Vijayanagara | ಸರ್ಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ ನೂತನ ವಿದ್ಯಾರ್ಥಿನಿಯರಿಗೆ ಅದ್ದೂರಿ ಸ್ವಾಗತ

Update: 2026-07-17 21:35 IST

ಕೊಟ್ಟೂರು (ವಿಜಯನಗರ), ಜು.17: ಪಟ್ಟಣದ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ ಹೊಸದಾಗಿ ದಾಖಲಾತಿ ಪಡೆದ ವಿದ್ಯಾರ್ಥಿನಿಯರಿಗೆ ಹಿರಿಯ ವಿದ್ಯಾರ್ಥಿನಿಯರು ಪುಷ್ಪಗುಚ್ಛ ನೀಡಿ ಆತ್ಮೀಯ ಸ್ವಾಗತ ಕೋರಿದರೆ, 2026-27ನೇ ಸಾಲಿನ ಶಾಲಾ ಸಂಸತ್ ಚುನಾವಣೆಯಲ್ಲಿ ಆಯ್ಕೆಯಾದ ವಿದ್ಯಾರ್ಥಿ ಪ್ರತಿನಿಧಿಗಳ ಪದಗ್ರಹಣ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ವಿಜೃಂಭಣೆಯಿಂದ ಜರುಗಿದವು.

ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ನಿವೃತ್ತ ಪ್ರಾಧ್ಯಾಪಕ ಡಾ. ಮಹಾಬಲೇಶ್ವರ ಅವರು ವಿದ್ಯಾರ್ಥಿನಿಯರನ್ನು ಉದ್ದೇಶಿಸಿ ಮಾತನಾಡಿ, ವಿದ್ಯಾರ್ಥಿ ಜೀವನ ಅತ್ಯಂತ ಅಮೂಲ್ಯವಾಗಿದ್ದು, ಪ್ರತಿಯೊಬ್ಬರೂ ಸ್ಪಷ್ಟ ಗುರಿ ಮತ್ತು ಉದ್ದೇಶದೊಂದಿಗೆ ಶಿಸ್ತು ಹಾಗೂ ಕಠಿಣ ಪರಿಶ್ರಮದಿಂದ ಮುನ್ನಡೆದರೆ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯ ಎಂದು ಸಲಹೆ ನೀಡಿದರು.

ಶಾಲೆಯ ಮುಖ್ಯಗುರು ಎಸ್.ಎ. ಬಸವರಾಜ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಶಾಲೆಯ ಶೈಕ್ಷಣಿಕ ಸಾಧನೆ ಹಾಗೂ ವಿದ್ಯಾರ್ಥಿನಿಯರ ಸರ್ವತೋಮುಖ ಅಭಿವೃದ್ಧಿಗಾಗಿ ಹಮ್ಮಿಕೊಳ್ಳಲಾಗುತ್ತಿರುವ ವಿವಿಧ ಕಾರ್ಯಕ್ರಮಗಳ ಕುರಿತು ಮಾಹಿತಿ ನೀಡಿದರು.

ಇದೇ ವೇಳೆ ಇತ್ತೀಚೆಗೆ ನಡೆದ ಶಾಲಾ ಸಂಸತ್ ಚುನಾವಣೆಯಲ್ಲಿ ಆಯ್ಕೆಯಾದ ವಿದ್ಯಾರ್ಥಿ ನಾಯಕರಿಗೆ ಪ್ರಮಾಣವಚನ ಬೋಧಿಸಿ ಅಧಿಕಾರ ವಹಿಸಲಾಯಿತು. ಬಳಿಕ ವಿದ್ಯಾರ್ಥಿನಿಯರು ನಡೆಸಿಕೊಟ್ಟ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ಗಮನ ಸೆಳೆದವು.

ಕಾರ್ಯಕ್ರಮದಲ್ಲಿ ವಿಜ್ಞಾನ ಶಿಕ್ಷಕ ಕೊಟ್ರುಸ್ವಾಮಿ ಎಸ್.ಎಂ. ಸ್ವಾಗತಿಸಿದರು. ಶಿಕ್ಷಕ ಮಹಾಂತೇಶ್ ಕಾರ್ಯಕ್ರಮ ನಿರೂಪಿಸಿದರೆ, ಶಿಕ್ಷಕಿ ರೇಖಾ ವಂದಿಸಿದರು.

ಈ ಸಂದರ್ಭದಲ್ಲಿ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳು, ಶಿಕ್ಷಣ ಪ್ರೇಮಿಗಳು, ಶಾಲಾ ಅಭಿವೃದ್ಧಿ ಮತ್ತು ಮೇಲ್ವಿಚಾರಣಾ ಸಮಿತಿ (ಎಸ್‌ಡಿಎಂಸಿ) ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಶಾಲೆಯ ಶಿಕ್ಷಕರು, ಸಿಬ್ಬಂದಿ ಮತ್ತು ನೂರಾರು ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News