Vijayanagara | ಹೆಚ್‌ಪಿವಿ ಲಸಿಕೆ ಕುರಿತು ಜಾಗೃತಿ ಕಾರ್ಯಕ್ರಮ
ಹೊಸಪೇಟೆ/ವಿಜಯನಗರ: ಜಿಲ್ಲೆಯ ಹೊಸಪೇಟೆ ನಗರದ ಪೂಲ್ ಬನ್ ಶಾಲೆಯಲ್ಲಿ 14 ರಿಂದ 15 ವರ್ಷದೊಳಗಿನ ಹೆಣ್ಣು ಮಕ್ಕಳಿಗೆ ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟುವ ಉದ್ದೇಶದಿಂದ ನೀಡಲಾಗುವ ಹೆಚ್‌ಪಿವಿ (HPV) ಲಸಿಕೆ ಕುರಿತು ಶಿಕ್ಷಕರು ಹಾಗೂ ಪಾಲಕರಿಗೆ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮದಲ್ಲಿ ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಎಂ.ಪಿ. ದೊಡಮನಿ ಅವರು ಹೆಚ್‌ಪಿವಿ ಲಸಿಕೆಯ ಮಹತ್ವ, ಅದರ ಅಗತ್ಯತೆ ಹಾಗೂ ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟುವಲ್ಲಿ ಲಸಿಕೆಯ ಪಾತ್ರದ ಕುರಿತು ಸಮಗ್ರ ಮಾಹಿತಿ ನೀಡಿದರು.
ಆರೋಗ್ಯ ನಿರೀಕ್ಷಣಾಧಿಕಾರಿ ಎಂ. ಧರ್ಮನಗೌಡ ಮಾತನಾಡಿ, ಹೆಚ್‌ಪಿವಿ ಲಸಿಕೆ ಸುರಕ್ಷಿತವಾಗಿದ್ದು, ಭವಿಷ್ಯದಲ್ಲಿ ಗರ್ಭಕಂಠದ ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡಲು ಸಹಕಾರಿಯಾಗಿದೆ. ಪಾಲಕರು ಹಾಗೂ ಶಿಕ್ಷಕರು ಮಕ್ಕಳಿಗೆ ಲಸಿಕೆ ಪಡೆಯುವ ಕುರಿತು ಅರಿವು ಮೂಡಿಸಿ, ಲಸಿಕಾಕರಣ ಕಾರ್ಯಕ್ರಮಕ್ಕೆ ಸಹಕರಿಸಬೇಕು ಎಂದು ಮನವಿ ಮಾಡಿದರು.
ಆಕಾಶವಾಣಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಅಶ್ವಿನಿ ಅವರು ಮಾತನಾಡಿ, ಹೆಚ್‌ಪಿವಿ ಲಸಿಕೆಯಿಂದ ಯಾವುದೇ ಗಂಭೀರ ದುಷ್ಪರಿಣಾಮಗಳಿಲ್ಲ. 14 ರಿಂದ 15 ವರ್ಷದೊಳಗಿನ ಎಲ್ಲಾ ಹೆಣ್ಣು ಮಕ್ಕಳು ಕಡ್ಡಾಯವಾಗಿ ಲಸಿಕೆ ಪಡೆಯಬೇಕು. ಇದರಿಂದ ಗರ್ಭಕಂಠದ ಕ್ಯಾನ್ಸರ್ ಅನ್ನು ಪರಿಣಾಮಕಾರಿಯಾಗಿ ತಡೆಗಟ್ಟಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.
ಪ್ರಾಥಮಿಕ ಆರೋಗ್ಯ ಸುರಕ್ಷಣಾಧಿಕಾರಿ ಶ್ರೀಮತಿ ಉಮಾ ಅವರು ಶಾಲೆಯಲ್ಲಿರುವ ಅರ್ಹ ವಯೋಮಾನದ ಎಲ್ಲಾ ಮಕ್ಕಳಿಗೂ ತಪ್ಪದೇ ಲಸಿಕೆ ಹಾಕಿಸುವಂತೆ ಪಾಲಕರಿಗೆ ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ಶಿಕ್ಷಕರು, ಪಾಲಕರು ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿ ಭಾಗವಹಿಸಿ, ಹೆಚ್‌ಪಿವಿ ಲಸಿಕೆ ಕುರಿತು ಮಾಹಿತಿ ಪಡೆದುಕೊಂಡರು.