Vijayanagara | ಬರ ಪರಿಹಾರ ಹೆಚ್ಚಿಸಿ ಪ್ರತಿ ಎಕರೆಗೆ 50 ಸಾವಿರ ರೂ. ನೀಡಲು ರೈತ ಸಂಘ ಆಗ್ರಹ
ಹೊಸಪೇಟೆ/ವಿಜಯನಗರ: ಬರಪೀಡಿತ ಪ್ರದೇಶಗಳ ರೈತರಿಗೆ ಸರ್ಕಾರ ಘೋಷಿಸಿರುವ ಪರಿಹಾರ ಮೊತ್ತವನ್ನು ಹೆಚ್ಚಿಸಿ, ಪ್ರತಿ ಎಕರೆಗೆ 50,000 ರೂ. ಪರಿಹಾರ ನೀಡಬೇಕು ಎಂದು ಕರ್ನಾಟಕ ರಾಜ್ಯ ರೈತರ ಸಂಘ ಹಾಗೂ ಹಸಿರು ಸೇನೆ (ರಿ.) ಜೆ. ಕಾರ್ತಿಕ್ ಬಣ ಒತ್ತಾಯಿಸಿದೆ.
ಈ ಕುರಿತು ಸಂಘದ ಪದಾಧಿಕಾರಿಗಳು ವಿಜಯನಗರ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಿದರು.
ವಿಜಯನಗರ ಜಿಲ್ಲೆಯಲ್ಲಿ ಮಳೆ ಕೊರತೆಯಿಂದ ರೈತರು ತೀವ್ರ ಬರ ಪರಿಸ್ಥಿತಿ ಎದುರಿಸುತ್ತಿದ್ದಾರೆ. ಸರ್ಕಾರ ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿದ್ದು, ರೈತರಿಗೆ 2,500 ರೂ. ಪರಿಹಾರ ನೀಡುವುದಾಗಿ ತಿಳಿಸಿದೆ. ಆದರೆ ಕೃಷಿ ಚಟುವಟಿಕೆಗಳಿಗೆ ನೀರಾವರಿ, ಕಾರ್ಮಿಕರ ಕೂಲಿ ಸೇರಿದಂತೆ ಹಲವು ಖರ್ಚುಗಳನ್ನು ಮಾಡಿರುವ ರೈತರು ಬರದಿಂದ ಬೆಳೆ ಹಾನಿ ಹಾಗೂ ಇಳುವರಿ ನಷ್ಟ ಅನುಭವಿಸುತ್ತಿದ್ದಾರೆ. ಹೀಗಾಗಿ 2,500 ರೂ. ಪರಿಹಾರವು ರೈತರಿಗೆ ಆಗಿರುವ ನಷ್ಟಕ್ಕೆ ಹೋಲಿಸಿದರೆ ಸಮರ್ಪಕವಾಗಿಲ್ಲ ಎಂದು ಸಂಘದ ಮುಖಂಡರು ಮನವಿಯಲ್ಲಿ ತಿಳಿಸಿದ್ದಾರೆ.
ಬರದಿಂದ ಸಂಕಷ್ಟಕ್ಕೀಡಾಗಿರುವ ರೈತರ ಪರಿಸ್ಥಿತಿಯನ್ನು ಸರ್ಕಾರ ಮಾನವೀಯ ನೆಲೆಯಲ್ಲಿ ಪರಿಗಣಿಸಿ, ಕನಿಷ್ಠ ಪ್ರತಿ ಎಕರೆಗೆ 50,000 ರೂ. ರಂತೆ ಬರ ಪರಿಹಾರ ನೀಡಬೇಕು ಎಂದು ಅವರು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಸಂಘದ ಜಿಲ್ಲಾ ಉಪಾಧ್ಯಕ್ಷ ಹನುಮಂತಪ್ಪ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ನಲ್ಲಪ್ಪ ಸೇರಿದಂತೆ ರೇಷ್ಮಾ, ಲಕ್ಷ್ಮಿ, ಪಾರ್ವತಿ, ಅನ್ನಪೂರ್ಣ, ಅಂಬಮ್ಮ, ರಾಘವೇಂದ್ರ, ನಾಗರತ್ನ ಮತ್ತಿತರರು ಉಪಸ್ಥಿತರಿದ್ದರು.