×
Ad

ವಿಜಯನಗರ | ಬಾಳೆಹಣ್ಣಿನ ಆಸೆ ತೋರಿಸಿ ವಿದ್ಯಾರ್ಥಿಗಳಿಂದ ಶೌಚಾಲಯ ಸ್ವಚ್ಛತೆ ಆರೋಪ : ಮುಖ್ಯ ಶಿಕ್ಷಕ ವಿರುದ್ಧ ಗ್ರಾಮಸ್ಥರ ಪ್ರತಿಭಟನೆ

Update: 2026-03-09 00:14 IST

ವಿಜಯನಗರ / ಹಗರಿಬೊಮ್ಮನಹಳ್ಳಿ: ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ಹಂಪಾಪಟ್ಟಣ ಗ್ರಾಮದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪ್ರಭಾರಿ ಮುಖ್ಯ ಶಿಕ್ಷಕ ಉಮೇಶ್ ಅವರು ಇಬ್ಬರು ವಿದ್ಯಾರ್ಥಿಗಳಿಗೆ ಬಾಳೆಹಣ್ಣಿನ ಆಸೆ ತೋರಿಸಿ ಶಾಲೆಯ ಶೌಚಾಲಯವನ್ನು ಸ್ವಚ್ಛಗೊಳಿಸಿದ ಘಟನೆ ಬೆಳಕಿಗೆ ಬಂದಿದ್ದು, ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಕ್ಕಳಿಗೆ ಪಾಠ ಹೇಳಬೇಕಾದ ಶಿಕ್ಷಕರೇ ವಿದ್ಯಾರ್ಥಿಗಳಿಂದ ಇಂತಹ ಕೆಲಸ ಮಾಡಿಸಿಕೊಂಡಿರುವುದು ಅಮಾನವೀಯ ಕೃತ್ಯ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಘಟನೆಯನ್ನು ಗಮನಿಸಿದ ಸ್ಥಳೀಯ ಯುವಕರು ಶಿಕ್ಷಕನನ್ನು ಪ್ರಶ್ನಿಸಿದಾಗ, ತಮ್ಮನ್ನು ಪ್ರಶ್ನಿಸಲು ಯಾರಿಗೂ ಹಕ್ಕಿಲ್ಲ ಎಂದು ಹೇಳಿ ಪೊಲೀಸ್ ಕೇಸ್ ಹಾಕಿಸುವುದಾಗಿ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ.

ಈ ವಿಚಾರ ತಿಳಿಯುತ್ತಿದ್ದಂತೆಯೇ ನೂರಾರು ಸಂಖ್ಯೆಯಲ್ಲಿ ಗ್ರಾಮಸ್ಥರು ಶಾಲೆಯ ಮುಂದೆ ಜಮಾಯಿಸಿ ಪ್ರತಿಭಟನೆ ನಡೆಸಿದರು. ಮಕ್ಕಳಿಗೆ ವಿದ್ಯೆ ಕಲಿಸಬೇಕಾದ ಶಿಕ್ಷಕರು ಇಂತಹ ವರ್ತನೆ ತೋರಿದರೆ ಮಕ್ಕಳ ಭವಿಷ್ಯ ಹಾಳಾಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಘಟನೆಗೆ ಸಂಬಂಧಿಸಿ ಗ್ರಾಮಸ್ಥರು ಹಗರಿಬೊಮ್ಮನಹಳ್ಳಿ ಕ್ಷೇತ್ರ ಶಿಕ್ಷಣಾಧಿಕಾರಿ (ಬಿಇಒ) ಅವರಿಗೆ ದೂರು ಸಲ್ಲಿಸಿ, ಶಿಕ್ಷಕ ಉಮೇಶ್ ವಿರುದ್ಧ ಸೂಕ್ತ ಕ್ರಮ ಕೈಗೊಂಡು ಅಮಾನತು ಮಾಡುವಂತೆ ಒತ್ತಾಯಿಸಿದ್ದಾರೆ.



Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News