ವಿಜಯನಗರ (ಹೊಸಪೇಟೆ) : ಜಿಲ್ಲೆಯಲ್ಲಿ ಮುಂದುವರಿದಿರುವ ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಕುಡಿಯುವ ನೀರು ಮತ್ತು ಜಾನುವಾರುಗಳಿಗೆ ಮೇವು ಪೂರೈಕೆಯಲ್ಲಿ ಯಾವುದೇ ಲೋಪವಾಗದಂತೆ ಅಧಿಕಾರಿಗಳು ಕಟ್ಟೆಚ್ಚರ ವಹಿಸಬೇಕು ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಸೂಚನೆ ನೀಡಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬರ ನಿರ್ವಹಣೆ ಕುರಿತು ಆಯೋಜಿಸಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮುಂಗಾರು ಮಳೆ ಕೈಕೊಟ್ಟಿರುವುದರಿಂದ ಜಿಲ್ಲೆಯಲ್ಲಿ ಬರ ಪರಿಸ್ಥಿತಿ ತೀವ್ರಗೊಂಡಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರಲ್ಲಿ ನೀರಿನ ಮಿತ ಬಳಕೆಯ ಕುರಿತು ಜಾಗೃತಿ ಮೂಡಿಸಬೇಕು. ನೀರು ವ್ಯರ್ಥವಾಗಿ ಹರಿದು ಪೋಲಾಗುವುದನ್ನು ತಡೆಯಬೇಕು. ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ತೀವ್ರ ನೀರಿನ ಕೊರತೆ ಎದುರಾದಲ್ಲಿ ಖಾಸಗಿ ಕೊಳವೆಬಾವಿಗಳನ್ನು ಬಾಡಿಗೆಗೆ ಪಡೆದು ನೀರು ಪೂರೈಸಬೇಕು. ಕೊಳವೆಬಾವಿಗಳ ಮೂಲಕ ನೀರು ಪೂರೈಸಲು ಸಾಧ್ಯವಾಗದಿದ್ದರೆ ಟ್ಯಾಂಕರ್‌ಗಳ ಮೂಲಕ ಸರಬರಾಜು ಮಾಡಲು ಕ್ರಮ ವಹಿಸಬೇಕು ಎಂದು ನಿರ್ದೇಶಿಸಿದರು.

ಬರ ಪರಿಸ್ಥಿತಿಯಲ್ಲಿ ಜಾನುವಾರುಗಳಿಗೆ ಮೇವು ಮತ್ತು ಕುಡಿಯುವ ನೀರಿನ ಕೊರತೆಯಾಗದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು. ನಾಲ್ಕು ವಾರಗಳಿಗಿಂತ ಕಡಿಮೆ ಅವಧಿಗೆ ಮೇವು ಲಭ್ಯವಿದ್ದಲ್ಲಿ ಮೇವು ಬ್ಯಾಂಕ್ ಸ್ಥಾಪಿಸಲು ಹಾಗೂ ಎರಡು ವಾರಗಳಿಗಿಂತ ಕಡಿಮೆ ಅವಧಿಗೆ ಮೇವು ಉಳಿದಿದ್ದಲ್ಲಿ ಗೋಶಾಲೆ ಆರಂಭಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಸೂಚಿಸಿದರು.

ಜಾನುವಾರುಗಳ ಸಂಖ್ಯೆಗೆ ಅನುಗುಣವಾಗಿ ಮೇವು ಬೀಜ ವಿತರಿಸಬೇಕು. ಗ್ರಾಮಗಳಲ್ಲಿರುವ ನೀರಿನ ತೊಟ್ಟಿಗಳನ್ನು ಸಮರ್ಪಕವಾಗಿ ನಿರ್ವಹಿಸಿ, ಜಾನುವಾರುಗಳಿಗೆ ಅಗತ್ಯ ಪ್ರಮಾಣದ ನೀರು ಪೂರೈಸಬೇಕು ಎಂದು ತಿಳಿಸಿದರು.

ಹೊಸಪೇಟೆ ತಾಲೂಕಿನಲ್ಲಿ 19 ಗ್ರಾಮ ಪಂಚಾಯಿತಿಗಳನ್ನು ಸಮಸ್ಯಾತ್ಮಕ ಗ್ರಾಮ ಪಂಚಾಯಿತಿಗಳೆಂದು ಗುರುತಿಸಲಾಗಿದೆ. ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದ್ದರೂ ಬರ ಮುಂದುವರಿದರೆ ನೀರಿನ ಸಮಸ್ಯೆ ತೀವ್ರಗೊಳ್ಳುವ ಸಾಧ್ಯತೆಯಿದೆ. ಹೀಗಾಗಿ ಅಧಿಕಾರಿಗಳು ಮುಂಚಿತವಾಗಿಯೇ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.

ಜಿಲ್ಲೆಯಲ್ಲಿ ದುರಸ್ತಿಗೆ ಬಾಕಿ ಇರುವ ಆರ್‌ಒ ಘಟಕಗಳನ್ನು ಶೀಘ್ರ ಸರಿಪಡಿಸಬೇಕು. ನಿರ್ವಹಣೆಯಲ್ಲಿ ನಿರ್ಲಕ್ಷ್ಯ ತೋರಿದ ಏಜೆನ್ಸಿಗಳಿಗೆ ಈಗಾಗಲೇ ನೋಟಿಸ್ ನೀಡಲಾಗಿದ್ದು, ಬಾಕಿ ಇರುವ ದುರಸ್ತಿ ಕಾರ್ಯಗಳನ್ನು ತ್ವರಿತವಾಗಿ ಪೂರ್ಣಗೊಳಿಸಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ಕ್ರಮ ವಹಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗರಿಮಾ ಪನ್ವಾರ್ ತಿಳಿಸಿದರು.

ಕೆಎಂಎಫ್ ಯೋಜನೆಯಡಿ 370 ಸಂಘಗಳು ಅಥವಾ ಹಾಲು ಉತ್ಪಾದಕರಿಗೆ ಮೇವು ಬೀಜ ವಿತರಿಸಿರುವುದಾಗಿ ದಾಖಲಾಗಿದೆ. ಈ ಯೋಜನೆ ಕೇವಲ ದಾಖಲೆಗಳಿಗೆ ಸೀಮಿತವಾಗದೆ ಶೇ.100ರಷ್ಟು ಅನುಷ್ಠಾನಗೊಳ್ಳಬೇಕು. ವಿತರಣೆಯಲ್ಲಿ ಲೋಪ ಕಂಡುಬಂದಲ್ಲಿ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ಬರಗಾಲದ ಹಿನ್ನೆಲೆಯಲ್ಲಿ ರೈತರಿಗೆ ಸಾಲ ವಸೂಲಾತಿ ಹೆಸರಿನಲ್ಲಿ ನೋಟಿಸ್ ನೀಡಿ ಕಿರುಕುಳ ನೀಡುವುದು ಅಥವಾ ಬಲವಂತವಾಗಿ ಸಾಲ ವಸೂಲಿ ಮಾಡುವುದನ್ನು ಸಹಿಸುವುದಿಲ್ಲ. ಇಂತಹ ಪ್ರಕರಣಗಳು ಕಂಡುಬಂದಲ್ಲಿ ಸಂಬಂಧಪಟ್ಟ ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಅಥವಾ ವ್ಯಕ್ತಿಗಳ ವಿರುದ್ಧ ಜಿಲ್ಲಾಡಳಿತ ಕ್ರಮ ಕೈಗೊಳ್ಳಲಿದೆ ಎಂದು ಜಿಲ್ಲಾಧಿಕಾರಿ ಎಚ್ಚರಿಸಿದರು.

ರೈತರು ಸಾಲ ಸೌಲಭ್ಯ ಕೋರಿ ಬಂದಾಗ ಬ್ಯಾಂಕ್ ಅಧಿಕಾರಿಗಳು ಅಗತ್ಯ ನೆರವು ನೀಡಬೇಕು. ಸಾಲ ಮರುಹೊಂದಾಣಿಕೆ ಪ್ರಕ್ರಿಯೆಗೆ ಆದ್ಯತೆ ನೀಡುವುದರ ಜತೆಗೆ ರೈತರೊಂದಿಗೆ ಸೌಜನ್ಯದಿಂದ ವರ್ತಿಸಬೇಕು. ಸಾಲ ವಸೂಲಾತಿಗೆ ಸಂಬಂಧಿಸಿದಂತೆ ಸರ್ಕಾರದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಸೂಚಿಸಿದರು.

ಗ್ರಾಮೀಣ ಪ್ರದೇಶಗಳಲ್ಲಿ ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ಮೂಲಕ ರೈತರು ಹಾಗೂ ಕೂಲಿಕಾರ್ಮಿಕರು ಕೆಲಸ ಅರಸಿ ಗುಳೆ ಹೋಗುವುದನ್ನು ತಡೆಯಬೇಕು. ವಿಬಿಜಿ ರಾಮ್ ಜಿ ಯೋಜನೆಯಡಿ ಅರ್ಹರಿಗೆ ಕೆಲಸ ಒದಗಿಸಿ, ಕಾರ್ಮಿಕರಿಗೆ ವೇತನ ಪಾವತಿಯಲ್ಲಿ ವಿಳಂಬವಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶಿಸಿದರು.

ಕುಡಿಯುವ ನೀರು ಮತ್ತು ವೇತನಕ್ಕೆ ಸಂಬಂಧಿಸಿದ ದೂರುಗಳಿಗೆ ಮೊದಲ ಆದ್ಯತೆ ನೀಡಬೇಕು. ದೂರು ಸ್ವೀಕರಿಸಿದ 24 ಗಂಟೆಗಳೊಳಗೆ ಪರಿಹಾರ ಕಲ್ಪಿಸುವ ವ್ಯವಸ್ಥೆ ರೂಪಿಸಬೇಕು. ಕಾರ್ಮಿಕರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸುವುದರ ಜತೆಗೆ ಟ್ರ್ಯಾಕ್ಟರ್‌ಗಳಿಗೆ ಜಿಪಿಎಸ್ ಅಳವಡಿಕೆ ಸೇರಿದಂತೆ ಅಗತ್ಯ ಮೇಲ್ವಿಚಾರಣೆ ಕೈಗೊಳ್ಳಬೇಕು ಎಂದರು.

ಬರ ನಿರ್ವಹಣೆಯ ಪ್ರಗತಿ ಪರಿಶೀಲಿಸಲು ತಾಲೂಕು ಮಟ್ಟದಲ್ಲಿ ಪ್ರತಿ 15 ದಿನಕ್ಕೊಮ್ಮೆ ಟಾಸ್ಕ್‌ಫೋರ್ಸ್ ಸಭೆ ನಡೆಸಬೇಕು. ಸಭೆಯಲ್ಲಿನ ಚರ್ಚೆ ಮತ್ತು ಕೈಗೊಂಡ ಕ್ರಮಗಳ ವರದಿಯನ್ನು ಸಲ್ಲಿಸಬೇಕು. ಪರಿಹಾರ ಕಾರ್ಯಗಳಲ್ಲಿ ವಿಳಂಬವಾಗದಂತೆ ಅಧಿಕಾರಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಸಾರ್ವಜನಿಕರಿಂದ ಬರುವ ದೂರುಗಳಿಗೆ ತ್ವರಿತವಾಗಿ ಸ್ಪಂದಿಸಿ ಪರಿಹಾರ ಒದಗಿಸಬೇಕು. ಜನರು ಮತ್ತು ಜಾನುವಾರುಗಳಿಗೆ ಯಾವುದೇ ತೊಂದರೆಯಾಗದಂತೆ ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಪಿ.ಎನ್. ಲೋಕೇಶ್, ಉಪವಿಭಾಗಾಧಿಕಾರಿ ವಿವೇಕಾನಂದ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮನೋಹರ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor