Vijayanagara | ಕಬ್ಬಿಗೆ 5,500 ರೂ. ದರ ನಿಗದಿಗೆ ಆಗ್ರಹಿಸಿ ಪ್ರತಿಭಟನೆ
ಹೊಸಪೇಟೆ/ವಿಜಯನಗರ: ಕಬ್ಬು ಬೆಳೆಗಾರರಿಗೆ ಪ್ರತಿ ಟನ್ಗೆ 5,500 ರೂ. ದರ ನಿಗದಿಪಡಿಸಬೇಕು ಎಂದು ಆಗ್ರಹಿಸಿ ರಾಜ್ಯಾದ್ಯಂತ ನಡೆಯುತ್ತಿರುವ ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿ, ವಿಜಯನಗರ ಜಿಲ್ಲೆಯ ರೈತರು ಬುಧವಾರ ಹೊಸಪೇಟೆಯ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ವಾಸುದೇವ ಮೇಟಿ ಬಣದ ರೈತ ಸಂಘದ ವತಿಯಿಂದ ಜಿಲ್ಲಾಧ್ಯಕ್ಷ ಸಿ.ಎ. ಗಾಳೆಪ್ಪ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ, ಕಬ್ಬು ಬೆಳೆಗಾರರಿಗೆ ನ್ಯಾಯಯುತ ದರ ನಿಗದಿಪಡಿಸುವಂತೆ ರಾಜ್ಯ ಮತ್ತು ಕೇಂದ್ರ ಸರ್ಕಾರಗಳನ್ನು ಒತ್ತಾಯಿಸಲಾಯಿತು.
ಕಬ್ಬು ಬೆಳೆಗಾರರಿಗೆ ಕೇಂದ್ರ ಸರ್ಕಾರ ಕನಿಷ್ಠ ಬೆಂಬಲ ಬೆಲೆ (ಎಂಎಸ್ಪಿ) ನಿಗದಿಪಡಿಸಬೇಕು. ಸರ್ಕಾರ ದರ ನಿಗದಿಪಡಿಸುವವರೆಗೆ ಸಕ್ಕರೆ ಕಾರ್ಖಾನೆಗಳನ್ನು ಪ್ರಾರಂಭಿಸಲು ಅವಕಾಶ ನೀಡಬಾರದು. ಕೆಲವು ಕಾರ್ಖಾನೆಗಳು ರೈತರಿಗೆ ವಿವಿಧ ಆಮಿಷಗಳನ್ನು ಒಡ್ಡಿ, ಮನವೊಲಿಸುವ ಮೂಲಕ ಕಬ್ಬು ಅರೆಯುವ ಕಾರ್ಯ ಆರಂಭಿಸುತ್ತಿರುವುದನ್ನು ತಡೆಯಬೇಕು. ರಾಜ್ಯದ ಎಲ್ಲ ಕಬ್ಬು ಬೆಳೆಗಾರರಿಗೂ ನ್ಯಾಯ ದೊರಕಿಸಿಕೊಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ರೈತ ಸಂಘದ ಜಿಲ್ಲಾಧ್ಯಕ್ಷ ಸಿ.ಎ. ಗಾಳೆಪ್ಪ, ಕಬ್ಬು ಬೆಳೆಗಾರರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಹೋರಾಟ ನಡೆಯುತ್ತಿದೆ. ರೈತರ ಬೇಡಿಕೆಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ, ನ್ಯಾಯಯುತ ದರ ನಿಗದಿಪಡಿಸಬೇಕು. ಇಲ್ಲವಾದಲ್ಲಿ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು ಎಂದು ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಗೆ ಎಚ್ಚರಿಕೆ ನೀಡಿದರು.
ರಾಜ್ಯದ ವಿವಿಧೆಡೆ ರಾಷ್ಟ್ರೀಯ ಹೆದ್ದಾರಿಗಳಲ್ಲಿರುವ ಟೋಲ್ಗಳನ್ನು ಬಂದ್ ಮಾಡಿ ಪ್ರತಿಭಟನೆ ನಡೆಸಲಾಗುತ್ತಿದೆ. ಕಬ್ಬು ಬೆಳೆಗಾರರ ಬೇಡಿಕೆಗಳು ಈಡೇರುವವರೆಗೂ ಹೋರಾಟದಿಂದ ಹಿಂದೆ ಸರಿಯುವುದಿಲ್ಲ ಎಂದು ರೈತ ಸಂಘದ ಮುಖಂಡರು ಎಚ್ಚರಿಸಿದರು.