Vijayanagara | ಬರ ಅಧ್ಯಯನದ ವರದಿಯನ್ನು ವಾರದೊಳಗೆ ಸರ್ಕಾರಕ್ಕೆ ಸಲ್ಲಿಸಲಾಗುವುದು : ಡಿಸಿ ಕವಿತಾ ಮನ್ನಿಕೇರಿ

Update: 2026-07-21 20:40 IST

ವಿಜಯನಗರ: ರಾಜ್ಯದಲ್ಲೇ ಅತಿ ಹೆಚ್ಚು ಮಳೆ ಕೊರತೆ ಎದುರಿಸಿರುವ ವಿಜಯನಗರ ಜಿಲ್ಲೆಯಲ್ಲಿ ಬರದ ಪರಿಸ್ಥಿತಿ ಗಂಭೀರವಾಗಿರುವ ಹಿನ್ನೆಲೆಯಲ್ಲಿ, ಮಳೆಯಾಶ್ರಿತ ಕೃಷಿ ಪ್ರದೇಶಗಳಿಗೆ ಭೇಟಿ ನೀಡಿ ನೈಜ ಸ್ಥಿತಿಯ ಅಧ್ಯಯನ ನಡೆಸಿ ಒಂದು ವಾರದೊಳಗೆ ಸರ್ಕಾರಕ್ಕೆ ಸಮಗ್ರ ವರದಿ ಸಲ್ಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ತಿಳಿಸಿದರು.

ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಬೆಳೆ ಹಾನಿ, ಕುಡಿಯುವ ನೀರಿನ ಪರಿಸ್ಥಿತಿ ಹಾಗೂ ಉದ್ಯೋಗ ಖಾತರಿ ಯೋಜನೆಯ ಅನುಷ್ಠಾನದ ಕುರಿತು ಅಧಿಕಾರಿಗಳ ತಂಡದೊಂದಿಗೆ ಸ್ಥಳ ಪರಿಶೀಲನೆ ನಡೆಸಿದ ಬಳಿಕ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು.

ಜಿಲ್ಲೆಯಲ್ಲಿ ಸರಾಸರಿ ಶೇ.60ರಷ್ಟು ಮಳೆ ಕೊರತೆ ದಾಖಲಾಗಿದ್ದು, ರಾಜ್ಯದಲ್ಲೇ ಅತಿ ಹೆಚ್ಚು ಮಳೆ ಅಭಾವ ಎದುರಿಸುತ್ತಿರುವ ಜಿಲ್ಲೆಯಾಗಿದೆ. ಈ ಹಿನ್ನೆಲೆಯಲ್ಲಿ ಪ್ರತಿ ತಾಲೂಕಿನ ಆಯ್ದ ಕೃಷಿ ಜಮೀನುಗಳಿಗೆ ಅಧಿಕಾರಿಗಳ ತಂಡ ಭೇಟಿ ನೀಡಿ ಬೆಳೆ ನಷ್ಟ ಹಾಗೂ ರೈತರ ಸಂಕಷ್ಟದ ಕುರಿತು ಸಮೀಕ್ಷೆ ನಡೆಸುತ್ತಿದೆ ಎಂದು ಹೇಳಿದರು.

ಕಳೆದ ಎರಡು-ಮೂರು ತಿಂಗಳಿಂದ ಸಮರ್ಪಕ ಮಳೆಯಾಗದ ಪರಿಣಾಮ ರೈತರು ಹಾಗೂ ಕೃಷಿ ಕಾರ್ಮಿಕರು ಸಂಕಷ್ಟಕ್ಕೆ ಸಿಲುಕಿದ್ದು, ಉದ್ಯೋಗ ಅರಸಿ ವಲಸೆ ಹೋಗುತ್ತಿದ್ದಾರೆ. ವಿಕಸಿತ ಭಾರತ–ಗ್ರಾಮೀಣ ಯೋಜನೆ (ವಿ.ಬಿ.-ಜಿ ರಾಮ್-ಜಿ) ಅಡಿ ಎಲ್ಲ ಗ್ರಾಮ ಪಂಚಾಯಿತಿಗಳಲ್ಲೂ ತಕ್ಷಣ ಕಾಮಗಾರಿಗಳನ್ನು ಆರಂಭಿಸಿ ಗ್ರಾಮೀಣರಿಗೆ ಸ್ಥಳೀಯ ಮಟ್ಟದಲ್ಲೇ ಉದ್ಯೋಗ ಕಲ್ಪಿಸಲಾಗುವುದು ಎಂದು ತಿಳಿಸಿದರು.

ಮಕ್ಕಳ ಶಿಕ್ಷಣಕ್ಕೆ ಧಕ್ಕೆ ತರಬೇಡಿ :

ಉದ್ಯೋಗಕ್ಕಾಗಿ ವಲಸೆ ಹೋಗುವ ಪೋಷಕರು ಮಕ್ಕಳನ್ನು ಶಾಲೆಯಿಂದ ಬಿಡಿಸಿ ತಮ್ಮೊಂದಿಗೆ ಕರೆದೊಯ್ಯಬಾರದು. ಮಕ್ಕಳ ಶಿಕ್ಷಣಕ್ಕೆ ಯಾವುದೇ ರೀತಿಯ ತೊಂದರೆಯಾಗದಂತೆ ನೋಡಿಕೊಳ್ಳುವುದು ಎಲ್ಲರ ಜವಾಬ್ದಾರಿಯಾಗಿದೆ ಎಂದು ಜಿಲ್ಲಾಧಿಕಾರಿ ಮನವಿ ಮಾಡಿದರು.

ಬೆಳೆ ವಿಮೆ ಮಾಡಿಸಿಕೊಳ್ಳುವಂತೆ ಸಲಹೆ :

ಮಳೆ ಕೊರತೆಯಿಂದ ಉಂಟಾಗಿರುವ ಬೆಳೆ ನಷ್ಟಕ್ಕೆ ಪರಿಹಾರ ಪಡೆಯಲು ರೈತರು ಕಡ್ಡಾಯವಾಗಿ ಬೆಳೆ ವಿಮೆಗೆ ನೋಂದಾಯಿಸಿಕೊಳ್ಳಬೇಕು. ಇದರಿಂದ ಆರ್ಥಿಕ ನಷ್ಟವನ್ನು ಭಾಗಶಃ ತಗ್ಗಿಸಬಹುದು ಎಂದು ಸಲಹೆ ನೀಡಿದರು.

ಮತದಾರರ ಪಟ್ಟಿ ಪರಿಷ್ಕರಣೆಗೆ ಸಹಕರಿಸಿ :

ಮುಂಬರುವ ಚುನಾವಣೆಗಳ ಹಿನ್ನೆಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ನಡೆಯುತ್ತಿದ್ದು, ಬಿಎಲ್‌ಒಗಳು ವಿತರಿಸಿರುವ ಎನ್ಯುಮರೇಷನ್ ಫಾರ್ಮ್‌ಗಳನ್ನು ಸಾರ್ವಜನಿಕರು ಸರಿಯಾಗಿ ಭರ್ತಿ ಮಾಡಿ ಹಿಂತಿರುಗಿಸಬೇಕು. ಇಲ್ಲವಾದಲ್ಲಿ ಮತದಾನದ ಹಕ್ಕಿನಿಂದ ವಂಚಿತರಾಗುವ ಸಾಧ್ಯತೆ ಇದೆ ಎಂದು ಎಚ್ಚರಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನೊಂಗ್ಜಾಯ್ ಮಹ್ಮದ್ ಅಲಿ ಅಕ್ರಮ್ ಷಾ ಮಾತನಾಡಿ, ವಲಸೆ ತಡೆಗಟ್ಟಲು ವಿ.ಬಿ.-ಜಿ ರಾಮ್-ಜಿ ಯೋಜನೆಯಡಿ 318 ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದ್ದು, ಕೂಲಿ ಕಾರ್ಮಿಕರು ಹಾಗೂ ರೈತರಿಗೆ ಉದ್ಯೋಗ ಕಲ್ಪಿಸಲು ಕ್ರಿಯಾ ಯೋಜನೆ ರೂಪಿಸಲಾಗಿದೆ ಎಂದರು.

ಜಿಲ್ಲೆಯ 36 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದ್ದು, 46 ಖಾಸಗಿ ಕೊಳವೆಬಾವಿಗಳನ್ನು ಬಾಡಿಗೆಗೆ ಪಡೆದು ನೀರು ಪೂರೈಸಲಾಗುತ್ತಿದೆ. ಹೂವಿನಹಡಗಲಿ, ಹರಪನಹಳ್ಳಿ ಹಾಗೂ ಕೂಡ್ಲಿಗಿ ಭಾಗಗಳಲ್ಲಿ ವಿಶೇಷ ಕ್ರಮ ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.

ರೈತರ ಅಳಲು ಆಲಿಸಿದ ಜಿಲ್ಲಾಧಿಕಾರಿ :

ಜಿಲ್ಲಾಧಿಕಾರಿ ಕವಿತಾ ಮನ್ನಿಕೇರಿ ಅವರು ಹೂವಿನಹಡಗಲಿ, ಹಗರಿಬೊಮ್ಮನಹಳ್ಳಿ, ಹರಪನಹಳ್ಳಿ ಹಾಗೂ ಕೊಟ್ಟೂರು ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಮೆಕ್ಕೆಜೋಳ, ಜೋಳ, ತೊಗರಿ, ಈರುಳ್ಳಿ ಹಾಗೂ ಕಬ್ಬು ಬೆಳೆಗಳ ಸ್ಥಿತಿಯನ್ನು ಪರಿಶೀಲಿಸಿದರು. ರೈತರ ಸಮಸ್ಯೆಗಳನ್ನು ಆಲಿಸಿ, ಬೆಳೆ ಹಾನಿ ಕುರಿತು ಸರ್ಕಾರಕ್ಕೆ ವರದಿ ಸಲ್ಲಿಸಿ ಪರಿಹಾರ ದೊರಕಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು.

ಈ ವೇಳೆ ರೈತರು ಮಳೆ ಕೊರತೆಯಿಂದ ಕಬ್ಬು ಸೇರಿದಂತೆ ವಿವಿಧ ಬೆಳೆಗಳು ಒಣಗುತ್ತಿರುವುದು, ಕೊಳವೆಬಾವಿಗಳು ಬತ್ತಿರುವುದು ಹಾಗೂ ಮರು ಬಿತ್ತನೆಯಿಂದ ಆರ್ಥಿಕ ಸಂಕಷ್ಟ ಹೆಚ್ಚಾಗಿದೆ ಎಂದು ಜಿಲ್ಲಾಧಿಕಾರಿಗಳ ಮುಂದೆ ಅಳಲು ತೋಡಿಕೊಂಡರು.

ಪರಿಶೀಲನೆ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಕೆ. ತಿಮ್ಮಪ್ಪ, ಉಪವಿಭಾಗಾಧಿಕಾರಿ ಪಿ. ವಿವೇಕಾನಂದ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯಪಾಲಕ ಇಂಜಿನಿಯರ್ ದೀಪಾ, ಜಂಟಿ ಕೃಷಿ ನಿರ್ದೇಶಕ ಮಂಜುನಾಥ್, ಉಪನಿರ್ದೇಶಕ ವಾಮದೇವ ಕೊಳ್ಳಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News