ವಿಜಯನಗರ (ಕೂಡ್ಲಿಗಿ) : “ಸಮಸ್ಯೆ ನಿಮ್ಮದು… ಪರಿಹಾರದ ಹೊಣೆ ನಮ್ಮದು!” ಎಂಬ ಆಶಯದೊಂದಿಗೆ ಕೂಡ್ಲಿಗಿ ವಿಧಾನಸಭಾ ಕ್ಷೇತ್ರದ ಗುಡೆಕೋಟೆ ಹೋಬಳಿ ಮಟ್ಟದ ಪ್ರಜಾ ಸೇವಾ ಆಂದೋಲನ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಶಾಸಕ ಡಾ. ಶ್ರೀನಿವಾಸ್ ಎನ್.ಟಿ. ಮಾತನಾಡಿ, ಕಾಂಗ್ರೆಸ್ ಸರ್ಕಾರ ಜನಪರ ಆಡಳಿತಕ್ಕೆ ಬದ್ಧವಾಗಿದ್ದು, ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಕನಸಿನ ಯೋಜನೆಯಾದ ಪ್ರಜಾ ಸೇವಾ ಆಂದೋಲನದ ಮೂಲಕ ಜನರ ಸಮಸ್ಯೆಗಳಿಗೆ ತ್ವರಿತ ಹಾಗೂ ಸೂಕ್ತ ಪರಿಹಾರ ಕಲ್ಪಿಸುವುದು ಸರ್ಕಾರದ ಆದ್ಯತೆಯಾಗಿದೆ ಎಂದು ಹೇಳಿದರು.

ಜನರ ಅಹವಾಲುಗಳನ್ನು ನೇರವಾಗಿ ಆಲಿಸಿ, ಸಂಬಂಧಿತ ಇಲಾಖೆಗಳ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸುವ ಮೂಲಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು. “ಸಾರ್ಥಕ ಸೇವೆ–ನಿರಂತರ ಅಭಿವೃದ್ಧಿ–ನಿರಂತರ ಜನಸಂಪರ್ಕ” ಧ್ಯೇಯದೊಂದಿಗೆ ಸಮೃದ್ಧ ಹಾಗೂ ಸುಭದ್ರ ಕೂಡ್ಲಿಗಿ ಕ್ಷೇತ್ರ ನಿರ್ಮಾಣಕ್ಕೆ ಸಂಕಲ್ಪಗೊಂಡಿದ್ದು, ಕ್ಷೇತ್ರದ ಪ್ರತಿಯೊಬ್ಬರ ಸಮಸ್ಯೆಗೂ ಸ್ಪಂದಿಸುವುದಾಗಿ ಭರವಸೆ ನೀಡಿದರು.

“ಒಂದು ಅರ್ಜಿ–ವರ್ಷಗಳ ಸಮಸ್ಯೆಗೆ ಪರಿಹಾರದ ಹೆಜ್ಜೆ” ಎಂಬ ಪರಿಕಲ್ಪನೆಯಡಿ ಸ್ಥಳದಲ್ಲೇ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿ ಸಂಬಂಧಿತ ಅಧಿಕಾರಿಗಳಿಗೆ ಕ್ರಮ ಕೈಗೊಳ್ಳುವಂತೆ ಸೂಚಿಸಲಾಯಿತು.

ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಕುಮಾರಿ ವಿ.ಕೆ. ನೇತ್ರಾವತಿ, ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ನರಸಪ್ಪ, ವಿವಿಧ ಇಲಾಖೆಗಳ ಅಧಿಕಾರಿಗಳು, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ವೆಂಕಟೇಶ್, ಗ್ಯಾರಂಟಿ ಯೋಜನೆಗಳ ಸಮಿತಿ ಅಧ್ಯಕ್ಷ ಶೇಕ್ ಮೊಹಮ್ಮದ್ ಜಿಲಾನ್, ಮುಖಂಡರಾದ ಶರಣಪ್ಪ, ಕೃಷ್ಣಪ್ಪ, ಕೆ.ಐ.ಬಿ. ಗೋವಿಂದ, ಜಿಲಾನ್, ಬಾಬು, ಬಶೀರ್ ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor