ಕೊಟ್ಟೂರು (ವಿಜಯನಗರ): ಸಮೀಪದ ಧೂಪದಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕರಿಬಸವೇಶ್ವರ ದೇವಸ್ಥಾನ ಭುಜಂಗನಗರ ಕಾಲೋನಿಯಲ್ಲಿ ನೈರ್ಮಲ್ಯ ವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದ್ದು, ನಿವಾಸಿಗಳು ತೀವ್ರ ಸಮಸ್ಯೆ ಎದುರಿಸುತ್ತಿದ್ದಾರೆ.

ಕಾಲೋನಿಯಲ್ಲಿ ಸೂಕ್ತ ಚರಂಡಿ ವ್ಯವಸ್ಥೆ ಇಲ್ಲದ ಕಾರಣ ಮನೆಗಳಿಂದ ಹೊರಬರುವ ಕೊಳಚೆ ನೀರು ರಸ್ತೆಯಲ್ಲೇ ನಿಂತು ದುರ್ವಾಸನೆ ಬೀರುತ್ತಿದೆ. ಕಳೆದ ಹಲವು ತಿಂಗಳಿಂದ ಇದೇ ಪರಿಸ್ಥಿತಿ ಮುಂದುವರಿದಿದ್ದು, ಸೊಳ್ಳೆಗಳ ಉತ್ಪತ್ತಿ ಹೆಚ್ಚಾಗಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ಭೀತಿ ಎದುರಾಗಿದೆ ಎಂದು ನಿವಾಸಿಗಳು ತಿಳಿಸಿದ್ದಾರೆ.

ನೈರ್ಮಲ್ಯ ಕೊರತೆಯ ಜತೆಗೆ ಕಾಲೋನಿಯಲ್ಲಿ ಗಿಡಗಂಟಿಗಳು ಬೆಳೆದಿರುವುದರಿಂದ ರಾತ್ರಿ ವೇಳೆ ಹಾವು, ಚೇಳು ಸೇರಿದಂತೆ ವಿಷಕಾರಿ ಜಂತುಗಳು ಮನೆಗಳಿಗೆ ನುಗ್ಗುತ್ತಿವೆ. ಇದರಿಂದ ನಿವಾಸಿಗಳು ಭಯದ ವಾತಾವರಣದಲ್ಲಿ ಜೀವನ ನಡೆಸುವಂತಾಗಿದೆ. ಪ್ರತಿನಿತ್ಯ ದುರ್ವಾಸನೆ ಹಾಗೂ ಕ್ರಿಮಿಕೀಟಗಳ ನಡುವೆ ಬದುಕುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ನಿವಾಸಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಒತ್ತಾಯಿಸಿ ಕಾಲೋನಿ ನಿವಾಸಿಗಳು ಸೋಮವಾರ ಧೂಪದಹಳ್ಳಿ ಗ್ರಾಮ ಪಂಚಾಯಿತಿ ಪಿಡಿಒ ಹಾಗೂ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗೆ ಮನವಿ ಸಲ್ಲಿಸಿದರು. ಅಧಿಕಾರಿಗಳು ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಮಳೆಗಾಲದ ಹಿನ್ನೆಲೆಯಲ್ಲಿ ತಕ್ಷಣ ಚರಂಡಿ ನಿರ್ಮಾಣ ಕಾಮಗಾರಿ ಕೈಗೊಂಡು ಕಾಲೋನಿಯಲ್ಲಿ ನೈರ್ಮಲ್ಯ ಕಾಪಾಡಬೇಕು ಎಂದು ಆಗ್ರಹಿಸಿದರು.

ಮನವಿ ಸಲ್ಲಿಸುವ ಸಂದರ್ಭದಲ್ಲಿ ಗ್ರಾಮಸ್ಥರಾದ ವನಜಾಕ್ಷಿ, ಕೊಟ್ರಗೌಡ, ರೇಣುಕಮ್ಮ, ಶ್ರೀಕಾಂತ, ಶ್ಯಾಮ್, ಶಾರದಮ್ಮ, ದೇವಜ್ಜ, ಶಾವಮ್ಮ ಸೇರಿದಂತೆ ಹಲವು ಮುಖಂಡರು ಹಾಗೂ ನಿವಾಸಿಗಳು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor