ವಿಜಯನಗರ (ಹೊಸಪೇಟೆ) : ರೋಗಿಗಳ ಆರೋಗ್ಯ ಸ್ಥಿತಿಯನ್ನು ಕಾಲಕಾಲಕ್ಕೆ ಪರಿಶೀಲಿಸಿ, ತುರ್ತು ಪರಿಸ್ಥಿತಿಗಳನ್ನು ಮೊದಲೇ ಗುರುತಿಸಿ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವ ಮೂಲಕ ತಾಯಿ ಮತ್ತು ಶಿಶು ಮರಣ ಪ್ರಮಾಣವನ್ನು ಹಂತಹಂತವಾಗಿ ಕಡಿಮೆ ಮಾಡಲು ಆರೋಗ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗರಿಮಾ ಪನ್ವಾರ್ ಕಟ್ಟುನಿಟ್ಟಿನ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ತಾಯಿ ಮತ್ತು ಶಿಶು ಮರಣ ಪ್ರಕರಣಗಳ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಆಸ್ಪತ್ರೆಗೆ ಚಿಕಿತ್ಸೆಗಾಗಿ ಬರುವ ಪ್ರತಿಯೊಬ್ಬ ರೋಗಿಯ ಆರೋಗ್ಯ ಸ್ಥಿತಿಯ ಮೇಲೆ ನಿರಂತರ ನಿಗಾ ಇರಬೇಕು. ತುರ್ತು ಸಂದರ್ಭದಲ್ಲಿ ಕ್ಷಣವೂ ವಿಳಂಬ ಮಾಡದೆ ಸೂಕ್ತ ಚಿಕಿತ್ಸೆ ನೀಡಬೇಕು. ಯಾವುದೇ ಹಂತದಲ್ಲಿ ನಿರ್ಲಕ್ಷ್ಯಕ್ಕೆ ಅವಕಾಶ ಇರಬಾರದು ಎಂದು ಎಚ್ಚರಿಸಿದರು.

ಜಿಲ್ಲೆಯಲ್ಲಿ ಕಳೆದ ಜೂನ್‌ನಿಂದ ಈವರೆಗೆ ಒಂದು ತಾಯಿ ಮರಣ, ಎರಡು ಶಿಶು ಮರಣ ಹಾಗೂ ಐದು ವರ್ಷದೊಳಗಿನ ಮಕ್ಕಳಲ್ಲಿ ಮೂರು ಮರಣ ಪ್ರಕರಣಗಳು ವರದಿಯಾಗಿರುವ ಹಿನ್ನೆಲೆಯಲ್ಲಿ ಪ್ರತಿಯೊಂದು ಪ್ರಕರಣವನ್ನೂ ಗಂಭೀರವಾಗಿ ಪರಿಶೀಲಿಸಿ, ಸಾವಿಗೆ ಕಾರಣವಾದ ವೈದ್ಯಕೀಯ ಅಂಶಗಳನ್ನು ಗುರುತಿಸಬೇಕು ಎಂದು ಸೂಚಿಸಿದರು.

ರೋಗಿಗಳ ಸ್ಥಿತಿಯನ್ನು ಸಮರ್ಪಕವಾಗಿ ಗಮನಿಸದೆ, ಅಗತ್ಯ ಸಮಯದಲ್ಲಿ ಚಿಕಿತ್ಸೆ ನೀಡದಿರುವ ಕುರಿತು ದೂರುಗಳು ಕೇಳಿಬರುತ್ತಿವೆ. ಪರಿಣಿತ ವೈದ್ಯರ ಸೇವೆ ಲಭ್ಯವಿದ್ದರೂ ತುರ್ತು ಸಂದರ್ಭದಲ್ಲಿ ಸಮರ್ಪಕವಾಗಿ ಸ್ಪಂದಿಸದಿರುವುದು ಗಂಭೀರ ವಿಚಾರ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸಭೆಯಲ್ಲಿ ವಿದ್ಯಾ ಎಂಬ ಮಗು ಹಾಗೂ ಭವಾನಿ ಎಂಬ ಮಹಿಳೆಗೆ ಸಮರ್ಪಕ ಚಿಕಿತ್ಸೆ ನೀಡದೆ ಜಿಲ್ಲಾ ಮಟ್ಟದ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂಬ ಆರೋಪವೂ ಪ್ರಸ್ತಾಪವಾಯಿತು. ಈ ಪ್ರಕರಣದಲ್ಲಿ ಸಂಬಂಧಪಟ್ಟ ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿಯ ಕರ್ತವ್ಯ ನಿರ್ವಹಣೆಯನ್ನು ಪರಿಶೀಲಿಸಿ, ಲೋಪ ಕಂಡುಬಂದರೆ ನಿಯಮಾನುಸಾರ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಸಾವಿಗೆ ನಿಖರ ಕಾರಣವೇನು, ಯಾವ ಚಿಕಿತ್ಸಾ ಕ್ರಮ ಕೈಗೊಳ್ಳಲಾಯಿತು, ರೋಗಿಯ ಸ್ಥಿತಿ ಯಾವ ಹಂತದಲ್ಲಿ ಗಂಭೀರವಾಯಿತು ಹಾಗೂ ಮೇಲ್ದರ್ಜೆಯ ಆಸ್ಪತ್ರೆಗೆ ಏಕೆ ರವಾನಿಸಲಾಯಿತು ಎಂಬ ಸಂಪೂರ್ಣ ಮಾಹಿತಿಯನ್ನು ದಾಖಲಾತಿಗಳೊಂದಿಗೆ ಸಲ್ಲಿಸುವಂತೆ ಅಧಿಕಾರಿಗಳಿಗೆ ತಾಕೀತು ಮಾಡಿದರು.

“ಒಂದು ಜೀವ ಕಳೆದುಹೋದ ಬಳಿಕ ಕಾರಣ ಹುಡುಕುವುದಕ್ಕಿಂತ ಜೀವ ಉಳಿಸುವ ಮುನ್ನೆಚ್ಚರಿಕೆಯೇ ಮುಖ್ಯ” ಎಂದು ಗರಿಮಾ ಪನ್ವಾರ್ ಹೇಳಿದರು.

ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಮಾತನಾಡಿ, ಆಸ್ಪತ್ರೆಗೆ ಬರುವ ಸಾರ್ವಜನಿಕರೊಂದಿಗೆ ಕೆಲ ಸಿಬ್ಬಂದಿ ಸೌಜನ್ಯಯುತವಾಗಿ ವರ್ತಿಸುತ್ತಿಲ್ಲ ಎಂಬ ಗಂಭೀರ ಆರೋಪಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.

ಆಸ್ಪತ್ರೆ ಸಂಕಷ್ಟದಲ್ಲಿರುವ ಜನರು ಭರವಸೆಯಿಂದ ಬರುವ ಸ್ಥಳವಾಗಿದ್ದು, ವೈದ್ಯರು ಮತ್ತು ಸಿಬ್ಬಂದಿ ರೋಗಿಗಳು ಹಾಗೂ ಅವರ ಕುಟುಂಬಸ್ಥರೊಂದಿಗೆ ಮಾನವೀಯತೆ ಮತ್ತು ಜವಾಬ್ದಾರಿಯಿಂದ ವರ್ತಿಸಬೇಕು. ಅಸೌಜನ್ಯ ಅಥವಾ ಕರ್ತವ್ಯ ನಿರ್ಲಕ್ಷ್ಯವನ್ನು ಯಾವುದೇ ಕಾರಣಕ್ಕೂ ಸಹಿಸಲಾಗುವುದಿಲ್ಲ ಎಂದು ಎಚ್ಚರಿಕೆ ನೀಡಿದರು.

ತಾಯಿ ಮತ್ತು ಶಿಶು ಮರಣ ಪ್ರಮಾಣ ಕಡಿಮೆ ಮಾಡುವ ಉದ್ದೇಶದಿಂದ ಪ್ರತಿ ಮೂರು ತಿಂಗಳಿಗೊಮ್ಮೆ ವೈದ್ಯರು ಹಾಗೂ ಸಿಬ್ಬಂದಿಗೆ ತುರ್ತು ಪರಿಸ್ಥಿತಿ ನಿರ್ವಹಣೆ, ರೋಗಿಯ ಸ್ಥಿತಿ ಗುರುತಿಸುವಿಕೆ, ತ್ವರಿತ ರೆಫರಲ್ ವ್ಯವಸ್ಥೆ ಹಾಗೂ ಚಿಕಿತ್ಸಾ ಪ್ರೋಟೋಕಾಲ್ ಕುರಿತು ತರಬೇತಿ ನೀಡುವಂತೆ ಜಿಲ್ಲಾ ಆರೋಗ್ಯಾಧಿಕಾರಿಗೆ ನಿರ್ದೇಶನ ನೀಡಿದರು.

ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಟಿ. ಲಿಂಗರಾಜು, ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ. ಜಂಬಯ್ಯ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಷಣ್ಮುಖನಾಯ್ಕ, ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ. ಭಾಸ್ಕರ್, ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿ ಡಾ. ರಾಧಿಕಾರಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಎಂ.ಪಿ. ದೊಡ್ಡಮನಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor