Vijayanagara | ನ. 28ರಂದು ಸೋಲದಹಳ್ಳಿಯಲ್ಲಿ ‘ಪ್ರಜಾ ಸೇವಾ ಆಂದೋಲನ’ ಕಾರ್ಯಕ್ರಮ
Photo credit : AI
ಕೂಡ್ಲಿಗಿ/ವಿಜಯನಗರ: ಸಾರ್ವಜನಿಕರಿಗೆ ಸರ್ಕಾರಿ ಸೌಲಭ್ಯಗಳು ಹಾಗೂ ವಿವಿಧ ಇಲಾಖೆಗಳ ಸೇವೆಗಳನ್ನು ಸುಲಭವಾಗಿ ತಲುಪಿಸುವ ಉದ್ದೇಶದಿಂದ ಕೂಡ್ಲಿಗಿ ತಾಲೂಕು ಆಡಳಿತದ ವತಿಯಿಂದ ‘ಪ್ರಜಾ ಸೇವಾ ಆಂದೋಲನ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
‘ಬಾಗಿಲಿಗೆ ಬಂತು ಸರ್ಕಾರ – ಸೇವೆಗೆ ಇರಲಿ ಸಹಕಾರ’ ಎಂಬ ಆಶಯದೊಂದಿಗೆ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ಒದಗಿಸುವುದರ ಜತೆಗೆ, ಅರ್ಹ ಫಲಾನುಭವಿಗಳಿಗೆ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳನ್ನು ತಲುಪಿಸಲು ಆದ್ಯತೆ ನೀಡಲಾಗಿದೆ.
ನವೆಂಬರ್ 28ರ ಶನಿವಾರ ಬೆಳಿಗ್ಗೆ 11 ಗಂಟೆಗೆ ಕೂಡ್ಲಿಗಿ ತಾಲೂಕಿನ ಸೋಲದಹಳ್ಳಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ತಾಲೂಕು ಆಡಳಿತ ಪ್ರಕಟಣೆಯಲ್ಲಿ ತಿಳಿಸಿದೆ.
ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಭಾಗವಹಿಸಿ ಸಾರ್ವಜನಿಕರಿಗೆ ಇಲಾಖಾವಾರು ಸೇವೆಗಳನ್ನು ಒದಗಿಸಲಿದ್ದಾರೆ. ಸಂಧ್ಯಾ ಸುರಕ್ಷಾ, ವಿಧವಾ ವೇತನ, ಅಂಗವಿಕಲರ ಮಾಸಾಶನ ಸೇರಿದಂತೆ ವಿವಿಧ ಪಿಂಚಣಿ ಸೌಲಭ್ಯಗಳ ಕುರಿತು ಮಾಹಿತಿ ನೀಡುವುದರ ಜತೆಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗುತ್ತದೆ.
ಕಂದಾಯ ಇಲಾಖೆಗೆ ಸಂಬಂಧಿಸಿದ ಪಹಣಿ ತಿದ್ದುಪಡಿ, ಬಾತ್ ಬದಲಾವಣೆ, ಪೋಡಿ ಸೇರಿದಂತೆ ವಿವಿಧ ಸೇವೆಗಳನ್ನು ಒದಗಿಸಲಾಗುತ್ತದೆ. ಗ್ರಾಮೀಣಾಭಿವೃದ್ಧಿ ಇಲಾಖೆಯ ಗೃಹಲಕ್ಷ್ಮಿ, ಗೃಹಜ್ಯೋತಿ, ಯುವನಿಧಿ, ಅನ್ನಭಾಗ್ಯ ಹಾಗೂ ಶಕ್ತಿ ಯೋಜನೆಗಳ ಸೌಲಭ್ಯಗಳ ಕುರಿತು ಮಾಹಿತಿ ನೀಡಿ, ಅರ್ಹರಿಗೆ ಯೋಜನೆಗಳ ಪ್ರಯೋಜನ ದೊರಕಿಸಿಕೊಡಲು ಕ್ರಮ ಕೈಗೊಳ್ಳಲಾಗುತ್ತದೆ.
ಇದಲ್ಲದೆ, ಇತರೆ ಇಲಾಖೆಗಳ ವತಿಯಿಂದ ಮನೆ ಹಂಚಿಕೆ, ಜಾತಿ ಮತ್ತು ಆದಾಯ ಪ್ರಮಾಣಪತ್ರ, ಕುಡಿಯುವ ನೀರು, ನರೇಗಾ ಉದ್ಯೋಗ ಹಾಗೂ ವಿವಿಧ ಸ್ಥಳೀಯ ಸಮಸ್ಯೆಗಳಿಗೆ ಸಂಬಂಧಿಸಿದ ಸೇವೆಗಳನ್ನು ಒದಗಿಸಲಾಗುತ್ತದೆ. ಸರ್ಕಾರದ ವಿವಿಧ ಇಲಾಖೆಗಳ ಸೌಲಭ್ಯಗಳಿಂದ ವಂಚಿತರಾಗಿರುವ ಅರ್ಹ ಫಲಾನುಭವಿಗಳನ್ನು ಗುರುತಿಸಿ ಅವರಿಗೆ ಸೌಲಭ್ಯಗಳನ್ನು ತಲುಪಿಸುವುದು ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿದೆ.
ಸಾರ್ವಜನಿಕರು ತಮ್ಮ ಆಧಾರ್ ಕಾರ್ಡ್, ಅಗತ್ಯ ದಾಖಲೆಗಳು ಹಾಗೂ ಸಂಬಂಧಿತ ಅರ್ಜಿಗಳೊಂದಿಗೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಸರ್ಕಾರದ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು. ಅಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಕಾರ್ಯಕ್ರಮಕ್ಕೆ ಅಗತ್ಯ ಸಹಕಾರ ನೀಡುವಂತೆ ತಾಲೂಕು ಆಡಳಿತ ಮನವಿ ಮಾಡಿದೆ.