ವಿಜಯನಗರ (ಹೊಸಪೇಟೆ) : ಮಹಿಳೆಯರು ಮತ್ತು ಹೆಣ್ಣುಮಕ್ಕಳ ಮೇಲಿನ ದೌರ್ಜನ್ಯವನ್ನು ತಡೆಗಟ್ಟುವುದು ಕೇವಲ ಕಾನೂನಿನ ಜವಾಬ್ದಾರಿಯಲ್ಲ. ಅದು ಪ್ರತಿಯೊಬ್ಬ ನಾಗರಿಕನ ಸಾಮಾಜಿಕ ಹೊಣೆಗಾರಿಕೆಯಾಗಿದೆ. ಮಹಿಳೆಯರ ಹಕ್ಕು, ಸ್ವಾತಂತ್ರ್ಯ ಮತ್ತು ಘನತೆಯನ್ನು ಗೌರವಿಸುವ ಮನೋಭಾವವನ್ನು ಸಮಾಜದ ಪ್ರತಿಯೊಬ್ಬರೂ ಬೆಳೆಸಿಕೊಳ್ಳಬೇಕು ಎಂದು ಅಪರ ಸಿವಿಲ್ ನ್ಯಾಯಾಧೀಶರು ಹಾಗೂ ಜೆಎಂಎಫ್‌ಸಿ ನ್ಯಾ.ಶೃತಿ ತೇಲಿ ಹೇಳಿದರು.

ನಗರದ ಹೊಸಪೇಟೆ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ಮಹಿಳೆಯರ ಮೇಲಿನ ದೌರ್ಜನ್ಯ ನಿರ್ಮೂಲನೆ ಅಂತರರಾಷ್ಟ್ರೀಯ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಪ್ರತಿ ವರ್ಷ ನವೆಂಬರ್ 25ರಂದು ಮಹಿಳೆಯರ ಮೇಲಿನ ದೌರ್ಜನ್ಯ ನಿರ್ಮೂಲನೆಗಾಗಿ ಅಂತರರಾಷ್ಟ್ರೀಯ ದಿನವನ್ನು ಆಚರಿಸಲಾಗುತ್ತದೆ. ಮಹಿಳೆಯರು ಮತ್ತು ಹೆಣ್ಣುಮಕ್ಕಳ ವಿರುದ್ಧ ನಡೆಯುವ ದೈಹಿಕ, ಮಾನಸಿಕ, ಲೈಂಗಿಕ ಹಾಗೂ ಆರ್ಥಿಕ ದೌರ್ಜನ್ಯಗಳ ವಿರುದ್ಧ ಜಾಗೃತಿ ಮೂಡಿಸುವುದು ಈ ದಿನಾಚರಣೆಯ ಮುಖ್ಯ ಉದ್ದೇಶವಾಗಿದೆ. ಮಹಿಳೆಯರ ಮೇಲಿನ ಹಿಂಸಾಚಾರವು ಮಾನವ ಹಕ್ಕುಗಳ ಉಲ್ಲಂಘನೆಯಾಗಿದ್ದು, ಇಂತಹ ಕೃತ್ಯಗಳನ್ನು ತಡೆಗಟ್ಟಲು ಸಮಾಜದಲ್ಲಿ ಸಮಾನತೆ, ಪರಸ್ಪರ ಗೌರವ ಮತ್ತು ಮಾನವೀಯ ಮೌಲ್ಯಗಳನ್ನು ಬೆಳೆಸುವುದು ಅಗತ್ಯವಾಗಿದೆ ಎಂದರು.

ಮಹಿಳೆಯರ ಮೇಲಿನ ದೌರ್ಜನ್ಯವು ಕೇವಲ ದೈಹಿಕ ಹಲ್ಲೆಗೆ ಸೀಮಿತವಾಗಿಲ್ಲ. ಕೌಟುಂಬಿಕ ಕಿರುಕುಳ, ವರದಕ್ಷಿಣೆ ಕಿರುಕುಳ, ಮಾನಸಿಕ ಹಿಂಸೆ, ಕಾರ್ಯಸ್ಥಳದಲ್ಲಿ ಲೈಂಗಿಕ ಕಿರುಕುಳ ಹಾಗೂ ಸಾಮಾಜಿಕ ಜಾಲತಾಣಗಳ ಮೂಲಕ ನಡೆಯುವ ಮಾನಸಿಕ ದೌರ್ಜನ್ಯವೂ ಮಹಿಳೆಯರ ಸ್ವಾತಂತ್ರ್ಯ ಮತ್ತು ಆತ್ಮಗೌರವಕ್ಕೆ ಧಕ್ಕೆ ಉಂಟುಮಾಡುತ್ತಿವೆ. ಇಂತಹ ಘಟನೆಗಳನ್ನು ನಿರ್ಲಕ್ಷಿಸದೆ ಸಂತ್ರಸ್ತ ಮಹಿಳೆಯರಿಗೆ ಸೂಕ್ತ ಬೆಂಬಲ ಮತ್ತು ಕಾನೂನಿನ ನೆರವು ಒದಗಿಸಬೇಕು ಎಂದು ತಿಳಿಸಿದರು.

ಮಹಿಳೆಯರ ರಕ್ಷಣೆಗಾಗಿ ಹಲವು ಕಾಯ್ದೆ ಹಾಗೂ ಕಾನೂನುಗಳು ಜಾರಿಯಲ್ಲಿವೆ. ಮಹಿಳೆಯರು ತಮ್ಮ ಮೇಲಿನ ದೌರ್ಜನ್ಯಗಳ ವಿರುದ್ಧ ಧೈರ್ಯವಾಗಿ ಧ್ವನಿ ಎತ್ತಬೇಕು. ಅಗತ್ಯವಿದ್ದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಮೂಲಕ ಉಚಿತ ಕಾನೂನು ನೆರವು ಪಡೆದುಕೊಳ್ಳಬಹುದು ಎಂದರು.

ಮಹಿಳೆಯರ ಮೇಲಿನ ದೌರ್ಜನ್ಯ ತಡೆಗಟ್ಟುವ ಜಾಗೃತಿ ಕುಟುಂಬದಿಂದಲೇ ಆರಂಭವಾಗಬೇಕು. ಹೆಣ್ಣುಮಕ್ಕಳಿಗೆ ಶಿಕ್ಷಣ, ಸ್ವಾವಲಂಬನೆ ಮತ್ತು ಆತ್ಮರಕ್ಷಣೆಯ ಅರಿವು ಮೂಡಿಸುವುದರ ಜತೆಗೆ ಮಹಿಳೆಯರನ್ನು ಗೌರವದಿಂದ ಕಾಣುವ ಸಂಸ್ಕೃತಿಯನ್ನು ಬೆಳೆಸಬೇಕು. ದೌರ್ಜನ್ಯಕ್ಕೆ ಒಳಗಾದವರನ್ನು ದೂಷಿಸುವ ಬದಲು ಅವರಿಗೆ ಧೈರ್ಯ ತುಂಬಿ ನ್ಯಾಯ ದೊರಕಿಸಿಕೊಡುವಲ್ಲಿ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಮೇಘನಾ, ವಕೀಲರ ಸಂಘದ ಕಾರ್ಯದರ್ಶಿ ಕೃಷ್ಣದೇವರಾಯಲು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ಮಹಮ್ಮದ್ ಗೌಸ್, ವಿಜಯನಗರ/ವಾರ್ತಾಭಾರತಿ

ವಿಜಯನಗರ ಜಿಲ್ಲಾ ವರದಿಗಾರರು

ಮಹಮ್ಮದ್ ಗೌಸ್ ಅವರು ಕಳೆದ ಆರು ವರ್ಷಗಳಿಂದ ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಮಾಧ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ವಿವಿಧ ಮಾಧ್ಯಮ ಚಟುವಟಿಕೆಗಳಲ್ಲಿ ಅನುಭವ ಹೊಂದಿರುವ ಇವರು, ಪ್ರಸ್ತುತ ವಾರ್ತಾಭಾರತಿ ಪತ್ರಿಕೆಯ ವಿಜಯನಗರ ಜಿಲ್ಲಾ ವರದಿಗಾರರಾಗಿ ಸೇವೆ ಸಲ್ಲಿಸುತ್ತಿದ್ದಾರೆ