ವಿಜಯನಗರ (ಹೊಸಪೇಟೆ): ಕಲ್ಯಾಣ ಕರ್ನಾಟಕ ಭಾಗದ ಜನರ ಸ್ವತಂತ್ರ ದಿನಾಚರಣೆಯಾದ ಸೆಪ್ಟೆಂಬರ್ 17ರ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯನ್ನು ಅತ್ಯಂತ ಅರ್ಥಪೂರ್ಣವಾಗಿ ಆಚರಿಸುವಂತೆ ಅಪರ ಜಿಲ್ಲಾಧಿಕಾರಿ ಪಿ.ಎನ್. ಲೋಕೇಶ್ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಉತ್ಸವದ ಅಂಗವಾಗಿ ಬೆಳಿಗ್ಗೆ 8 ಗಂಟೆಗೆ ಜಿಲ್ಲೆಯ ಎಲ್ಲಾ ಸರ್ಕಾರಿ ಕಚೇರಿಗಳು, ಶಾಲೆಗಳು ಹಾಗೂ ಕಾಲೇಜುಗಳಲ್ಲಿ ಶಿಷ್ಟಾಚಾರದಂತೆ ಧ್ವಜಾರೋಹಣ ನೆರವೇರಿಸಬೇಕು. ನಂತರ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯುವ ಮುಖ್ಯ ಕಾರ್ಯಕ್ರಮದಲ್ಲಿ ಎಲ್ಲಾ ಸರ್ಕಾರಿ ಇಲಾಖೆ ಸಿಬ್ಬಂದಿಗಳು ಕಡ್ಡಾಯವಾಗಿ ಭಾಗವಹಿಸಬೇಕು ಎಂದು ತಿಳಿಸಿದರು.

ಜಿಲ್ಲೆಯ ವಿವಿಧ ಇಲಾಖೆಗಳಿಗೆ ವಹಿಸಲಾಗಿರುವ ಜವಾಬ್ದಾರಿಗಳನ್ನು ಸಮರ್ಪಕವಾಗಿ ನಿರ್ವಹಿಸಿ, ಉತ್ಸವವನ್ನು ಯಶಸ್ವಿಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬೆಳಿಗ್ಗೆ 9 ಗಂಟೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಧ್ವಜಾರೋಹಣ ನೆರವೇರಿಸಲಿದ್ದು, ಬಳಿಕ ಪೊಲೀಸ್ ಬ್ಯಾಂಡ್‌ನಿಂದ ರಾಷ್ಟ್ರಗೀತೆ ಹಾಗೂ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಭಾವಚಿತ್ರಕ್ಕೆ ಗಣ್ಯರು ಪುಷ್ಪಾರ್ಚನೆ ಸಲ್ಲಿಸಲಿದ್ದಾರೆ. ನಂತರ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ಮಾಹಿತಿ ನೀಡಿದರು.

ಸಭೆಯಲ್ಲಿ ಉಪವಿಭಾಗಾಧಿಕಾರಿ ವಿವೇಕಾನಂದ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಸಿದ್ದಲಿಂಗೇಶ ರಂಗಣ್ಣವರ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor