ಹೊಸಪೇಟೆ/ವಿಜಯನಗರ: ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಉತ್ತರಾಖಂಡ ಪೊಲೀಸರು ಎಫ್‌ಐಆರ್ ದಾಖಲಿಸಿರುವುದನ್ನು ಖಂಡಿಸಿ ಹಾಗೂ ಘಟನೆಗೆ ಕಾರಣರಾದ ಬಿಜೆಪಿ–ಆರ್‌ಎಸ್‌ಎಸ್ ಕಾರ್ಯಕರ್ತರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ವಿಜಯನಗರ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಮಂಗಳವಾರ ಹೊಸಪೇಟೆಯಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.

ಕೆಪಿಸಿಸಿ ಆದೇಶದ ಮೇರೆಗೆ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸಿರಾಜ್ ಶೇಖ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಬಿಜೆಪಿ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ನಗರದ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಬೆಳಗ್ಗೆ 10.30ಕ್ಕೆ ಆರಂಭವಾದ ಪ್ರತಿಭಟನೆ ಬಳಿಕ ಮುಖಂಡರು ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಉತ್ತರಾಖಂಡದ ಹಲದ್ವಾನಿಯಲ್ಲಿ ನಡೆಸಿದ ರ್ಯಾಲಿಯ ಬಳಿಕ ಬಿಜೆಪಿ–ಆರ್‌ಎಸ್‌ಎಸ್ ಕಾರ್ಯಕರ್ತರು ನಡೆಸಿದ ರ್ಯಾಲಿ ಹಾಗೂ ಸ್ಥಳ ಶುದ್ಧೀಕರಣ ಆಚರಣೆಯ ಕುರಿತು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಆಕ್ಷೇಪ ವ್ಯಕ್ತಪಡಿಸಿದ್ದರು. ಘಟನೆಗೆ ಕಾರಣರಾದವರ ವಿರುದ್ಧ ಎಫ್‌ಐಆರ್ ದಾಖಲಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಅವರು ಒತ್ತಾಯಿಸಿದ್ದರು.

ಆದರೆ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವ ಬದಲು ಉತ್ತರಾಖಂಡ ಪೊಲೀಸರು ಹಲದ್ವಾನಿ ನಗರದ ಕೊತ್ವಾಲಿ ಪೊಲೀಸ್ ಠಾಣೆಯಲ್ಲಿ ರಾಹುಲ್ ಗಾಂಧಿ ವಿರುದ್ಧವೇ ಎಫ್‌ಐಆರ್ ದಾಖಲಿಸಿರುವುದು ಖಂಡನೀಯ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಬಿಜೆಪಿ ಸರ್ಕಾರವು ಪೊಲೀಸ್ ಇಲಾಖೆಯನ್ನು ಬಳಸಿಕೊಂಡು ವಿರೋಧ ಪಕ್ಷದ ನಾಯಕರ ವಿರುದ್ಧ ಸೇಡಿನ ರಾಜಕಾರಣ ನಡೆಸುತ್ತಿದೆ. ಸಂವಿಧಾನಿಕ ಮೌಲ್ಯಗಳಿಗೆ ಧಕ್ಕೆ ತರುವಂತಹ ಕೃತ್ಯಗಳನ್ನು ನಡೆಸಿದವರ ವಿರುದ್ಧ ಕ್ರಮ ಕೈಗೊಳ್ಳದೆ, ಅದನ್ನು ಪ್ರಶ್ನಿಸಿದ ರಾಹುಲ್ ಗಾಂಧಿ ವಿರುದ್ಧವೇ ಪ್ರಕರಣ ದಾಖಲಿಸಿರುವುದು ಪ್ರಜಾಪ್ರಭುತ್ವದ ಆಶಯಗಳಿಗೆ ವಿರುದ್ಧವಾಗಿದೆ ಎಂದು ಕಾಂಗ್ರೆಸ್ ಮುಖಂಡರು ಆರೋಪಿಸಿದರು.

ಉತ್ತರಾಖಂಡದಲ್ಲಿ ನಡೆದಿರುವ ಘಟನೆಗೆ ಸಂಬಂಧಿಸಿದಂತೆ ತಪ್ಪಿತಸ್ಥ ಬಿಜೆಪಿ–ಆರ್‌ಎಸ್‌ಎಸ್ ಕಾರ್ಯಕರ್ತರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ರಾಹುಲ್ ಗಾಂಧಿ ವಿರುದ್ಧ ದಾಖಲಿಸಿರುವ ಎಫ್‌ಐಆರ್ ಅನ್ನು ಕೂಡಲೇ ಹಿಂಪಡೆಯಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಕಾಂಗ್ರೆಸ್ ಪಕ್ಷದ ವಿವಿಧ ಘಟಕಗಳ ಮುಖಂಡರು, ಪದಾಧಿಕಾರಿಗಳು, ಚುನಾಯಿತ ಪ್ರತಿನಿಧಿಗಳು, ಮಾಜಿ ಜನಪ್ರತಿನಿಧಿಗಳು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಕಾರ್ಯಕರ್ತರು ಭಾಗವಹಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor