಇಮಾಮ್ ನಿಯಾಜಿ, ನಗರಸಭೆ ಅಧ್ಯಕ್ಷ ಎನ್. ರೂಪೇಶ್ ಕುಮಾರ್, ಜಿಲ್ಲಾ ಪಂಚಾಯತ್ ಸಿಇಒ ನೋಂಗ್ಜಾಯ್ ಮೊಹಮದ್ ಅಲಿ ಅಕ್ರಮ್ ಷಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್. ಜಾಹ್ನವಿ ಸೇರಿದಂತೆ ಹಲವಾರು ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಹಾಜರಿದ್ದರು.
ಧ್ವಜಾರೋಹಣದ ಬಳಿಕ ಆಕರ್ಷಕ ಪಥಸಂಚಲನ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.