Vijayanagara | ಬರ ಪರಿಸ್ಥಿತಿಗೆ ಮುನ್ನೆಚ್ಚರಿಕೆ ವಹಿಸಿ: ಅಧಿಕಾರಿಗಳಿಗೆ ಶಾಸಕ ನೇಮರಾಜನಾಯ್ಕ ಸೂಚನೆ

Update: 2026-07-24 23:03 IST

ಕೊಟ್ಟೂರು (ವಿಜಯನಗರ): ಮಳೆ ಕೊರತೆಯಿಂದ ಸಂಕಷ್ಟ ಎದುರಿಸುತ್ತಿರುವ ತಾಲೂಕಿನನ್ನು ಬರಪೀಡಿತ ಪ್ರದೇಶವೆಂದು ಸರ್ಕಾರ ಘೋಷಿಸುವ ಸಾಧ್ಯತೆಗಳಿದ್ದು, ಮೇವು ಹಾಗೂ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಎಲ್ಲ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಕೆ. ನೇಮರಾಜನಾಯ್ಕ ಸೂಚಿಸಿದರು.

ಪಟ್ಟಣದ ತಾಲೂಕು ಕಚೇರಿಯ ಮಹಾತ್ಮ ಗಾಂಧೀಜಿ ಸಭಾಂಗಣದಲ್ಲಿ ಗುರುವಾರ ನಡೆದ ಟಾಸ್ಕ್‌ಫೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ತಾಲೂಕಿನಲ್ಲಿ ಶೇ.60ರಷ್ಟು ಮಳೆ ಕೊರತೆಯಾಗಿದ್ದು, ರೈತರು ಸಂಕಷ್ಟದಲ್ಲಿದ್ದಾರೆ. ಯಾವುದೇ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗುವ ಸಾಧ್ಯತೆ ಇದ್ದರೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು (ಪಿಡಿಒ) ಮುಂಚಿತವಾಗಿಯೇ ಮಾಹಿತಿ ನೀಡಬೇಕು. ಬೋರ್‌ವೆಲ್, ಪೈಪ್‌ಲೈನ್ ಹಾಗೂ ವಿದ್ಯುತ್ ಸಂಪರ್ಕಕ್ಕೆ ಸಂಬಂಧಿಸಿದ ಅಗತ್ಯಗಳ ವಿವರವನ್ನು ಕೂಡಲೇ ಸಲ್ಲಿಸಬೇಕು ಎಂದು ಸೂಚಿಸಿದರು.

ಪ್ರಸ್ತುತ ಮೇವು ಕೊರತೆ ಇಲ್ಲದಿದ್ದರೂ ಮುಂದಿನ ದಿನಗಳಲ್ಲಿ ಸಮಸ್ಯೆ ಉಂಟಾಗದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು. ಕೆಲ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾದರೆ ಬಾಡಿಗೆ ಬೋರ್‌ವೆಲ್ ವ್ಯವಸ್ಥೆಗೆ ಈಗಿನಿಂದಲೇ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಹೇಳಿದರು.

ಬರ ನಿರ್ವಹಣೆಯಲ್ಲಿ ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಪಿಡಿಒಗಳು ನಿರ್ಲಕ್ಷ್ಯ ತೋರಿದರೆ ಜಿಲ್ಲಾಧಿಕಾರಿಗಳಿಗೆ ವರದಿ ಸಲ್ಲಿಸಿ ಶಿಸ್ತು ಕ್ರಮಕ್ಕೆ ಶಿಫಾರಸು ಮಾಡಲಾಗುವುದು. ಪಿಡಿಒಗಳು ತಮ್ಮ ಗ್ರಾಮ ಪಂಚಾಯಿತಿ ಕೇಂದ್ರದಲ್ಲೇ ಇದ್ದು ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ಸೂಚಿಸಿದರು.

ರೈತರು ಬೆಳೆ ವಿಮೆ ಮಾಡಿಸಿಕೊಳ್ಳಲು ಕೃಷಿ, ತೋಟಗಾರಿಕೆ ಹಾಗೂ ರೇಷ್ಮೆ ಇಲಾಖೆ ಅಧಿಕಾರಿಗಳು ಸಹಕಾರ ನೀಡಬೇಕು. ಮಳೆ ನಿರೀಕ್ಷೆಯಲ್ಲಿ ಬಿತ್ತನೆ ಮಾಡಿದ ರೈತರಿಗೆ ಸರ್ಕಾರದ ಯೋಜನೆಗಳ ಮಾಹಿತಿ ನೀಡಿ ಸೌಲಭ್ಯಗಳನ್ನು ಪಡೆಯಲು ನೆರವಾಗಬೇಕು ಎಂದು ಹೇಳಿದರು.

ಕುಡಿಯುವ ನೀರಿನ ಯೋಜನೆಗಳಿಗೆ ಸಂಬಂಧಿಸಿದ ಬೋರ್‌ವೆಲ್‌ಗಳ ವಿದ್ಯುತ್ ಸಂಪರ್ಕವನ್ನು ಯಾವುದೇ ಕಾರಣಕ್ಕೂ ಕಡಿತಗೊಳಿಸಬಾರದು. ಅಗತ್ಯವಿರುವ ಕಡೆ ತಕ್ಷಣ ವಿದ್ಯುತ್ ಸಂಪರ್ಕ ಕಲ್ಪಿಸಬೇಕು ಎಂದು ಜೆಸ್ಕಾಂ ಎಇಇ ನಾಗರಾಜ ಅವರಿಗೆ ನಿರ್ದೇಶನ ನೀಡಿದರು.

ಸಭೆಯಲ್ಲಿ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಸಹಾಯಕ ನಿರ್ದೇಶಕರು ಕೆಲವು ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಹೊಸ ಬೋರ್‌ವೆಲ್‌ಗಳಿಗಾಗಿ ಯೋಜನೆ ಸಿದ್ಧಪಡಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಕೃಷಿ, ತೋಟಗಾರಿಕೆ ಹಾಗೂ ರೇಷ್ಮೆ ಇಲಾಖೆ ಅಧಿಕಾರಿಗಳು ಬಿತ್ತನೆ ಪ್ರಗತಿ ಮತ್ತು ಮಳೆ ಕೊರತೆಯಿಂದ ಉಂಟಾಗಿರುವ ಬೆಳೆ ಹಾನಿ ಕುರಿತು ವರದಿ ಮಂಡಿಸಿದರು. ಪಶುಪಾಲನಾ ಇಲಾಖೆ ವತಿಯಿಂದ ರೈತರಿಗೆ ಹುಲ್ಲಿನ ಬೀಜ ವಿತರಿಸಲಾಗುವುದು ಎಂದು ತಿಳಿಸಲಾಯಿತು.

ತಹಶೀಲ್ದಾರ್ ಜಿ.ಕೆ. ಅಮರೇಶ, ತಾಪಂ ಇಒ ಡಾ. ಬಿ. ಆನಂದಕುಮಾರ, ವಿವಿಧ ಇಲಾಖೆಗಳ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಗ್ರಾಮ ಲೆಕ್ಕಾಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News