ಹೊಸಪೇಟೆ/ವಿಜಯನಗರ : ಜಿಲ್ಲೆಯ ರೈತರ ಕೃಷಿ ಪಂಪ್‌ಸೆಟ್‌ಗಳಿಗೆ ಪ್ರಸ್ತುತ ನೀಡುತ್ತಿರುವ 6 ಗಂಟೆಗಳ ವಿದ್ಯುತ್ ಪೂರೈಕೆಯನ್ನು 8 ಗಂಟೆಗಳಿಗೆ ಹೆಚ್ಚಿಸಿ, ಗುಣಮಟ್ಟದ ಹಾಗೂ ನಿರಂತರ ವಿದ್ಯುತ್ ಒದಗಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜೆ. ಕಾರ್ತಿಕ್ ಬಣ ಆಗ್ರಹಿಸಿದೆ.

ಈ ಕುರಿತು ಸಂಘದ ವತಿಯಿಂದ ಜೆಸ್ಕಾಂ ವಿದ್ಯುತ್ ಇಲಾಖೆಯ ಹೊಸಪೇಟೆ ವಿಭಾಗದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗೆ ಮನವಿ ಸಲ್ಲಿಸಲಾಯಿತು.

ಜಿಲ್ಲೆಯಲ್ಲಿ ಕೃಷಿ ಚಟುವಟಿಕೆಗಳಿಗೆ ನೀರಾವರಿ ಅತ್ಯಂತ ಅವಶ್ಯಕವಾಗಿದ್ದು, ಕೃಷಿ ಪಂಪ್‌ಸೆಟ್‌ಗಳಿಗೆ ದಿನಕ್ಕೆ ಕೇವಲ 6 ಗಂಟೆಗಳ ವಿದ್ಯುತ್ ಪೂರೈಕೆ ಮಾಡುತ್ತಿರುವುದರಿಂದ ರೈತರು ತೊಂದರೆ ಅನುಭವಿಸುತ್ತಿದ್ದಾರೆ. ಸಮರ್ಪಕ ವಿದ್ಯುತ್ ಲಭ್ಯವಾಗದ ಕಾರಣ ಬೆಳೆಗಳಿಗೆ ಅಗತ್ಯ ಪ್ರಮಾಣದ ನೀರುಣಿಸಲು ಸಾಧ್ಯವಾಗದೆ ಬೆಳೆ ನಷ್ಟ ಉಂಟಾಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಇದರಿಂದ ಈಗಾಗಲೇ ಸಂಕಷ್ಟದಲ್ಲಿರುವ ರೈತರು ಮತ್ತಷ್ಟು ಸಾಲದ ಹೊರೆಗೆ ಸಿಲುಕುವಂತಾಗಿದೆ ಎಂದು ಸಂಘದ ಮುಖಂಡರು ಮನವಿಯಲ್ಲಿ ತಿಳಿಸಿದ್ದಾರೆ.

ರೈತರ ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗುವಂತೆ ಪ್ರಸ್ತುತ ಇರುವ 6 ಗಂಟೆಗಳ ವಿದ್ಯುತ್ ಪೂರೈಕೆಯನ್ನು 8 ಗಂಟೆಗಳಿಗೆ ಹೆಚ್ಚಿಸಬೇಕು. ರೈತರ ಬೆಳೆಗಳಿಗೆ ಸಮರ್ಪಕ ನೀರಾವರಿ ಕಲ್ಪಿಸಲು ಗುಣಮಟ್ಟದ ಹಾಗೂ ನಿರಂತರ ವಿದ್ಯುತ್ ಪೂರೈಕೆ ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಅಗತ್ಯ ಸೂಚನೆ ನೀಡಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ನಾಗರಾಜ, ಹನುಮಂತಪ್ಪ, ಜಿಲ್ಲಾ ಉಪಾಧ್ಯಕ್ಷ ನಲ್ಲಪ್ಪ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ರೇಷ್ಮಾ, ನಾಗರತ್ನ, ಅಂಬಮ್ಮ, ಅನ್ನಪೂರ್ಣ, ರಾಘವೇಂದ್ರ ಸೇರಿದಂತೆ ರೈತ ಸಂಘದ ಮುಖಂಡರು ಹಾಗೂ ರೈತರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor