Vijayanagara | ಆರೆಸ್ಸೆಸ್ ನೋಂದಣಿಗೆ ಆಗ್ರಹಿಸಿ ಹೊಸಪೇಟೆಯಲ್ಲಿ ಬೃಹತ್ ಪ್ರತಿಭಟನೆ
ಹೊಸಪೇಟೆ/ವಿಜಯನಗರ: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರೆಸ್ಸೆಸ್) ಕಾನೂನುಬದ್ಧವಾಗಿ ನೋಂದಣಿ ಮಾಡಿಸಿಕೊಳ್ಳಬೇಕು ಎಂದು ಆಗ್ರಹಿಸಿ ಸಂವಿಧಾನ ಸಂರಕ್ಷಣಾ ಸಮಿತಿ ವತಿಯಿಂದ ಬುಧವಾರ ಹೊಸಪೇಟೆಯ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.
ಪ್ರತಿಭಟನೆಯಲ್ಲಿ ಪಾಲ್ಗೊಂಡ ಮುಖಂಡರು ಮತ್ತು ಕಾರ್ಯಕರ್ತರು, ದೇಶದ ಪ್ರತಿಯೊಬ್ಬ ನಾಗರಿಕ ಹಾಗೂ ಸಂಘಟನೆ ಸಂವಿಧಾನ ಮತ್ತು ಕಾನೂನಿಗೆ ಬದ್ಧರಾಗಿರಬೇಕು. ಎಲ್ಲ ಸಂಘಟನೆಗಳೂ ಕಾನೂನಿನ ಚೌಕಟ್ಟಿನೊಳಗೆ ಕಾರ್ಯನಿರ್ವಹಿಸಬೇಕು. ಆದ್ದರಿಂದ ಆರೆಸ್ಸೆಸ್ ಕೂಡ ಕಾನೂನುಬದ್ಧವಾಗಿ ನೋಂದಣಿ ಮಾಡಿಸಿಕೊಳ್ಳಬೇಕು ಎಂದು ಒತ್ತಾಯಿಸಿದರು.
ಆರೆಸ್ಸೆಸ್ ಸುಮಾರು ನೂರು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದೆ ಎಂದು ಹೇಳಿಕೊಳ್ಳುತ್ತಿದ್ದರೂ ಅಧಿಕೃತ ನೋಂದಣಿ ಮಾಡಿಸಿಕೊಳ್ಳದಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಕಾನೂನಿಗೆ ಎಲ್ಲರೂ ಸಮಾನರು ಎಂಬ ಸಂವಿಧಾನದ ತತ್ವವನ್ನು ಎಲ್ಲ ಸಂಘಟನೆಗಳು ಪಾಲಿಸಬೇಕು ಎಂದು ಅವರು ಹೇಳಿದರು.
ದೇಶದಲ್ಲಿ ಜನನ ಹಾಗೂ ಮರಣಕ್ಕೂ ನೋಂದಣಿ ವ್ಯವಸ್ಥೆ ಇರುವ ಸಂದರ್ಭದಲ್ಲಿ ಇಷ್ಟು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಸಂಘಟನೆಯೂ ನೋಂದಣಿ ಮಾಡಿಸಿಕೊಳ್ಳದಿರುವುದು ಸಮಂಜಸವಲ್ಲ ಎಂದು ಅಭಿಪ್ರಾಯಪಟ್ಟ ಅವರು, ಆರೆಸ್ಸೆಸ್ ಚಟುವಟಿಕೆಗಳ ಕುರಿತು ಸರ್ಕಾರ ಸೂಕ್ತ ತನಿಖೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ರಾಜ್ಯ ಸಚಿವರು ಎತ್ತಿರುವ ಆರೆಸ್ಸೆಸ್ ನೋಂದಣಿ ವಿಚಾರಕ್ಕೆ ದೇಶದಾದ್ಯಂತ ಬೆಂಬಲ ವ್ಯಕ್ತವಾಗುತ್ತಿದೆ ಎಂದು ಪ್ರತಿಭಟನಾಕಾರರು ತಿಳಿಸಿದರು. ಅವರ ವಿರುದ್ಧ ರಾಜಕೀಯ ಪ್ರೇರಿತ ಕ್ರಮಗಳು ಅಥವಾ ಪಿತೂರಿಗಳು ನಡೆದರೆ ರಾಜ್ಯ ಹಾಗೂ ದೇಶಾದ್ಯಂತ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದರು. ಅವರಿಗೆ ಸೂಕ್ತ ಭದ್ರತೆ ಒದಗಿಸುವಂತೆ ಸರ್ಕಾರವನ್ನು ಒತ್ತಾಯಿಸಿದರು.
ವಿಶೇಷ ತೀವ್ರ ಪರಿಶೀಲನೆ (SIR) ಪ್ರಕ್ರಿಯೆಗೆ ಗಡುವು ನಿಗದಿಪಡಿಸಿರುವಂತೆ, ಹಲವು ದಶಕಗಳಿಂದ ಕಾರ್ಯನಿರ್ವಹಿಸುತ್ತಿರುವ ಆರೆಸ್ಸೆಸ್‌ಗೆ ಸಹ ನೋಂದಣಿ ಹಾಗೂ ಲೆಕ್ಕಪತ್ರ ಸಲ್ಲಿಕೆಗೆ ಕಾಲಮಿತಿ ನಿಗದಿಪಡಿಸಬೇಕು ಎಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು.
ಒಂದು ವೇಳೆ ಸಂಘಟನೆ ಕಾನೂನುಬದ್ಧವಾಗಿ ನೋಂದಣಿ ಮಾಡಿಸಿಕೊಳ್ಳದಿದ್ದರೆ ರಾಜ್ಯ ಹಾಗೂ ದೇಶಾದ್ಯಂತ ಹಂತ ಹಂತವಾಗಿ ಹೋರಾಟ ನಡೆಸುವುದಾಗಿ ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.
ಪ್ರತಿಭಟನೆಯಲ್ಲಿ ಬಿ.ಮಾರಣ್ಯ, ಕೆ.ರಮೇಶ್, ಕೃಷ್ಣ (ಕಿಟ್ಟೆ), ಲಿಂಗಣ್ಣ ನಾಯಕ್, ಸಣ್ಣ ಮರ್ಯಪ್ಪ, ಬಿಸೆಟ್ಟಿ ತಾಯಪ್ಪ, ಸಿ. ಗೋವಿಂದ, ವೈ. ರಾಮಚಂದ್ರ ಬಾಬು, ಪೀರ್ ಬಾಷಾ, ಶಿವು, ವಕೀಲರಾದ ಸದ್ದಾಂ ಹುಸೇನ್, ಕರುಣಾನಿಧಿ ಸೇರಿದಂತೆ ಹಲವರು ಭಾಗವಹಿಸಿದ್ದರು.