Vijayanagara | ಪಾರದರ್ಶಕ ಆಡಳಿತಕ್ಕೆ ಮಾಹಿತಿ ಹಕ್ಕು ಕಾಯ್ದೆ ಪರಿಣಾಮಕಾರಿ ಅಸ್ತ್ರ: ಡಿಸಿ ಕವಿತಾ ಎಸ್.ಮನ್ನಿಕೇರಿ
ಮಾಹಿತಿ ಹಕ್ಕು ಕಾಯ್ದೆ ಕುರಿತು ಸಂವಾದ ಕಾರ್ಯಕ್ರಮ
ವಿಜಯನಗರ (ಹೊಸಪೇಟೆ) : ಮಾಹಿತಿ ಹಕ್ಕು ಕಾಯ್ದೆ (ಆರ್‌ಟಿಐ) ಅಡಿ ಎದುರಾಗುವ ಸವಾಲುಗಳು, ಗೊಂದಲಗಳು ಹಾಗೂ ಕಾಯ್ದೆಯ ದುರುಪಯೋಗದ ಕುರಿತು ಅಧಿಕಾರಿಗಳಿಗೆ ಸ್ಪಷ್ಟ ಅರಿವು ಮೂಡಿಸುವ ಉದ್ದೇಶದಿಂದ ಕಾರ್ಯಾಗಾರ ಆಯೋಜಿಸಲಾಗಿದ್ದು, ಸಾರ್ವಜನಿಕ ಮಾಹಿತಿ ಅಧಿಕಾರಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಹೇಳಿದರು.
ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸಾರ್ವಜನಿಕ ಮಾಹಿತಿ ಅಧಿಕಾರಿಗಳಿಗಾಗಿ ಆಯೋಜಿಸಿದ್ದ ಮಾಹಿತಿ ಹಕ್ಕು ಕಾಯ್ದೆ ಕುರಿತ ಕಾರ್ಯಾಗಾರ ಹಾಗೂ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಮಾಹಿತಿ ಹಕ್ಕು ಕಾಯ್ದೆಯು ಆಡಳಿತ ವ್ಯವಸ್ಥೆಯಲ್ಲಿ ಪಾರದರ್ಶಕತೆ ತರುವುದರ ಜೊತೆಗೆ ಸರ್ಕಾರದ ಯೋಜನೆಗಳು ಮತ್ತು ಕಾರ್ಯಕ್ರಮಗಳು ನಿಗದಿತ ಉದ್ದೇಶದಂತೆ ಅನುಷ್ಠಾನಗೊಳ್ಳುತ್ತಿವೆಯೇ ಎಂಬುದನ್ನು ಸಾರ್ವಜನಿಕರು ತಿಳಿದುಕೊಳ್ಳಲು ಅವಕಾಶ ಕಲ್ಪಿಸಿರುವ ಮಹತ್ವದ ಕಾನೂನು ಅಸ್ತ್ರವಾಗಿದೆ. ಹೀಗಾಗಿ ಅಧಿಕಾರಿಗಳು ಕಾಯ್ದೆಯ ನಿಯಮಗಳನ್ನು ಸಮರ್ಪಕವಾಗಿ ಅರಿತು ಅತ್ಯಂತ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.
ಕಾನೂನಿನಲ್ಲಿ ನಿಗದಿಪಡಿಸಿರುವ ಪ್ರಕ್ರಿಯೆಯನ್ನು ಸರಿಯಾಗಿ ಪಾಲಿಸಿದರೆ ಸಾರ್ವಜನಿಕರಿಗೆ ಮಾಹಿತಿ ನೀಡುವ ಸಂದರ್ಭದಲ್ಲಿ ಅಧಿಕಾರಿಗಳು ಯಾವುದೇ ರೀತಿಯ ಭಯ ಅಥವಾ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ. ಅರ್ಜಿದಾರರು ಕಾನೂನುಬದ್ಧವಾಗಿ ಹಾಗೂ ಸಾರ್ವಜನಿಕ ಹಿತಾಸಕ್ತಿಯಿಂದ ಮಾಹಿತಿ ಕೇಳಿದಲ್ಲಿ, ನಿಗದಿತ ಅವಧಿಯೊಳಗೆ ಸಂಬಂಧಿಸಿದ ಮಾಹಿತಿಯನ್ನು ಒದಗಿಸುವುದು ಅಧಿಕಾರಿಗಳ ಕರ್ತವ್ಯವಾಗಿದೆ ಎಂದು ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದರು.
ಕೆಲವೊಮ್ಮೆ ಅಧಿಕಾರಿಗಳ ಮೇಲೆ ಒತ್ತಡ ಹೇರುವ ಅಥವಾ ದುರುದ್ದೇಶದಿಂದಲೂ ಮಾಹಿತಿ ಹಕ್ಕು ಅರ್ಜಿಗಳನ್ನು ಸಲ್ಲಿಸುವ ಸಾಧ್ಯತೆಗಳಿವೆ. ಇಂತಹ ಸಂದರ್ಭಗಳಲ್ಲಿ ಅಧಿಕಾರಿಗಳು ಆತಂಕಪಡದೆ, ಕಾಯ್ದೆಯಡಿ ತಮ್ಮ ಕರ್ತವ್ಯ ಮತ್ತು ಅಧಿಕಾರಗಳನ್ನು ಅರಿತು ಕಾನೂನುಬದ್ಧವಾಗಿ ಕ್ರಮವಹಿಸಬೇಕು. ಅರ್ಜಿಯ ಸ್ವರೂಪ, ಕೇಳಿರುವ ಮಾಹಿತಿಯ ವ್ಯಾಪ್ತಿ ಹಾಗೂ ಕಾಯ್ದೆಯ ನಿಯಮಾನುಸಾರ ಮಾಹಿತಿ ನೀಡಬೇಕು ಎಂದು ಸಲಹೆ ನೀಡಿದರು.
ಮಾಹಿತಿ ಹಕ್ಕು ಕಾಯ್ದೆಯನ್ನು ಕೇವಲ ಅರ್ಜಿದಾರರ ಹಕ್ಕು ಎಂಬ ದೃಷ್ಟಿಯಿಂದ ಮಾತ್ರ ನೋಡದೆ, ಜವಾಬ್ದಾರಿಯುತ ಆಡಳಿತ, ಪಾರದರ್ಶಕತೆ ಹಾಗೂ ಸಾರ್ವಜನಿಕರೊಂದಿಗೆ ಸರ್ಕಾರದ ವಿಶ್ವಾಸವನ್ನು ಬಲಪಡಿಸುವ ವ್ಯವಸ್ಥೆಯಾಗಿ ಅಧಿಕಾರಿಗಳು ಅರ್ಥೈಸಿಕೊಳ್ಳಬೇಕು. ಇದಕ್ಕಾಗಿ ಮಾಹಿತಿ ಹಕ್ಕು ಕಾಯ್ದೆಯ ಕುರಿತು ಪರಿಣಿತಿ ಹೊಂದಿರುವ ತಜ್ಞರು ಕಾರ್ಯಾಗಾರದಲ್ಲಿ ಭಾಗವಹಿಸಿದ್ದು, ಅಧಿಕಾರಿಗಳು ಕಾಯ್ದೆಗೆ ಸಂಬಂಧಿಸಿದ ಯಾವುದೇ ಸಂದೇಹಗಳಿದ್ದರೂ ಹಿಂಜರಿಕೆಯಿಲ್ಲದೆ ಪ್ರಶ್ನಿಸಿ ಸ್ಪಷ್ಟತೆ ಪಡೆದುಕೊಳ್ಳಬೇಕು ಎಂದು ಹೇಳಿದರು.
ಕಾರ್ಯಾಗಾರದಲ್ಲಿ ಕೃಷಿ ಇಲಾಖೆಯ ನಿವೃತ್ತ ಜಂಟಿ ನಿರ್ದೇಶಕ ವೆಂಕಟರವಣಪ್ಪ ಮಾಹಿತಿ ಹಕ್ಕು ಕಾಯ್ದೆಯ ಕುರಿತು ವಿಶೇಷ ಉಪನ್ಯಾಸ ನೀಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗರಿಮಾ ಪನ್ವಾರ್, ಅಪರ ಜಿಲ್ಲಾಧಿಕಾರಿ ಪಿ.ಎನ್. ಲೋಕೇಶ್ ಸೇರಿದಂತೆ ವಿವಿಧ ಇಲಾಖೆಗಳ ಸಾರ್ವಜನಿಕ ಮಾಹಿತಿ ಅಧಿಕಾರಿಗಳು ಉಪಸ್ಥಿತರಿದ್ದರು.