Vijayanagara | ಎಸ್‌ಐಆರ್ ಪ್ರಕ್ರಿಯೆ ವಿರುದ್ಧ ನಾಳೆ ಕಾಂಗ್ರೆಸ್ನಿಂದ ಬೃಹತ್ ಪ್ರತಿಭಟನೆ
ಹೊಸಪೇಟೆ/ವಿಜಯನಗರ: ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ವಿರೋಧ ವ್ಯಕ್ತಪಡಿಸಿರುವ ವಿಜಯನಗರ ಜಿಲ್ಲಾ ಕಾಂಗ್ರೆಸ್, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕು ಹಾಗೂ ಅವರ ವಿರುದ್ಧ ಕಾನೂನುಬದ್ಧ ತನಿಖೆ ನಡೆಸಬೇಕು ಎಂದು ಆಗ್ರಹಿಸಿದೆ.
ಹೊಸಪೇಟೆಯಲ್ಲಿ ಭಾನುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವಿಜಯನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿರಾಜ್ ಶೇಖ್, ಎಸ್‌ಐಆರ್ ಪ್ರಕ್ರಿಯೆಯಲ್ಲಿ ದೇಶಾದ್ಯಂತ ಸುಮಾರು 13 ಕೋಟಿಗೂ ಹೆಚ್ಚು ಮತದಾರರ ಹೆಸರುಗಳು ಮತದಾರರ ಪಟ್ಟಿಯಿಂದ ಹೊರಗುಳಿದಿವೆ ಎಂದು ಕಾಂಗ್ರೆಸ್ ಆರೋಪಿಸುತ್ತಿದೆ. ಈ ಪ್ರಕ್ರಿಯೆಯಿಂದ ದಲಿತರು, ಮುಸ್ಲಿಮರು ಹಾಗೂ ಇತರೆ ಅಲ್ಪಸಂಖ್ಯಾತ ಸಮುದಾಯಗಳ ಮತದಾನದ ಹಕ್ಕಿಗೆ ಧಕ್ಕೆಯಾಗುವ ಸಾಧ್ಯತೆ ಇದೆ ಎಂದು ಹೇಳಿದರು.
ಕರ್ನಾಟಕದಲ್ಲಿಯೂ ಒಂದು ಕೋಟಿಗೂ ಅಧಿಕ ಮತದಾರರ ಹೆಸರುಗಳು ವಿವಿಧ ಕಾರಣಗಳಿಂದ ಪಟ್ಟಿಯಿಂದ ಹೊರಗುಳಿದಿರುವುದು ಆತಂಕಕಾರಿ ಬೆಳವಣಿಗೆ ಎಂದು ಅವರು ಆರೋಪಿಸಿದರು. ಮತದಾರರ ಹಕ್ಕು ಪ್ರಜಾಪ್ರಭುತ್ವದ ಮೂಲಭೂತ ಹಕ್ಕಾಗಿದ್ದು, ಅರ್ಹ ಮತದಾರರ ಹೆಸರುಗಳು ಯಾವುದೇ ಕಾರಣಕ್ಕೂ ಪಟ್ಟಿಯಿಂದ ಹೊರಗುಳಿಯದಂತೆ ಪಾರದರ್ಶಕ ಪರಿಶೀಲನೆ ನಡೆಸಬೇಕು ಎಂದು ಒತ್ತಾಯಿಸಿದರು.
ಎಸ್‌ಐಆರ್ ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಕುರಿತು ಸಮಗ್ರ ಹಾಗೂ ಸ್ವತಂತ್ರ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ ಅವರು, ಈ ಪ್ರಕ್ರಿಯೆಯ ಹಿಂದೆ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಪಾತ್ರವಿದೆ ಎಂಬ ಅನುಮಾನಗಳ ಕುರಿತು ಕೂಡ ತನಿಖೆ ನಡೆಸಬೇಕು ಎಂದು ಕಾಂಗ್ರೆಸ್ ಪಕ್ಷದ ಪರವಾಗಿ ಒತ್ತಾಯಿಸಿದರು.
ನಾಳೆ ಬೃಹತ್ ಪ್ರತಿಭಟನೆ :
ಎಸ್‌ಐಆರ್ ಪ್ರಕ್ರಿಯೆ ಹಾಗೂ ಚುನಾವಣಾ ಆಯೋಗದ ಕಾರ್ಯವೈಖರಿಯನ್ನು ಖಂಡಿಸಿ ವಿಜಯನಗರ ಜಿಲ್ಲಾ ಕಾಂಗ್ರೆಸ್ ವತಿಯಿಂದ ಸೆ. 28ರಂದು ಹೊಸಪೇಟೆಯಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಸಿರಾಜ್ ಶೇಖ್ ತಿಳಿಸಿದರು.
ಪ್ರತಿಭಟನೆಯಲ್ಲಿ ಜಿಲ್ಲೆಯ ಶಾಸಕರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳು, ಮುಂಚೂಣಿ ಘಟಕಗಳ ಮುಖಂಡರು, ನಾಗರಿಕ ಹಿತರಕ್ಷಣಾ ಸಂಘಟನೆಗಳ ಪ್ರತಿನಿಧಿಗಳು ಹಾಗೂ ಮಹಿಳೆಯರು ಸೇರಿದಂತೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗವಹಿಸಲಿದ್ದಾರೆ ಎಂದರು.
ಮತದಾರರ ಹಕ್ಕುಗಳನ್ನು ರಕ್ಷಿಸುವುದು ಹಾಗೂ ಅರ್ಹ ಮತದಾರರ ಹೆಸರುಗಳು ಮತದಾರರ ಪಟ್ಟಿಯಲ್ಲಿ ಖಚಿತವಾಗುವಂತೆ ಕ್ರಮ ಕೈಗೊಳ್ಳಬೇಕು ಎಂಬ ಉದ್ದೇಶದಿಂದ ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ಅವರು ಹೇಳಿದರು.