ಹೊಸಪೇಟೆ/ವಿಜಯನಗರ: ಬೈಕ್‌ಗೆ  ಕಾರು ಢಿಕ್ಕಿ ಹೊಡೆದ ಪರಿಣಾಮ ಒಂದೂವರೆ ವರ್ಷದ ಮಗು ಸೇರಿದಂತೆ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹೊಸಪೇಟೆ ತಾಲೂಕಿನ ಧರ್ಮಸಾಗರ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 67ರಲ್ಲಿ ನಡೆದಿದೆ.

ಅಪಘಾತದಲ್ಲಿ ತಾಯಮ್ಮ (55), ಜ್ಯೋತಿ (28) ಹಾಗೂ ಒಂದೂವರೆ ವರ್ಷದ ಮಗು ದಿವ್ಯ ಮೃತಪಟ್ಟಿದ್ದಾರೆ. ಬೈಕ್ ಚಾಲನೆ ಮಾಡುತ್ತಿದ್ದ ಲಕ್ಷ್ಮಣ್ ಹಾಗೂ ಅವರ ಮತ್ತೊಬ್ಬ ಮಗಳು ಸೃಷ್ಟಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಬಳ್ಳಾರಿ ಜಿಲ್ಲೆಯ ಕಂಪ್ಲಿ ತಾಲೂಕಿನ ಮೆಟ್ರಿ ಗ್ರಾಮದ ಲಕ್ಷ್ಮಣ್ ಅವರ ಕುಟುಂಬವು ಹೊಸಪೇಟೆ ತಾಲೂಕಿನ ಕೊಟಗಿನಾಳ್ ಗ್ರಾಮಕ್ಕೆ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ತೆರಳಿತ್ತು. ಕಾರ್ಯಕ್ರಮ ಮುಗಿಸಿಕೊಂಡು ಹಿಂದಿರುಗುತ್ತಿದ್ದಾಗ ಧರ್ಮಸಾಗರ ಗ್ರಾಮದ ಬಳಿ ಹಿಂಬದಿಯಿಂದ ಬಂದ ಕಾರು ಬೈಕ್‌ಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಢಿಕ್ಕಿಯ ರಭಸಕ್ಕೆ ಬೈಕ್‌ನಲ್ಲಿದ್ದವರು ರಸ್ತೆಗೆ ಬಿದ್ದಿದ್ದು, ತಾಯಮ್ಮ, ಜ್ಯೋತಿ ಹಾಗೂ ಮಗು ದಿವ್ಯ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಲಕ್ಷ್ಮಣ್ ಮತ್ತು ಮಗಳು ಸೃಷ್ಟಿ ತೀವ್ರವಾಗಿ ಗಾಯಗೊಂಡಿದ್ದಾರೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಹೊಸಪೇಟೆ ಗ್ರಾಮೀಣ ಪೊಲೀಸ್ ಠಾಣೆಯ ಪೊಲೀಸ್ ಇನ್‌ಸ್ಪೆಕ್ಟರ್ ಗುರುರಾಜ್ ಕಟ್ಟಿಮನಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಹೊಸಪೇಟೆಯ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಈ ಸಂಬಂಧ ಹೊಸಪೇಟೆ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor