Vijayanagara | ಕೆಎಸ್‌ಆರ್‌ಟಿಸಿ ಸಿಬ್ಬಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ

Update: 2026-08-05 20:43 IST

ಹೊಸಪೇಟೆ/ವಿಜಯನಗರ, ಆ.5: ವಿಜಯನಗರ ವಿಭಾಗೀಯ ಕಚೇರಿ, ವಿಭಾಗೀಯ ಕಾರ್ಯಗಾರ ಹಾಗೂ ಹೊಸಪೇಟೆ ಘಟಕದ ಅಧಿಕಾರಿಗಳು ಮತ್ತು ಸಿಬ್ಬಂದಿಯ ಆರೋಗ್ಯ ಹಿತದೃಷ್ಟಿಯಿಂದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಮಂಗಳವಾರ ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲಾಯಿತು.

ಶಿಬಿರದಲ್ಲಿ ಸಿಬ್ಬಂದಿಯ ರಕ್ತದೊತ್ತಡ, ಮಧುಮೇಹ ಸೇರಿದಂತೆ ವಿವಿಧ ಆರೋಗ್ಯ ತಪಾಸಣೆಗಳನ್ನು ನಡೆಸಿ, ವೈದ್ಯರು ಅಗತ್ಯ ವೈದ್ಯಕೀಯ ಸಲಹೆಗಳನ್ನು ನೀಡಿದರು. ಆರೋಗ್ಯ ಸಮಸ್ಯೆಗಳನ್ನು ಆರಂಭಿಕ ಹಂತದಲ್ಲೇ ಪತ್ತೆಹಚ್ಚುವುದು ಹಾಗೂ ಸಿಬ್ಬಂದಿಯಲ್ಲಿ ಆರೋಗ್ಯ ಜಾಗೃತಿ ಮೂಡಿಸುವ ಉದ್ದೇಶದಿಂದ ಶಿಬಿರ ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮದಲ್ಲಿ ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿ, ವಿಭಾಗೀಯ ತಾಂತ್ರಿಕ ಶಿಲ್ಪಿ, ಕಾರ್ಮಿಕ ಮತ್ತು ಕಲ್ಯಾಣಾಧಿಕಾರಿ, ಉಗ್ರಾಣ ಅಧಿಕಾರಿ ಸೇರಿದಂತೆ ವಿವಿಧ ವಿಭಾಗಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಆರೋಗ್ಯ ತಪಾಸಣೆ ಮಾಡಿಸಿಕೊಂಡರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವೈದ್ಯರಾದ ಡಾ. ಭೋಜ್ ರಾಜ್ ಸಿಬ್ಬಂದಿಯ ಆರೋಗ್ಯ ತಪಾಸಣೆ ನಡೆಸಿ, ಆರೋಗ್ಯಕರ ಜೀವನಶೈಲಿ, ಸಮತೋಲಿತ ಆಹಾರ ಸೇವನೆ, ನಿಯಮಿತ ವ್ಯಾಯಾಮ ಹಾಗೂ ಕಾಲಕಾಲಕ್ಕೆ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವ ಮಹತ್ವದ ಕುರಿತು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ವಿಭಾಗೀಯ ಕಚೇರಿ, ವಿಭಾಗೀಯ ಕಾರ್ಯಗಾರ, ಹೊಸಪೇಟೆ ಘಟಕದ ಅಧಿಕಾರಿಗಳು, ಸಿಬ್ಬಂದಿ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಿಬ್ಬಂದಿ ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News